ಸಾರಾಂಶ
ತುಮಕೂರು: ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಬಿಜೆಪಿ, ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಜಿಲ್ಲೆಯ ಕಾರ್ಯಕರ್ತರು ತಂಡತಂಡವಾಗಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಇದಕ್ಕಾಗಿ ಎಲ್ಲಾ ತಾಲೂಕುಗಳ ಪ್ರಮುಖರು ಸಂಘಟನಾ ಸಭೆ ನಡೆಸಿ ಪಾದಯಾತ್ರೆಗೆ ಸಿದ್ಧರಾಗಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ತಿಳಿಸಿದ್ದಾರೆ.ಆ.6 ರಂದು ತುಮಕೂರು, ತುಮಕೂರು ಗ್ರಾಮಾಂತರ ಹಾಗೂ ಗುಬ್ಬಿ ಕ್ಷೇತ್ರದ ಕಾರ್ಯಕರ್ತರ ತಂಡಗಳು ಪಾದಯಾತ್ರೆಯಲ್ಲಿ ಭಾಗವಹಿಸಲಿವೆ. ಆ.7ರಂದು ಚಿಕ್ಕನಾಯಕನಹಳ್ಳಿ, ತುರುವೇಕೆರೆ ಹಾಗೂ ತಿಪಟೂರು ಕ್ಷೇತ್ರದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವರು ಎಂದರು.ಇದರ ಅಂಗವಾಗಿ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ವಾರ್ಡ್ ಪ್ರಮುಖರ ಸಭೆ ನಡೆಸಿದರು. ತುಮಕೂರು ನಗರ ಕ್ಷೇತ್ರದಿಂದ ಸಾವಿರಕ್ಕೂ ಹೆಚ್ಚು ಜನ ಪಾದಯಾತ್ರೆಯಲ್ಲಿ ಭಾಗವಹಿಸಲು ವ್ಯವಸ್ಥೆ ಮಾಡಿದ್ದು, ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.