ಕನ್ನಡಪ್ರಭ ವಾರ್ತೆ, ತುಮಕೂರು
ಮತಗಟ್ಟೆ ಮಟ್ಟದಲ್ಲಿ ತಮ್ಮ ರಾಜಕೀಯ ಪಕ್ಷದ ಬೂತ್ ಮಟ್ಟದ ಏಜೆಂಟರುಗಳನ್ನು ನೇಮಿಸಿ ನಿಗದಿತ ನಮೂನೆಯಲ್ಲಿ ಮಾಹಿತಿ ನೀಡುವಂತೆ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಕುರಿತಂತೆ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಅವರು, ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳು ತುಮಕೂರು ಜಿಲ್ಲೆಯ ಮತಗಟ್ಟೆ ಮಟ್ಟದಲ್ಲಿ ತಮ್ಮ ಪಕ್ಷದ ಮತಗಟ್ಟೆ ಏಜೆಂಟರನ್ನು ನಿಯಮಾನುಸಾರ ನೇಮಿಸಿ ನಿಗದಿತ ನಮೂನೆಯಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ತಮ್ಮ ಪಕ್ಷದ ಏಜೆಂಟರು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಮನ್ವಯ ಮಾಡಿಕೊಂಡು ಸಹಕರಿಸಬೇಕು ಎಂದು ಅವರು ತಿಳಿಸಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಕಳೆದ 9 ದಿನಗಳಲ್ಲಿ ಶೇ. 86.92ರಷ್ಟು ಗಣತಿ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದೆ. ವಿತರಣೆ ಕಾರ್ಯವನ್ನು ಮುಂದಿನ 2 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು. ಭರ್ತಿ ಮಾಡಿದ ನಮೂನೆಗಳನ್ನು ಈಗಾಗಲೇ ಹಿಂಪಡೆಯಲು ಆರಂಭಿಸಲಾಗಿದ್ದು, ಈವರೆಗೆ ಶೇ.6.2ರಷ್ಟು ನಮೂನೆಗಳನ್ನು ಗಣಕೀಕರಣಗೊಳಿಸುವ ಕಾರ್ಯವು ಮುಗಿದಿದೆ ಎಂದರು.ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜುಲೈ 29ರಂದು ಈ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಎಲ್ಲಾ ರಾಜಕೀಯ ಪಕ್ಷಗಳು ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು. ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.
