ರಾಜ್ಯದಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆಂಬ ಬೇಡಿಕೆ ಹಲವು ದಶಕಗಳಿಂದ ಕೇಳಿಬರುತ್ತಿದ್ದರೂ ಇದುವರೆಗೆ ಯಾವುದೇ ಸರ್ಕಾರಗಳು ಈ ಕುರಿತು ಗಂಭೀರ ಕ್ರಮ ಕೈಗೊಂಡಿಲ್ಲ ಎಂಬ ಅಸಮಾಧಾನವನ್ನು ವ್ಯಕ್ತಪಡಿಸಿದರು. ಮಡಿವಾಳ ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ಹಿಂದುಳಿದಿದ್ದರೂ ಸರಿಯಾದ ಮಾನ್ಯತೆ ದೊರೆಯದೇ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಆರೋಪಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಮಾರ್ಚ್ ೧೬ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ನಿರ್ದೇಶಕ ರವಿಕುಮಾರ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಉತ್ತರ ಕರ್ನಾಟಕ ಮಡಿವಾಳರ ಸಂಘದ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಸಮುದಾಯದ ಮುಖಂಡರು ಹಾಗೂ ಸಾವಿರಾರು ಕುಲಬಾಂಧವರು ಸೇರಿ ೧೦ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಜಗದ್ಗುರು ಡಾ. ಶ್ರೀ ಶ್ರೀ ಬಸವ ಮಾಚಿದೇವ ಮಹಾಸ್ವಾಮೀಜಿ, ಚಿತ್ರದುರ್ಗದ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದ ದಿವ್ಯ ಸಾನಿಧ್ಯದಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಶ್ರೀಕ್ಷೇತ್ರ ಕರಿಂಜೆದ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿಗಳ ಆಶೀರ್ವಾದದೊಂದಿಗೆ ಈ ಹೋರಾಟ ನಡೆಯಲಿದೆ ಎಂದರು. ರಾಜ್ಯದಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆಂಬ ಬೇಡಿಕೆ ಹಲವು ದಶಕಗಳಿಂದ ಕೇಳಿಬರುತ್ತಿದ್ದರೂ ಇದುವರೆಗೆ ಯಾವುದೇ ಸರ್ಕಾರಗಳು ಈ ಕುರಿತು ಗಂಭೀರ ಕ್ರಮ ಕೈಗೊಂಡಿಲ್ಲ ಎಂಬ ಅಸಮಾಧಾನವನ್ನು ವ್ಯಕ್ತಪಡಿಸಿದರು. ಮಡಿವಾಳ ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ಹಿಂದುಳಿದಿದ್ದರೂ ಸರಿಯಾದ ಮಾನ್ಯತೆ ದೊರೆಯದೇ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಆರೋಪಿಸಿದರು. ೨೦೦೯ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕಾಲದಲ್ಲಿ ಮಡಿವಾಳ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಲು ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಡಾ. ಅನ್ನಪೂರ್ಣ ಅವರನ್ನು ನೇಮಿಸಲಾಗಿತ್ತು. ಅವರು ಎರಡು ವರ್ಷಗಳ ಕಾಲ ರಾಜ್ಯದ ಸುಮಾರು ೨೮ ಜಿಲ್ಲೆಗಳಿಗೆ ಭೇಟಿ ನೀಡಿ ಸಮಗ್ರ ಕುಲಶಾಸ್ತ್ರ ಅಧ್ಯಯನ ನಡೆಸಿ ೨೦೧೧ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಆ ವರದಿಯಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಸ್ಪಷ್ಟ ಶಿಫಾರಸು ಮಾಡಲಾಗಿದೆ.ಆದರೂ ಈ ವರದಿ ಇಂದಿಗೂ ಜಾರಿಗೆ ಬಂದಿಲ್ಲ ಎಂದು ದೂರಿದರು. ೨೦೨೨ರಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿ ಅವರು ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಲು ಸೂಚಿಸಿದ್ದರೂ ವಿಧಾನಸಭೆಯಲ್ಲಿ ಮಂಡನೆಯಾಗುವ ಮೊದಲು ಚುನಾವಣೆ ಘೋಷಣೆಯಾಗಿದ್ದು ಪ್ರಕ್ರಿಯೆ ಮುಂದುವರಿಯಲಿಲ್ಲ. ಪ್ರಸ್ತುತ ಈ ವರದಿ ಸಮಾಜ ಕಲ್ಯಾಣ ಇಲಾಖೆಯ ಕಡತದಲ್ಲೇ ಬಾಕಿ ಉಳಿದಿದೆ ಎಂದು ದೂರಿದರು. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಸಂಘಟನೆಗಳು ಒಟ್ಟುಗೂಡಿ ಪ್ರೊಫೆಸರ್ ಡಾ. ಅನ್ನಪೂರ್ಣ ವರದಿಯನ್ನು ಜಾರಿಗೆ ತರಲು ರಾಜ್ಯದ ೨೨೪ ಶಾಸಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾಗಿ ತಿಳಿಸಿದೆ. ಈಗಾಗಲೇ ೧೯ ಮಂತ್ರಿಗಳು ಮತ್ತು ೧೩೭ ಶಾಸಕರು ಸೇರಿ ಒಟ್ಟು ೧೫೬ ಶಿಫಾರಸ್ಸು ಪತ್ರಗಳನ್ನು ನೀಡಿದ್ದು, ಅವುಗಳನ್ನು ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಿಗೆ ಸಲ್ಲಿಸಲಾಗಿದೆ ಎಂದು ಸಂಘಟನೆ ವಿವರಿಸಿದೆ.ಇಷ್ಟಾದರೂ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯ ತೋರಿರುವುದರಿಂದ ಸಮುದಾಯದ ಹಕ್ಕಿಗಾಗಿ ಅಹೋರಾತ್ರಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದರು. ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದ ಸಂಘಟನೆಗಳ ಪದಾಧಿಕಾರಿಗಳು, ಮಡಿಕಟ್ಟೆಗಳ ಅಧ್ಯಕ್ಷರು, ಕಾರ್ಯಕರ್ತರು ಹಾಗೂ ಸಮುದಾಯದ ಸರ್ಕಾರಿ ನೌಕರರು, ನಿವೃತ್ತ ನೌಕರರು, ವ್ಯಾಪಾರಿಗಳು ಸೇರಿದಂತೆ ಎಲ್ಲಾ ಕುಲಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ಹೋರಾಟವನ್ನು ಬಲಪಡಿಸಬೇಕು ಎಂದು ಇದೆ ವೇಳೆ ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಸಂಘದ ಕುಮಾರ್, ಚಂದ್ರಶೇಖರ್, ಮಲ್ಲೇಶ್, ಜಯಣ್ಣ, ಲೋಹಿತ್, ಸೋಮಣ್ಣ, ರಘು ಇತರರು ಉಪಸ್ಥಿತರಿದ್ದರು.