ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ವಿಶೇಷಚೇತನರು ಅಂಗವೈಕಲ್ಯತೆಯನ್ನು ಮರೆತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡುತ್ತಿದ್ದು, ಅವರ ಬದುಕಿಗೆ ಪೂರಕವಾಗುವ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಇಡೀ ಸಮಾಜ ಅವರ ಜೊತೆಗೂಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.ಅವರು ಗುರುವಾರ ಇಲ್ಲಿನ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಬೆಂಗಳೂರಿನ ಎಪಿಡಿ ಸಂಸ್ಥೆಗಳ ಸಹಯೋಗದಲ್ಲಿ ನಡೆದ ವಿಶ್ವ ಸುಲಭ ಲಭ್ಯತಾ ಅರಿವು ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರವು ವಿಶೇಷ ಚೇತನರ ಕಲ್ಯಾಣಕ್ಕಾಗಿ ನೀಡುವ ಅನುದಾನವನ್ನು ಶೇ.5ರಷ್ಟು ಹೆಚ್ಚಿಸಿದ್ದು, ಸ್ಥಳೀಯ ಸಂಸ್ಥೆ ಹಾಗೂ ಗ್ರಾ.ಪಂ. ವತಿಯಿಂದ ಕ್ರಿಯಾಯೋಜನೆ ರೂಪಿಸಿವಾಗ ಶೇ.5ರಷ್ಟು ಅನುದಾನವನ್ನು ಮೀಸಲಿರಿಸಿ, ವಿಕಲಚೇತನರ ಕಲ್ಯಾಣಕ್ಕಾಗಿ ಅಗತ್ಯವಿರುವ ಸವಲತ್ತು ಮತ್ತು ಸಲಕರಣೆಗಳನ್ನು ಒದಗಿಸಲಾಗುವುದು. ವಿಶೇಷ ಚೇತನರು ಇದರ ಪ್ರಯೋಜನ ಪಡೆಯಬೇಕೆಂದರು.ರೆಡ್‌ಕ್ರಾಸ್ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯ್ದೆ - 2016ರ ಸೆಕ್ಷನ್ 40-46ರ ಪ್ರಕಾರ ಎಲ್ಲ ಸಾರ್ವಜನಿಕ ಕಟ್ಟಡಗಳು ವಿಕಲಚೇತನ ವ್ಯಕ್ತಿಗಳಿಗೆ ಮುಕ್ತ ವಾತಾವರಣ ಹಾಗೂ ಎಲ್ಲ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಬೇಕಾಗಿರುತ್ತದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಸುಲಭ ಲಭ್ಯತೆಯ ವಿಶ್ವ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ನಿರಂಜನ ಭಟ್ ಎಂ., ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸೌಲಭ್ಯಗಳ ಬಗ್ಗೆ ಉಪನ್ಯಾಸ ನೀಡಿದರು.ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ಸಿ.ಕೆ., ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ರತ್ನಾ, ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ., ಎ.ಪಿ.ಡಿ. ಸಂಸ್ಥೆಯ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಹರೀಶ್ ಶೆಟ್ಟಿ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ರಾಘವೇಂದ್ರ ಪ್ರಭು ಕರ್ವಾಲ್ ನಿರೂಪಿಸಿ, ವಂದಿಸಿದರು.