ಮತದಾನಕ್ಕೆ ಬರುವವರಿಗೆ ವಾಯವ್ಯ ಸಾರಿಗೆಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

| Published : May 03 2024, 01:06 AM IST

ಮತದಾನಕ್ಕೆ ಬರುವವರಿಗೆ ವಾಯವ್ಯ ಸಾರಿಗೆಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆಯ ಪ್ರಯುಕ್ತ ಜಿಲ್ಲೆಯಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಮತದಾನದ ಹಕ್ಕು ಚಲಾಯಿಸಲು ಆಗಮಿಸುವವರು ಹಾಗೂ ಹಿಂದಿರುಗುವವರು ಸೇರಿದಂತೆ ಮೇ 3ರಿಂದ 7ರ ವರೆಗಿನ‌ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ನಿರೀಕ್ಷಿಸಲಾಗಿದೆ.

ಹುಬ್ಬಳ್ಳಿ:

ಲೋಕಸಭೆ ಚುನಾವಣೆ ಮತದಾನಕ್ಕಾಗಿ ದೂರದ ಊರುಗಳಿಂದ ಆಗಮಿಸುವವರು ಹಾಗೂ ಇತರೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಲೋಕಸಭಾ ಚುನಾವಣೆಯ ಪ್ರಯುಕ್ತ ಜಿಲ್ಲೆಯಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಮತದಾನದ ಹಕ್ಕು ಚಲಾಯಿಸಲು ಆಗಮಿಸುವವರು ಹಾಗೂ ಹಿಂದಿರುಗುವವರು ಸೇರಿದಂತೆ ಮೇ 3ರಿಂದ 7ರ ವರೆಗಿನ‌ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ನಿರೀಕ್ಷಿಸಲಾಗಿದೆ. ಅವರ ಅನುಕೂಲಕ್ಕಾಗಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು, ಪುಣೆ, ಗೋವಾ ಮತ್ತಿತರ ಪರ ಊರುಗಳಲ್ಲಿ ನೆಲೆಸಿರುವ ಸರ್ಕಾರಿ, ಖಾಸಗಿ ಉದ್ಯೋಗಿಗಳು, ಉದ್ಯಮಿಗಳು ಮತ್ತಿತರ ಹಲವರು ಮತದಾನ ಮಾಡಲು ಸ್ವಂತ ಊರುಗಳಿಗೆ ಆಗಮಿಸಲಿದ್ದಾರೆ. ಅವರ ಅನುಕೂಲಕ್ಕಾಗಿ ಮೇ 3ರಿಂದ 6 ರ ವರೆಗೆ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಬೆಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಗೆ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಅದೇ ರೀತಿ ಮತದಾನ ಮುಗಿಸಿ ತಮ್ಮ ಕಾರ್ಯ ಕ್ಷೇತ್ರಗಳಿಗೆ ಹಿಂದಿರುಗುವವರ ಅನುಕೂಲಕ್ಕಾಗಿ ಮೇ 7ರಂದು ಹುಬ್ಬಳ್ಳಿಯಿಂದ ಬೆಂಗಳೂರು, ಪುಣೆ, ಗೋವಾ, ಮಂಗಳೂರು, ವಿಜಯಪುರ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಈ ಅವಧಿಯಲ್ಲಿ ಜಿಲ್ಲೆಯೊಳಗೆ ವಿವಿಧ ಸ್ಥಳ ಹಾಗೂ ಅಕ್ಕಪಕ್ಕದ ಜಿಲ್ಲೆಗಳ ನಡುವೆಯೂ ಸಹ ಪ್ರಯಾಣಿಕರ ಹೆಚ್ಚಳಕ್ಕೆ ತಕ್ಕಂತೆ ಹೆಚ್ಚುವರಿ ಬಸ್‌ಗಳನ್ನು ಬಿಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಮುಂಗಡ ಬುಕಿಂಗ್; ರಿಯಾಯಿತಿ:

ಹಬ್ಬದ ವಿಶೇಷ ಬಸ್‌ಗಳಿಗೆ https://www.ksrtc.in ಅಥವಾ KSRTC Mobile App ಹಾಗೂ ಬಸ್ ನಿಲ್ದಾಣಗಳಲ್ಲಿ ಮುಂಗಡ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಒಂದೇ ಟಿಕೆಟ್ ನಲ್ಲಿ ನಾಲ್ಕು ಅಥವಾ ಹೆಚ್ಚಿನ ಸೀಟುಗಳನ್ನು ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇ. 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಮತ್ತು ಹಿಂದಿರುಗುವ ಪ್ರಯಾಣಕ್ಕೆ ಒಂದೇ ಟಿಕೆಟ್ ಪಡೆದರೆ ಹಿಂದಿರುಗುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.