ಕ್ಷೇತ್ರದ ಜನರ ಋಣ ತೀರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್ ಹೇಳಿದರು.

ಶಿಗ್ಗಾಂವಿ: ಕ್ಷೇತ್ರದ ಜನರ ಋಣ ತೀರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್ ಹೇಳಿದರು.

ತಾಲೂಕಿನ ಕುನ್ನೂರು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಅಧಿಕಾರ ಶಾಶ್ವತವಲ್ಲ, ನಾವು ಮಾಡುವ ಅಭಿವೃದ್ಧಿ ಕಾರ್ಯಗಳು ಶಾಶ್ವತವಾಗಿರುತ್ತವೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿದ್ದು, ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.

ಕುನ್ನೂರು ಗ್ರಾಮದ ಮೌಲಾನಾ ಆಜಾದ್ ಶಾಲೆಯು ಪ್ರಸ್ತುತ 6ರಿಂದ 10ನೇ ತರಗತಿವರೆಗೆ ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಶಾಲೆಗೆ ಕಾಂಪೌಂಡ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಶಾಲೆಯ ಅಭಿವೃದ್ಧಿಗೆ ಈಗಾಗಲೇ 2 ಕೋಟಿ ಅನುದಾನ ನೀಡಲಾಗಿದೆ. ಮುಂದಿನ ಬಜೆಟ್‌ನಲ್ಲಿ ಹೆಚ್ಚುವರಿಯಾಗಿ 5 ಕೋಟಿ ಅನುದಾನ ಒದಗಿಸಿ, ಶಾಲೆಯನ್ನು ಎಲ್‌ಕೆಜಿಯಿಂದ ಪಿಯುಸಿವರೆಗೆ ಮೇಲ್ದರ್ಜೆಗೇರಿಸುವ ಉದ್ದೇಶವಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ಪಡೆಯಲು ಅನುಕೂಲವಾಗಲಿದೆ ಎಂದರು.

ವಾಲ್ಮೀಕಿ ಭವನ ನಿರ್ಮಾಣಕ್ಕೆ 20 ಲಕ್ಷ ಅನುದಾನ ನೀಡಲಾಗಿದ್ದು, ಅಗತ್ಯವಿದ್ದಲ್ಲಿ ಹೆಚ್ಚುವರಿ ಅನುದಾನವನ್ನೂ ಒದಗಿಸಲಾಗುವುದು. ಮೂರು-ನಾಲ್ಕು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸಚಿವ ಸತೀಶ ಜಾರಕಿಹೊಳಿ ಅವರಿಂದ ಉದ್ಘಾಟನೆ ನೆರವೇರಿಸಲಾಗುವುದು. ಈಗಾಗಲೇ ಹಡಪದ ಅಪ್ಪಣ್ಣ ದೇವಸ್ಥಾನದ ಸನ್ನಿಧಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೂ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ತಿಳಿಸಿದರು.

ಪ್ರತಿ ಗ್ರಾಮ ಪಂಚಾಯಿತಿಗೆ ತಲಾ 3 ಕೋಟಿ ಅನುದಾನ ಒದಗಿಸುವ ಮೂಲಕ ಗ್ರಾಮೀಣ ಪ್ರದೇಶಗಳ ರಸ್ತೆಗಳನ್ನು ಕಾಂಕ್ರೀಟ್ ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸುವ ಸಂಕಲ್ಪ ಹೊಂದಲಾಗಿದೆ. ಮಳೆಗಾಲದಲ್ಲಿ ಗ್ರಾಮಸ್ಥರು ಕೆಸರು ರಸ್ತೆಯಲ್ಲಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಬಾರದು. ಪಕ್ಷ, ಜಾತಿ ಹಾಗೂ ಸಮಾಜದ ಭೇದವಿಲ್ಲದೆ ಎಲ್ಲ ಗ್ರಾಮಗಳಿಗೂ ಉತ್ತಮ ರಸ್ತೆ ಮತ್ತು ಮೂಲಸೌಕರ್ಯ ಕಲ್ಪಿಸಲಾಗುವುದು ಎಂದರು.

ತಾಲೂಕಿನಲ್ಲಿ ಈಗಾಗಲೇ 8 ಸಾವಿರ ಪಟ್ಟಾಗಳನ್ನು ವಿತರಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳ ಅಭಿವೃದ್ಧಿ, ವಿವಿಧ ಸಮಾಜಗಳ ಸಮುದಾಯ ಭವನ ಹಾಗೂ ಮಠಗಳ ನಿರ್ಮಾಣಕ್ಕೂ ಅನುದಾನ ಒದಗಿಸಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಕುನ್ನೂರು ಗ್ರಾಮದ ಹಡಪದ ಸಮಾಜದ ರಾಜ್ಯ ಮಾಧ್ಯಮ ಪ್ರತಿನಿಧಿ ಮಲ್ಲಿಕಾರ್ಜುನ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಗ್ಯಾರಂಟಿ ಸಮಿತಿ ಅದ್ಯಕ್ಷ ಶೇಖಪ್ಪ ಮಣಕಟ್ಟಿ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುಡ್ಡಪ್ಪ ಜಲದಿ, ಮುಖಂಡರಾದ ಆನಂದ ಲಮಾಣಿ, ಅಣ್ಣಪ್ಪ ಲಮಾಣಿ ಸೇರಿದಂತೆ ಅನೇಕರು ಇದ್ದರು.

ಶಿಗ್ಗಾಂವಿ ಪಟ್ಟಣದಲ್ಲಿ 4 ಕೋಟಿ, ದುಂಡಶಿ ಗ್ರಾಮದಲ್ಲಿ 1 ಕೋಟಿ 8 ಲಕ್ಷ, ದುಂಡಶಿ ತಾಂಡಾದಲ್ಲಿ 15 ಲಕ್ಷ ಹಾಗೂ ಕುನ್ನೂರು ಗ್ರಾಮದಲ್ಲಿ 3 ಕೋಟಿ 60 ಲಕ್ಷ ವೆಚ್ಚದ ಒಟ್ಟು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.