ಗ್ಯಾರಂಟಿ ಯೋಜನೆ ಸಮರ್ಪಕ ತಲುಪಿಸಿ

| Published : Jul 05 2024, 12:48 AM IST

ಸಾರಾಂಶ

ಗ್ಯಾರಂಟಿ ಯೋಜನೆ ಇನ್ನಷ್ಟು ಸಮರ್ಪಕವಾಗಿ ಸಾರ್ವಜನಿಕರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚು ಕಾರ್ಯೋನ್ಮುಖವಾಗಬೇಕಿದೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡುವ ಮೂಲಕ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಯಶಸ್ವಿಯಾಗುವಂತೆ ಮಾಡಬೇಕು

ಲಕ್ಷ್ಮೇಶ್ವರ: ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪುವಂತಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಲಕ್ಷ್ಮೇಶ್ವರ ತಾಲೂಕಾಧ್ಯಕ್ಷ ನಾಗರಾಜ ಮಡಿವಾಳರ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ನಡೆದ ಮೊದಲ ಗ್ಯಾರಂಟಿ ಯೋಜನೆಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆಗಳು ಸಾರ್ವಜನಿಕರ ಬದುಕಿಗೆ ಹೆಚ್ಚು ಅನುಕೂಲಕರವಾಗಿವೆ, ಜನರ ಕಷ್ಟ ನಿವಾರಿಸುವಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ, ಗ್ಯಾರಂಟಿ ಯೋಜನೆ ಇನ್ನಷ್ಟು ಸಮರ್ಪಕವಾಗಿ ಸಾರ್ವಜನಿಕರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚು ಕಾರ್ಯೋನ್ಮುಖವಾಗಬೇಕಿದೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡುವ ಮೂಲಕ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಯಶಸ್ವಿಯಾಗುವಂತೆ ಮಾಡಬೇಕು, ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಲಕ್ಷ್ಮೀ, ಗೃಹಜ್ಯೋತಿ ಹಾಗೂ ವಿದ್ಯಾನಿಧಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ, ಆದ್ದರಿಂದ ಅಧಿಕಾರಿಗಳು ಹೆಚ್ಚು ಪ್ರಯತ್ನಶೀಲರಾಗಿ ಗ್ಯಾರಂಟಿ ಯೋಜನೆಗಳು ಪ್ರತಿಯೊಂದು ಕುಟುಂಬಗಳಿಗೆ ಮುಟ್ಟುವಂತೆ ಮಾಡುವ ಹೊಣೆ ನಿಮ್ಮದಾಗಿದೆ ಎಂದು ಹೇಳಿದರು.

ಈ ವೇಳೆ ತಹಸೀಲ್ದಾರ್‌ ವಾಸುದೇವ ಸ್ವಾಮಿ ಮಾತನಾಡಿ, ಎಲ್ಲ ಇಲಾಖೆಯ ಅಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿವಾರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಈ ವೇಳೆ ತಾಪಂ ಇಓ ಕೃಷ್ಣಪ್ಪ ಧರ್ಮರ ಮಾತನಾಡಿದರು. ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಎಲ್ಲ ಸದಸ್ಯರು ಹಾಜರಿದ್ದರು.