ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ: ಡಿಸಿ ಸೂಚನೆ

| Published : Apr 06 2024, 12:46 AM IST

ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ: ಡಿಸಿ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಮಡಿಕೇರಿಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕುಡಿಯುವ ನೀರಿನ ಪೂರೈಕೆ ಕುರಿತು ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ವೆಂಕಟರಾಜ ಮಾತನಾಡಿ, ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯ ಗಂಭೀರತೆಯನ್ನು ಅಧಿಕಾರಿಗಳು ಅರಿತುಕೊಂಡು ಜನಸಾಮಾನ್ಯರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಲು ಆದ್ಯತೆ ವಹಿಸಬೇಕು ಎಂದು ಸೂಚಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯ ಗಂಭೀರತೆಯನ್ನು ಅಧಿಕಾರಿಗಳು ಅರಿತುಕೊಂಡು ಜನಸಾಮಾನ್ಯರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಲು ಆದ್ಯತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕುಡಿಯುವ ನೀರಿನ ಪೂರೈಕೆ ಕುರಿತು ಶುಕ್ರವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.

ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜಿಗೆ ತಾಲ್ಲೂಕು ಹಂತದಲ್ಲಿ ಟಾಸ್ಕ್ ಪೋರ್ಸ್ ಸಮಿತಿ ಸಭೆಗಳನ್ನು ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದರು.

ಮಳೆಯ ಅಭಾವದಿಂದಾಗಿ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದ್ದು, ಆ ಗ್ರಾಮಗಳಿಗೆ ಅಧಿಕಾರಿಗಳು ತೆರಳಿ ನೀರು ಪೂರೈಕೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ನೀರು ಪೂರೈಕೆ ಮಾಡಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಮುಂದಾಗಬೇಕು. ಈ ಕುರಿತು ಸ್ಥಳೀಯ ಹಂತದ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿವರಿಸಿದರು.

ಲೋಕಸಭಾ ಚುನಾವಣೆಗೆ ಈಗಾಗಲೇ ಅಧಿಸೂಚನೆ ಹೊರಡಿಸಿ ನಾಮಪತ್ರಗಳ ಸ್ವೀಕೃತಿ ಪೂರ್ಣಗೊಂಡಿದೆ. ಚುನಾವಣೆಗೆ ನಿಯೋಜಿತ ಅಧಿಕಾರಿ/ಸಿಬ್ಬಂದಿ ಕಾಲ ಕಾಲಕ್ಕೆ ಚುನಾವಣಾ ಆಯೋಗವು ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಕರ್ತವ್ಯ ಲೋಪ ಸಹಿಸಲಾಗದು ಎಂದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನಾರ್ವಡೆ ಸೇರಿದಂತೆ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು, ಆಯಾಯ ತಾಲೂಕುಗಳ ತಹಸೀಲ್ದಾರರು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಇದ್ದರು.