ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರು
ಏಪ್ರಿಲ್ 26ರಂದು ನಡೆದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮತ ಎಣಿಕೆ ಕಾರ್ಯ ನಡೆಯುವುದರಿಂದ ಮತ ಎಣಿಕೆ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ನ್ಯಾಯಲಯದ ಸಭಾಂಗಣದಲ್ಲಿ ನಡೆದ ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿದ ಅವರು, 8 ಗಂಟೆಗೆ ಮತ ಎಣಿಕೆ ಕಾರ್ಯ ಪ್ರಾರಂಭಗೊಳ್ಳುವುದರಿಂದ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ನಿಗಧಿತ ಸಮಯಕ್ಕೆ ಮತ ಎಣಿಕಾ ಕೇಂದ್ರದಲ್ಲಿ ಹಾಜರಾಗುವಂತೆ ತಿಳಿಸಿದರು.
ಎಣಿಕೆ ಪ್ರಕ್ರಿಯೆ ಪ್ರಾರಂಭಗೊಂಡ ನಂತರದಲ್ಲಿ ಮತ ಎಣಿಕೆ ಏಜೆಂಟ್‌ಗಳು ಶಿಸ್ತುಬದ್ದವಾಗಿ ನಡೆದುಕೊಳ್ಳುವಂತೆ ಎಚ್ಚರವಹಿಸಬೇಕು ಎಂದರು.ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೊಳಪಡುವ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಮಧುಗಿರಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯನ್ನು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಹಾಗೂ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಗುಬ್ಬಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕಾ ಕಾರ್ಯವನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್‌ನಂತೆ ಒಟ್ಟು 112 ಟೇಬಲ್ ಗಳು, ಅಂಚೆ ಮತಪತ್ರ ಹಾಗೂ ಇಟಿಪಿಬಿಎಸ್ ಎಣಿಕೆಗಾಗಿ 19 ಟೇಬಲ್ ಗಳು ಸೇರಿ ಒಟ್ಟು 131 ಟೇಬಲ್‌ಗಳಲ್ಲಿ ಮತ ಎಣಿಕೆಯನ್ನು ನಡೆಸಲಾಗುವುದು. ಅಂಚೆ ಮತಪತ್ರಗಳ ಎಣಿಕೆಗಾಗಿ 2 ಕೊಠಡಿಯಲ್ಲಿ 18 ಎಣಿಕಾ ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಟೇಬಲ್‌ಗೂ ತಲಾ ಒಬ್ಬರು ಸಹಾಯಕ ಚುನಾವಣಾ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಇದಕ್ಕಾಗಿ ಒಟ್ಟು 448 ಎಣಿಕಾ ಮೇಲ್ವಿಚಾರಕರು, ಎಣಿಕಾ ಸಹಾಯಕರು ಹಾಗೂ ಸೂಕ್ಷ್ಮ ವೀಕ್ಷಕರನ್ನು ನಿಯೋಜಿಸಲಾಗಿದ್ದು, ಎಣಿಕಾ ಕಾರ್ಯಕ್ಕೆ ನಿಯೋಜಿಸಿದವರಿಗೆ ಈಗಾಗಲೇ 2 ಹಂತದ ತರಬೇತಿ ನೀಡಲಾಗಿದೆ ಎಂದು ತಿಳಿಸಿದ ಅವರು, ಮಧುಗಿರಿ, ತುಮಕೂರು ಗ್ರಾಮಾಂತರ ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯನ್ನು ತಲಾ 2 ಕೊಠಡಿಗಳಲ್ಲಿ ಉಳಿದ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯನ್ನು ತಲಾ 1 ಕೊಠಡಿಯಲ್ಲಿ ಮಾಡಲಾಗುವುದು. ಪ್ರತಿ ಎಣಿಕಾ ಕೊಠಡಿಗೂ ಗ್ರೇಡ್ ಅಧಿಕಾರಿಯನ್ನು ಸಹಾಯಕ ಚುನಾವಣಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.ಪ್ರತಿ ಎಣಿಕಾ ಸುತ್ತಿನ ಅಂಕಿ ಅಂಶಗಳನ್ನು ಇಟಿಛಿoಡಿe ಸಾಫ್ಟ್ವೇರ್‌ನಲ್ಲಿ ಎಂಟ್ರಿ ಮಾಡಿ ಅಪ್‌ಲೋಡ್ ಮಾಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದ ಮಾಹಿತಿಯನ್ನು ಇಟಿಛಿoಡಿe ಸಾಫ್ಟ್ವೇರ್‌ನಲ್ಲಿ ಅಪ್‌ಲೋಡ್ ಮಾಡಿದ ನಂತರ ಸಾರ್ವಜನಿಕರು ವೀಕ್ಷಿಸಬಹುದಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಪಾಲಿಕೆ ಆಯುಕ್ತೆ ಆಶ್ವಿಜ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಚುನಾವಣಾ ತಹಸೀಲ್ದಾರ್ ರೇಷ್ಮ ಸೇರಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.ಮತ ಎಣಿಕೆ: ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ:
ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಜೂನ್ 4 ರ ಇಂದು ಮತ ಎಣಿಕೆ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ ಎಣಿಕೆಯನ್ನು ಮುಕ್ತ, ನಿಷ್ಪಕ್ಷಪಾತವಾಗಿ ನಡೆಸಲು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮತ ಎಣಿಕೆ ನಡೆಯಲಿರುವ ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮತ್ತು ತುಮಕೂರು ವಿಶ್ವವಿದ್ಯಾಲಯದ ವಿಜ್ಞಾನ ಕಾಲೇಜು ಹಾಗೂ ಸದರಿ ಕಾಲೇಜುಗಳಿಗೆ ಲಗತ್ತಾಗಿರುವ ತುಮಕೂರು ವಿಶ್ವವಿದ್ಯಾಲಯದ ಕಲಾ ಕಾಲೇಜು ಹಾಗೂ ವಿಶ್ವವಿದ್ಯಾನಿಲಯಕ್ಕೆ ಜೂನ್ 4 ರಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶಿಸಿದ್ದಾರೆ.