ಮತದಾನ ಮಾಡದಿರಲು ಆದಿ ದ್ರಾವಿಡ ಸಮಾಜ ಸೇವಾ ಸಂಘ ನಿರ್ಧಾರ

| Published : Apr 13 2024, 01:07 AM IST

ಮತದಾನ ಮಾಡದಿರಲು ಆದಿ ದ್ರಾವಿಡ ಸಮಾಜ ಸೇವಾ ಸಂಘ ನಿರ್ಧಾರ
Share this Article
  • FB
  • TW
  • Linkdin
  • Email

ಸಾರಾಂಶ

ಏ.26 ರಂದು ನಡೆಯುವ ಮೈಸೂರು- ಕೊಡಗು ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡದಿರಲು ನಿರ್ಧರಿಸಿದ್ದಾಗಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಎಚ್.ಎಂ.ಸೋಮಪ್ಪ ತಿಳಿಸಿದ್ದಾರೆ. ತುಳು ಭಾಷಿಕ ಆದಿ ದ್ರಾವಿಡ ಪರಿಶಿಷ್ಟ ಜಾತಿ ಬಾಂಧವರ ಬೇಡಿಕೆಗಳಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದೆ ಇರುವುದರಿಂದಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ತುಳು ಭಾಷಿಕ ಆದಿ ದ್ರಾವಿಡ ಪರಿಶಿಷ್ಟ ಜಾತಿ ಬಾಂಧವರ ಬೇಡಿಕೆಗಳಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದೆ ಇರುವುದರಿಂದ ಏ.26 ರಂದು ನಡೆಯುವ ಮೈಸೂರು- ಕೊಡಗು ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡದಿರಲು ನಿರ್ಧರಿಸಿದ್ದಾಗಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಎಚ್.ಎಂ.ಸೋಮಪ್ಪ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಸುಮಾರು 30 ಸಾವಿರ ಮಂದಿ ತುಳು ಭಾಷಿಕ ಆದಿ ದ್ರಾವಿಡ ಪರಿಶಿಷ್ಟ ಜಾತಿ ಜನರಿದ್ದು, ಎಲ್ಲರೂ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ ಎಂದರು.

ಸಮಸ್ಯೆ ಏನು?:

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ತುಳು ಭಾಷಿಕ ಆದಿ ದ್ರಾವಿಡ ಜಾತಿ ಬಾಂಧವರಿಗೆ 8 ವಿವಿಧ ರೀತಿಯ ‘ಪರಿಶಿಷ್ಟ ಜಾತಿ’ ಪ್ರಮಾಣ ಪತ್ರ ನೀಡಲಾಗುತ್ತಿದ್ದು, ಇದರಿಂದ ತೊಂದರೆ ಎದುರಾಗಿದೆ. ಆದ್ದರಿಂದ ‘ಆದಿ ದ್ರಾವಿಡ’ ಪರಿಶಿಷ್ಟ ಜಾತಿ ಎಂದು ಜಾತಿ ಪ್ರಮಾಣಪತ್ರ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಕಳೆದ ಅನೇಕ ವರ್ಷಗಳಿಂದ ಸಂಘಟನೆ ಮೂಲಕ ಒತ್ತಾಯಿಸುತ್ತಾ ಬರಲಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸರ್ಕಾರ ನಿರ್ದೇಶನ ನೀಡಿದೆ. ಜಿಲ್ಲಾಡಳಿತ ತಾಲೂಕು ಕಚೇರಿಗಳಿಗೆ ಆದೇಶ ಮಾಡಿ ‘ಆದಿ ದ್ರಾವಿಡ’ ಎಂದು ಜಾತಿ ಪ್ರಮಾಣಪತ್ರ ನೀಡಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದೆ. ಆದರೆ ಕೊಡಗು ಜಿಲ್ಲೆಯಲ್ಲಿರುವ ತುಳು ಭಾಷಿಕ ಆದಿ ದ್ರಾವಿಡ ಜನಾಂಗ ಬಾಂಧವರಿಗೆ ಇಲ್ಲಿಯವರೆಗೆ ‘ಆದಿ ದ್ರಾವಿಡ’ ಪರಿಶಿಷ್ಟ ಜಾತಿ ಎಂದು ಜಾತಿ ಪ್ರಮಾಣಪತ್ರ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೊಡಗು ಸೇರಿದಂತೆ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಕ್ಷಿಣ ಕನ್ನಡ, ಕುಂದಾಪುರ ಸೇರಿದಂತೆ ಇತರ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 9 ಲಕ್ಷ ಸಮುದಾಯ ಜನ ಇದ್ದು, ‘ಆದಿ ದ್ರಾವಿಡ’ ಸಮೂಹ ಜಾತಿ ಪ್ರಮಾಣ ಪತ್ರದ ವಿಚಾರದಲ್ಲಿ ಗೊಂದಲಕ್ಕೆ ಸಿಲುಕಿದೆ. ಏಕರೂಪದ ‘ಆದಿ ದ್ರಾವಿಡ’ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡುವ ಮೂಲಕ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.ಕೇವಲ ಚುನಾವಣೆ ಸಂದರ್ಭ ಮತ ಗಳಿಕೆಗಾಗಿ ಮಾತ್ರ ಆದಿ ದ್ರಾವಿಡ ಜನಾಂಗವನ್ನು ಬಳಸಿಕೊಳ್ಳಲಾಗುತ್ತಿದೆ. ಆದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದರು.

ಕೊಡಗಿನಲ್ಲಿರುವ ಸರ್ಕಾರಿ ಪೈಸಾರಿ ಜಮೀನಿನ ಸಮಗ್ರ ಸರ್ವೆ ಮಾಡಬೇಕು. ಗುರುತಿಸಿದ ಪೈಸಾರಿ ಜಾಗವನ್ನು ಜಿಲ್ಲೆಯಲ್ಲಿರುವ ಬುಡಕಟ್ಟು ಜನರು, ಭೂರಹಿತ ಸೈನಿಕರು, ವಿಧವೆಯರು ಮತ್ತಿತರ ಅರ್ಹ ವಸತಿ ರಹಿತ ನಿರ್ಗತಿಕರಿಗೆ ಹಂಚಬೇಕು ಎಂದು ಒತ್ತಾಯಿಸಿದರು.

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಜಿಲ್ಲಾ ಉಪಾಧ್ಯಕ್ಷ ಪಿ.ಎಲ್.ಸುರೇಶ್, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಮಧು ಹಾಗೂ ಕುಂಬೂರು ಹೋಬಳಿ ಅಧ್ಯಕ್ಷ ವೆಂಕಪ್ಪ ಸುದ್ದಿಗೋಷ್ಠಿಯಲ್ಲಿದ್ದರು.