ಫೆ.18ರಂದು ವಸತಿ ಶಾಲೆಗಳ ಪ್ರವೇಶ, ಯುಪಿಎಸ್‌ಸಿ, ಕೆಪಿಎಸ್‌ಸಿ ತರಬೇತಿ ಪ್ರವೇಶ ಪರೀಕ್ಷೆ

| Published : Feb 17 2024, 01:17 AM IST

ಫೆ.18ರಂದು ವಸತಿ ಶಾಲೆಗಳ ಪ್ರವೇಶ, ಯುಪಿಎಸ್‌ಸಿ, ಕೆಪಿಎಸ್‌ಸಿ ತರಬೇತಿ ಪ್ರವೇಶ ಪರೀಕ್ಷೆ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ ಆರನೇ ತರಗತಿ ಪ್ರವೇಶ ಪರೀಕ್ಷೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆಯಿಂದ ನೀಡಲಾಗುವ ಯುಪಿಎಸ್ ಸಿ, ಕೆಪಿಎಸ್‌ಸಿ ತರಬೇತಿ ಪ್ರವೇಶ ಪರೀಕ್ಷೆಯು ಫೆ.18ರಂದು ಜಿಲ್ಲಾ ವ್ಯಾಪ್ತಿಯ 15 ಕೇಂದ್ರಗಳಲ್ಲಿ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ ಆರನೇ ತರಗತಿ ಪ್ರವೇಶ ಪರೀಕ್ಷೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆಯಿಂದ ನೀಡಲಾಗುವ ಯುಪಿಎಸ್ ಸಿ, ಕೆಪಿಎಸ್‌ಸಿ ತರಬೇತಿ ಪ್ರವೇಶ ಪರೀಕ್ಷೆಯು ಫೆ.18ರಂದು ಜಿಲ್ಲಾ ವ್ಯಾಪ್ತಿಯ 15 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರೀಕ್ಷೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಯಲಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ.ಬಿ.ಆರ್. ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಸಂಗೋಳ್ಳಿ ರಾಯಣ್ಣ, ಕವಿರನ್ನ, ಗಾಂಧಿತತ್ವ, ಶ್ರೀನಾರಾಯಣ ಗುರು ಮುಂತಾದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಹಾಗೂ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯುಪಿಎಸ್‌ಸಿ, ಕೆಪಿಎಸ್‌ಸಿ, ಗ್ರೂಪ್ ಸಿ, ಎಸ್ಎಸ್ ಸಿ, ಬ್ಯಾಂಕಿಂಗ್, ಆರ್‌.ಆರ್‌.ಬಿ ಪರೀಕ್ಷೆಗಳಿಗೆ ತರಬೇತಿ ನೀಡುವ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪ್ರವೇಶ ಪರೀಕ್ಷೆಯನ್ನು ಸೂಸುತ್ರ ಹಾಗೂ ಪಾರದರ್ಶಕವಾಗಿ ನಡೆಸಿ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡದೆ ಶಿಸ್ತುಬದ್ಧವಾಗಿ ನಡೆಸಬೇಕು ಎಂದರು.

ವಸತಿ ಶಾಲೆಗಳ ಪ್ರವೇಶ ಪರೀಕ್ಷೆಯು ಜಿಲ್ಲೆಯ 15 ಕೇಂದ್ರಗಳಲ್ಲಿ ನಡೆಯಲಿದ್ದು, ಪತ್ರಿಕೆ 1 ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30ರ ವರಗೆ, ಪತ್ರಿಕೆ-2 ಮಧ್ಯಾಹ್ನ 2.30 ರಿಂದ 4.30 ರವರೆಗೆ ಪರೀಕ್ಷೆ ನಡೆಯಲಿದೆ. 4654 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಯುಪಿಎಸ್ ಕೆಪಿಎಸ್‌ಸಿ ತರಬೇತಿ ಪ್ರವೇಶ ಪರೀಕ್ಷೆಯು 2 ಕೇಂದ್ರಗಳಲ್ಲಿ ನಡೆಯಲಿದ್ದು, ಬೆಳಗ್ಗೆ 10.30ರಿಂದ 12.30 ರವರೆಗೆ ಮತ್ತು 2.30 ರಿಂದ 4.30 ರವರೆಗೆ ಎರಡು ಅವಧಿಯಲ್ಲಿ ಪರೀಕ್ಷೆ ನಡೆಯಲಿದೆ. 1336 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರ, ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂತ್, ಕ್ಯಾಲ್ಕುಲೇಟರ್, ವೈಟ್ ಫ್ಲೂಯಿಡ್, ವೈರ್ ಲೆಸ್ ಸೆಟ್ಸ್, ಕ್ಯಾಲ್ಕುಲೇಟರ್ ಇತ್ಯಾದಿ ತರುವುದನ್ನು ನಿಷೇದಿಸಲಾಗಿದೆ. ಪರೀಕ್ಷಾರ್ಥಿಗಳು ತಮಗೆ ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಎಲ್ಲಾ ಸೂಚನೆಗಳನ್ನು ಪಾಲಿಸಬೇಕು. ಪರೀಕ್ಷಾರ್ಥಿಗಳು ತಮಗೆ ಪ್ರವೇಶ ಪತ್ರದಲ್ಲಿ ತಿಳಿಸಿರುವ ರೀತಿ ವಸ್ತ್ರಸಂಹಿತೆ ಪಾಲಿಸಬೇಕು ಎಂದು ಸೂಚಿಸಿದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರು ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪ್ರಶ್ನೆಪತ್ರಿಕೆ ವಿತರಣೆಗೆ ತ್ರಿಸದಸ್ಯರನ್ನೊಳಗೊಂಡ 6 ಮಾರ್ಗಾಧಿಕಾರಿಗಳ ತಂಡ ರಚಿಸಲಾಗಿದೆ. ವೀಕ್ಷಕರು ಹಾಗೂ ಪರೀಕ್ಷೆಗೆ ನಿಯೋಜಿಸಲಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರೀಕ್ಷಾ ಪ್ರಾಧಿಕಾರ ಕಾಲ ಕಾಲಕ್ಕೆ ನೀಡಲಾಗುವ ಸಲಹೆ ಹಾಗೂ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಧಿಕಾರಿಗಳು ಪರೀಕ್ಷಾ ಸೂಚನೆಗಳನ್ನು ಪಾಲನೆ ಮಾಡಿ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಹೇಳಿದರು.

ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಎ-ಬಿ ದರ್ಜೆಯ ಅಧಿಕಾರಿಗಳು ಹಾಗೂ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಜಿಲ್ಲೆಯಲ್ಲಿ ವಿಶೇಷ ತಂಡವನ್ನು ನೇಮಕಮಾಡಲಾಗಿದೆ. ಜೊತೆಗೆ 4 ಜನ ಮಾರ್ಗಾಧಿಕಾರಿ, ನಿರೀಕ್ಷಣಾ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಎಲ್ಲಾ ಪರೀಕ್ಷಾ ಕಾರ್ಯಗಳು ಸುಗಮವಾಗಿ ನಡೆಯಲು ಎಲ್ಲಾ ಹಂತದಲ್ಲೂ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಸಭೆಯಲ್ಲಿ ಡಿಡಿಪಿಯು ಚಲುವಯ್ಯ, ಡಿಡಿಪಿಐ ಕಛೇರಿಯ ಶಿಕ್ಷಣಾಧಿಕಾರಿಗಳಾದ ಚಂದ್ರಕಾಂತ, ಡೀಸಿ ಕಚೇರಿಯ ಕೇಂದ್ರ ಸ್ಥಾನಿಕ ಸಹಾಯಕಿ ಡಾ.ರೋಹಿಣಿ ಹಾಗೂ ಬಿಇಒ ಹಾಜರಿದ್ದರು.