ವಿವಿ, ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಅಳವಡಿಸಿ: ದಿನೇಶ್‌ ಪತ್ರ

| Published : Feb 25 2024, 01:46 AM IST

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಅವರಿಗೆ ಪತ್ರ

ಕನ್ನಡಪ್ರಭ ವಾರ್ತೆ ಬೆಂಗಳೂರು

ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳು, ಎಲ್ಲ ಸರ್ಕಾರಿ ಮತ್ತು ಖಾಸಗಿ ಕೈಗಾರಿಕೆಗಳು ಮತ್ತು ಐಟಿ-ಬಿಟಿ ಕಚೇರಿಗಳ ಪ್ರವೇಶ ದ್ವಾರಗಳಲ್ಲಿ ಸಂವಿಧಾನ ಪೀಠಿಕೆ ಫಲಕಗಳನ್ನು ಅಳವಡಿಸಲು ಆದೇಶಿಸುವಂತೆ ವಿಧಾನ ಪರಿಷತ್ತು ಸದಸ್ಯ ದಿನೇಶ್‌ ಗೂಳಿಗೌಡ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಶನಿವಾರ ಈ ಕುರಿತು ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಎಲ್ಲರಿಗೂ ಎಲ್ಲ ಹಕ್ಕುಗಳು ಸಿಕ್ಕಿಲ್ಲ. ಸಮಾಜದಲ್ಲಿ ಇನ್ನೂ ಅಸಮಾನತೆ ದೂರವಾಗಿಲ್ಲ, ಜಾತಿ ಪದ್ಧತಿ ನಿರ್ಮೂಲನೆಯಾಗಿಲ್ಲ. ಅಸ್ಪೃಶ್ಯತೆ ನಿಂತಿಲ್ಲ. ಸಮ ಸಮಾಜ ನಿರ್ಮಾಣ ಆಗಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ। ಬಿ.ಆರ್.ಅಂಬೇಡ್ಕರ್‌ ಅವರು ಸಂವಿಧಾನ ಜಾರಿಗೆ ಬಂದ ಸಂದರ್ಭದಲ್ಲಿ ಹೇಳಿದ್ದರು. ಇಂದಿಗೂ ಈ ಸಮಸ್ಯೆಗಳು ನಿರ್ನಾಮವಾಗಿಲ್ಲ. ಇದಕ್ಕೊಂದು ಪರಿಹಾರ ಕಂಡುಕೊಳ್ಳಬೇಕಿದ್ದು, ಸಂವಿಧಾನದ ಬಗ್ಗೆ ಜನರಲ್ಲಿ ಅರಿವು, ಜಾಗೃತಿ ಮೂಡಿಸಬೇಕಿದೆ ಎಂದು ಪತ್ರದಲ್ಲಿ ವಿನಂತಿಸಿದ್ದಾರೆ.

ಪಂಚಾಯಿತಿ ಮಟ್ಟದಿಂದ ಹಿಡಿದು ಎಲ್ಲೆಡೆಯೂ ಸಂವಿಧಾನ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿವೆ. ಶಾಲೆಗಳಲ್ಲಿ ಬೆಳಗ್ಗೆ ಸಮಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದಿಸಲಾಗುತ್ತಿದೆ. ಜತೆಗೆ ಸಂವಿಧಾನ ಪೀಠಿಕೆ ಫಲಕಗಳನ್ನು ಅಳವಡಿಕೆ ಮಾಡಲು ಆದೇಶವನ್ನೂ ಹೊರಡಿಸಿದೆ. ಇದು ಸ್ವಾಗತಾರ್ಹ ಹಾಗೂ ಅಭಿನಂದನೀಯ ಕ್ರಮವಾಗಿದೆ. ಅಂತೆಯೇ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳು ಹಾಗೂ ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಕೈಗಾರಿಕೆಗಳು ಹಾಗೂ ಐಟಿ-ಬಿಟಿ ಕಚೇರಿಗಳ ಪ್ರವೇಶ ದ್ವಾರದಲ್ಲಿ ಸಂವಿಧಾನ ಪೀಠಿಕೆಯ ಫಲಕಗಳನ್ನು ಅಳವಡಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಪತ್ರದಲ್ಲಿ ಮನವಿ ಮಾಡಿದ್ದಾರೆ.