ಇಂದಿನ ಹವಾಮಾನ ವೈಪರೀತ್ಯ ಹಾಗೂ ನೀರಿನ ಕೊರತೆಯ ಪರಿಸ್ಥಿತಿಯಲ್ಲಿ ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆಗಳನ್ನು ರೈತರು ಅಳವಡಿಸಿಕೊಳ್ಳಬೇಕು. ನೀರಿನ ಸದ್ಬಳಕೆಯನ್ನು ಸಮರ್ಪಕವಾಗಿ ನಿರ್ವಹಿಸುವ ಜೊತೆಗೆ ಬೆಳೆಯಲ್ಲಿ ವೈವಿಧ್ಯತೆ ಅಳವಡಿಸಿಕೊಳ್ಳಬೇಕು .
ಕನ್ನಡಪ್ರಭ ವಾರ್ತೆ ಮಂಡ್ಯ
ದೇಶಿ ಬೀಜ ಸಂರಕ್ಷಣೆಗೆ ರೈತರು ಒತ್ತು ನೀಡಿ, ಬೆಳೆಯಲ್ಲಿ ವೈವಿಧ್ಯತೆ ಅಳವಡಿಸಿಕೊಂಡಲ್ಲಿ ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು ಎಂದು ವಿ.ಸಿ.ಫಾರ್ಮ್ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಸಿ.ನಾರಾಯಣಸ್ವಾಮಿ ಸಲಹೆ ನೀಡಿದರು.ತಾಲೂಕಿನ ವಿ.ಸಿ.ಫಾರ್ಮ್ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಬೀಜೋತ್ಸವ ಹಾಗೂ ಪೂರ್ವ ಮುಂಗಾರು ಆಂದೋಲನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಬೀಜ ಬಳಕೆ ಮಾಡಿದಲ್ಲಿ ಬೆಳೆ ಸಮೃದ್ಧ ಬೆಳೆದು ರೈತರು ಹೆಚ್ಚಿನ ಇಳುವರಿ ಪಡೆದು ಆರ್ಥಿಕವಾಗಿ ಸದೃಢರಾಗಲು ಸಾಧ್ಯ ಎಂದರು.
ಇಂದಿನ ಹವಾಮಾನ ವೈಪರೀತ್ಯ ಹಾಗೂ ನೀರಿನ ಕೊರತೆಯ ಪರಿಸ್ಥಿತಿಯಲ್ಲಿ ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆಗಳನ್ನು ರೈತರು ಅಳವಡಿಸಿಕೊಳ್ಳಬೇಕು. ನೀರಿನ ಸದ್ಬಳಕೆಯನ್ನು ಸಮರ್ಪಕವಾಗಿ ನಿರ್ವಹಿಸುವ ಜೊತೆಗೆ ಬೆಳೆಯಲ್ಲಿ ವೈವಿಧ್ಯತೆ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.ರೈತರು ದೇಶಿ ಬೀಜಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಬೇಕು. ರೈತರ ಬಳಿಯಲ್ಲಿ ಉತ್ತಮ ಗುಣಮಟ್ಟದ ಹಾಗೂ ವಿಶಿಷ್ಟ ಲಕ್ಷಣಗಳಿರುವ ದೇಶಿ ಬೀಜಗಳು ಕಂಡುಬಂದಲ್ಲಿ ಅವುಗಳನ್ನು ವಿಶ್ವವಿದ್ಯಾಲಯಕ್ಕೆ ತಿಳಿಸಬೇಕು. ಅಂತಹ ಬೀಜಗಳನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿ ಇತರ ರೈತರಿಗೆ ಹಂಚುವ ಕಾರ್ಯವನ್ನು ವಿಶ್ವವಿದ್ಯಾಲಯ ಕೈಗೊಳ್ಳಲಿದೆ ಎಂದು ತಿಳಿಸಿದರು.
ವಿವಿಯಲ್ಲಿ ಉತ್ತಮ ಗುಣಮಟ್ಟದ ಬೀಜಗಳು ಲಭ್ಯವಿದ್ದು, ರೈತರು ಅವುಗಳ ಕುರಿತು ಮಾಹಿತಿ ಪಡೆದು ವೈಜ್ಞಾನಿಕ ಪದ್ಧತಿಯಲ್ಲಿ ಕೃಷಿ ಕೈಗೊಳ್ಳಬೇಕು. ಕಳೆದ ವರ್ಷ ಸುಮಾರು 5 ಸಾವಿರ ಟನ್ ಬೀಜೋತ್ಪಾದನೆ ಮಾಡಿರುವುದು ವಿಶ್ವವಿದ್ಯಾಲಯಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದರು.ಕೃಷಿ ಶಿಕ್ಷಣ, ಸಂಶೋಧನೆ ಹಾಗೂ ವಿಸ್ತರಣಾ ಚಟುವಟಿಕೆಗಳನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ವಿಶ್ವವಿದ್ಯಾಲಯ ಬದ್ಧವಾಗಿದೆ. ಸಂಶೋಧನೆಯಿಂದ ಅಭಿವೃದ್ಧಿಪಡಿಸಿದ ಉತ್ತಮ ತಳಿಗಳನ್ನು ವಿಸ್ತರಣಾ ಚಟುವಟಿಕೆಗಳ ಮೂಲಕ ರೈತರಿಗೆ ತಲುಪಿಸುವಲ್ಲಿ ವಿವಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಕುಲಸಚಿವ ಡಾ.ಬಸವಗೌಡ ಮಾತನಾಡಿ, ಉತ್ತಮ ಬೀಜವನ್ನು ಉತ್ತಮ ಮಣ್ಣಿನಲ್ಲಿ ಬಿತ್ತಿದರೆ ರೈತರಿಗೆ ಉತ್ತಮ ಇಳುವರಿ ದೊರೆಯುತ್ತದೆ. ರೈತರಿಗಾಗಿ ಇಂತಹ ವಿಶೇಷ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿಯೂ ಆಯೋಜಿಸಬೇಕು. ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸರ್ಕಾರ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.ಇಂದಿನ ದಿನಗಳಲ್ಲಿ ಕೃಷಿಗೆ ಹೆಚ್ಚಿನ ಮಹತ್ವ ದೊರೆಯುತ್ತಿದೆ. ಕೃಷಿ ಉದ್ಯಮದಲ್ಲಿ ಸಾಕಷ್ಟು ಅವಕಾಶಗಳಿವೆ. ರೈತರು ಸ್ವಾವಲಂಬಿಗಳಾಗಿ ಸಂತೋಷದಿಂದ ಬದುಕಲು ಕೃಷಿ ಉದ್ಯಮದ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿ ಸಂಶೋಧನಾ ನಿರ್ದೇಶಕ ಡಾ.ಜಿ.ಎಂ.ದೇವಗಿರಿ ಅಧ್ಯಕ್ಷತೆ ವಹಿಸಿದ್ದರು. ವಿಸ್ತರಣಾ ನಿರ್ದೇಶಕ ಡಾ.ಸಿ.ರಾಮಚಂದ್ರ, ಕುಲಸಚಿವರಾದ ಡಾ.ಪಿ.ಎಸ್. ಫಾತಿಮಾ, ಶಿಕ್ಷಣ ನಿರ್ದೇಶಕರಾದ ಡಾ.ಎನ್.ಶಿವಕುಮಾರ್, ಸಹ ಸಂಶೋಧನಾ ನಿರ್ದೇಶಕರಾದ ಡಾ.ಬಿ.ಎಸ್.ಬಸವರಾಜು, ಬೀಜ ಘಟಕದ ವಿಶೇಷಾಧಿಕಾರಿ ಡಾ.ಎಸ್.ಬಿ.ಯೋಗಾನಂದ ಉಪಸ್ಥಿತರಿದ್ದರು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರು ಕೃಷಿ ವಿವಿ ಪ್ರಾಧ್ಯಾಪಕ ಡಾ.ತಿಮ್ಮೇಗೌಡ ಹಾಗೂ ದೇಶಿ ತಳಿಗಳ ಸಂರಕ್ಷಕ ಡಾ.ಕೆ.ಪಿ.ಕೃಷ್ಣಪ್ರಸಾದ್ ರೈತರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ವಿಶೇಷವಾಗಿ 30ಕ್ಕೂ ಅಧಿಕ ಮಳಿಗೆಗಳು ಭಾಗವಹಿಸಿ ರೈತರಿಗೆ ವಿವಿಧ ಕೃಷಿ ತಂತ್ರಜ್ಞಾನಗಳು, ಬೀಜಗಳು ಹಾಗೂ ನವೀನ ಪದ್ಧತಿಗಳ ಕುರಿತು ಮಾಹಿತಿ ನೀಡಿದವು.
ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಂದ ಪ್ರಾಧ್ಯಾಪಕರು, ವಿಜ್ಞಾನಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು, ರೈತರು ಹಾಗೂ ದೇಶಿ ತಳಿಯ ಸಂರಕ್ಷಕರು ಭಾಗವಹಿಸಿದ್ದರು.