ಮೂಡುಬಿದಿರೆ: ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ಯುವ ಉದ್ಯೋಗಾಕಾಂಕ್ಷಿಗಳು ತಮ್ಮ ಕೌಶಲ್ಯ ನಿರಂತರವಾಗಿ ವೃದ್ಧಿಸಿಕೊಳ್ಳಬೇಕು. ವೃತ್ತಿಪರ ಸಂಪರ್ಕ ಜಾಲವನ್ನು ಬೆಳೆಸಿಕೊಂಡು ಕೃತಕ ಬುದ್ಧಿಮತ್ತೆ ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಯು.ಟಿ ಖಾದರ್ ಹೇಳಿದರು.
ದೇಶದ ಅತಿದೊಡ್ಡ ಉದ್ಯೋಗ ಮೇಳವೆಂದು ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಪ್ರಗತಿ–2026ರ 16ನೇ ಆವೃತ್ತಿಗೆ ಶುಕ್ರವಾರ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಣ ಪಾಸ್‌ಪೋರ್ಟ್‌ನಂತಿದ್ದರೆ, ಕೌಶಲ್ಯ ವೀಸಾದಂತೆ ಎಂದು ರೂಪಕದ ಮೂಲಕ ವಿವರಿಸಿದ ಅವರು, ಯುವಜನರು ಪ್ರಾಯೋಗಿಕ ಹಾಗೂ ಉದ್ಯಮ ಕ್ಷೇತ್ರಕ್ಕೆ ಅಗತ್ಯವಾದ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದರು.ಕೃತಕ ಬುದ್ಧಿಮತ್ತೆ ಉದ್ಯೋಗ ಕಸಿದುಕೊಳ್ಳುವ ತಂತ್ರಜ್ಞಾನವೆಂದು ಪರಿಗಣಿಸುವ ಬದಲು, ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ನೆರವಾಗುವ ಸಾಧನವಾಗಿ ನೋಡಬೇಕು ಎಂದರು.
ಆಳ್ವಾಸ್ ಉದ್ಯೋಗ ಮೇಳಕ್ಕೆ ಮಹತ್ವ: ಸಂಸದ ಕ್ಯಾ.ಬ್ರಿಜೇಶ್ ಚೌಟ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ರೂಪಿಸಿರುವ ಈ ಮಾದರಿಯು ವಿಕಸಿತ ಭಾರತದ ನಿರ್ಮಾಣಕ್ಕೆ ಮಹತ್ವದ ಕೊಡುಗೆಯಾಗಿದೆ ಎಂದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಎಂಆರ್‌ಜಿ ಗ್ರೂಪ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ, ಶಿಕ್ಷಣಕ್ಕಿಂತಲೂ ಸಾಮಾನ್ಯ ಜ್ಞಾನ ಬಹಳ ಮುಖ್ಯ ಎಂದರು.ಅಧ್ಯಕ್ಷತೆ ವಹಿಸಿದ್ದ ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್, ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರಿಗೆ ಈ ವ್ಯವಸ್ಥೆಯು ನಿರಂತರ ಪ್ರಯೋಜನ ದೊರೆಯುವಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಎಲ್ಲರ ಮೇಲಿದೆ ಎಂದರು. ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕ ಹರೀಶ್ ಪೂಂಜಾ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ಹಾಗೂ ಐಟಿ ವಿಭಾಗದ ಮುಖ್ಯ ಕಾರ‍್ಯನಿರ್ವಾಹಣಾಧಿಕಾರಿ ಪೂರಣ್ ವರ್ಮ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧಿಯಾ, ಆಳ್ವಾಸ್ ಟ್ರಸ್ಟಿ ವಿವೇಕ್ ಆಳ್ವ ಇದ್ದರು. ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ನಿರೂಪಿಸಿದರು. ಪ್ರಾಧ್ಯಾಪಕಿ ಪ್ರಿಯಾ ಸಿಕ್ವೇರಾ ಅತಿಥಿಗಳನ್ನು ಪರಿಚಯಿಸಿದರು.
ಆಳ್ವಾಸ್ ಪ್ರಗತಿಯ ಆರಂಭಿಕ ದಿನಗಳಲ್ಲಿ ಉದ್ಯೋಗ ಮೇಳಗಳ ಆಯೋಜನೆಗೆ ಅಮೂಲ್ಯ ಕೊಡುಗೆ ನೀಡಿದ ದಿವಂಗತ ಎ.ಕೆ. ಮಹೇಶ್ ಶೇಖರ್ ಅವರ ಸ್ಮರಣಾರ್ಥ ಉದ್ಘಾಟನಾ ವೇದಿಕೆಯನ್ನು ಸಮರ್ಪಿಸಲಾಯಿತು.
ಕರಾವಳಿಯ ಸಾಧಕರಿಗೆ ಸನ್ಮಾನ: ಕರಾವಳಿಯ ಉದ್ಯಮ ಹಾಗೂ ಉದ್ಯೋಗ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ನೀಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪರವಾಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ, ಎಂಆರ್‌ಜಿ ಗ್ರೂಪ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ, ಭವಾನಿ ಶಿಪ್ಪಿಂಗ್ ಗ್ರೂಪ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಕುಸುಮೋದರ ಡಿ. ಶೆಟ್ಟಿ, ಪ್ರೊವಿಟ್ ಫುಡ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ವಿನ್ಸೆಂಟ್ ಕುಟಿನ್ಹಾ ಹಾಗೂ ಎಕ್ಸ್ಪರ್ಟೈಸ್ ಕಾಂಟ್ರಾಕ್ಟಿಂಗ್ ಕಂಪನಿಯ ಸಹ ಸಂಸ್ಥಾಪಕ ಮೊಹಮ್ಮದ್ ಅಶ್ಫಾಕ್ ಅವರನ್ನು ಸನ್ಮಾನಿಸಲಾಯಿತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.ವಿಶೇಷಚೇತನರಿಗೆ ಹುದ್ದೆ: ಕಳೆದ ಒಂದು ವರ್ಷದಿಂದ ಉದ್ಯೋಗಕ್ಕಾಗಿ ಕಾಯುತ್ತಿದ್ದ ಭವ್ಯಶ್ರೀ ಅವರ ನಿರೀಕ್ಷೆಗೆ ಆಳ್ವಾಸ್ ಪ್ರಗತಿ–2026 ಹೊಸ ತಿರುವು ನೀಡಿದೆ. ವಿಶೇಷಚೇತನರಾಗಿರುವ ಅವರು, ತಮ್ಮ ಸಹೋದರನ ನೆರವಿನಿಂದ ಗಾಲಿಕುರ್ಚಿಯಲ್ಲಿ ಆಗಮಿಸಿ, ಉದ್ಯೋಗ ಮೇಳದಲ್ಲಿ ಭಾಗವಹಿಸಿ ಮೈಸೂರಿನ ರೆಡ್ಡೀಸ್ ಫೌಂಡೇಷನ್‌ನಲ್ಲಿ ಅಕೌಂಟೆಂಟ್ ಹುದ್ದೆಗೆ ಆಯ್ಕೆಯಾಗಿದ್ದಾರೆ.ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಭವ್ಯಶ್ರೀ, ಮೈಸೂರಿನ ರೆಡ್ಡೀಸ್ ಫೌಂಡೇಷನ್‌ನಲ್ಲಿ ಅಕೌಂಟೆಂಟ್ ಹುದ್ದೆಗೆ ಆಯ್ಕೆಯಾಗುವ ಮೂಲಕ ತಮ್ಮ ಬಹುದಿನಗಳ ಉದ್ಯೋಗದ ಕನಸನ್ನು ನನಸಾಗಿಸಿಕೊಂಡಿದ್ದಾರೆ.ಆಳ್ವಾಸ್ ಪ್ರಗತಿ 2026ರ ಮೊದಲ ದಿನದ ವಿವರ : ಮೊದಲ ದಿನದ ಉದ್ಯೋಗ ಮೇಳದಲ್ಲಿ ಭಾಗವಹಿಸಿದ 326 ಕಂಪನಿಗಳ ಪೈಕಿ 207 ಕಂಪನಿಗಳು 718 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗದ ಆಫರ್‌ಗಳನ್ನು ನೀಡಿದ್ದು, 3093 ಅಭ್ಯರ್ಥಿಗಳನ್ನು ಮುಂದಿನ ಹಂತದ ಆಯ್ಕೆ ಪ್ರಕ್ರಿಯೆಗೆ ಶಾರ್ಟ್ ಲಿಸ್ಟ್ ಮಾಡಿವೆ.
ಆನ್‌ಲೈನ್ ನೋಂದಣಿ ಮಾಡಿಸಿದ ಉದ್ಯೋಗಾಕಾಂಕ್ಷಿಗಳು: 13247ಸ್ಪಾಟ್ ನೋಂದಣಿ ಮಾಡಿಸಿದ ಅಭ್ಯರ್ಥಿಗಳು: 83
ಉದ್ಯೋಗ ಮೇಳಕ್ಕೆ ಆಗಮಿಸಿದ ಕಂಪನಿಗಳು: 326ಮೊದಲ ದಿನ ಆಗಮಿಸಿದ ಉದ್ಯೋಗಾಕಾಂಕ್ಷಿಗಳು: 13016