ಸಚಿವ ಪ್ರಹ್ಲಾದ್ ಜೋಶಿ ಅವರ ಹುಟ್ಟು ಹಬ್ಬದ ಆಚರಣೆಯು ಸಮಾಜಕ್ಕೆ ಉಪಯುಕ್ತವಾಗುವ ಸೇವಾ ಕಾರ್ಯಗಳ ಮೂಲಕ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಶಿಗ್ಗಾಂವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ಹೇಳಿದರು.

ಶಿಗ್ಗಾಂವಿ: ಸಚಿವ ಪ್ರಹ್ಲಾದ್ ಜೋಶಿ ಅವರ ಹುಟ್ಟು ಹಬ್ಬದ ಆಚರಣೆಯು ಸಮಾಜಕ್ಕೆ ಉಪಯುಕ್ತವಾಗುವ ಸೇವಾ ಕಾರ್ಯಗಳ ಮೂಲಕ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಶಿಗ್ಗಾಂವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ಹೇಳಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ 64ನೇ ಜನ್ಮದಿನದ ಅಂಗವಾಗಿ ಅವರ ಅಭಿಮಾನಿ ಬಳಗ ಹಾಗೂ ಬಿಜೆಪಿ ಕಾರ್ಯಕರ್ತರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತç ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಶ್ರೀಗಳು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡುವ ಇಂತಹ ಕಾರ್ಯಕ್ರಮಗಳು ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿವೆ ಜೊತೆಗೆ ಸರ್ಕಾರಿ ಪ್ರೌಢಶಾಲೆಯನ್ನು ದತ್ತು ಸ್ವೀಕರಿಸುವ ಮೂಲಕ ಶಾಲೆಯ ಮೂಲಭೂತ ಸೌಕರ್ಯಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವ ಮಹತ್ವದ ಉದ್ದೇಶ ಬಹಳಷ್ಟು ಉಪಯುಕ್ತವಾಗಿದೆ ಎಂದರು.

ನಿಕಟಪೂರ್ವ ಬಿಜೆಪಿ ಮಂಡಳದ ಅಧ್ಯಕ್ಷ ಶಿವಾನಂದ ಮ್ಯಾಗೇರಿ ಮಾತನಾಡಿ, ಇಂತಹ ಉಚಿತ ನೇತ್ರ ತಪಾಸಣೆಗಳಿಂದ ಬಡವರ ಹಾಗೂ ಮಧ್ಯಮ ವರ್ಗದ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ. ಕಣ್ಣು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಸ್ವಾವಲಂಬಿ ಜೀವನಕ್ಕೆ ಕಣ್ಣು ಬಹಳಷ್ಟು ಪೂರಕವಾಗಿದೆ, ಇತರರ ಮೇಲೆ ಅವಲಂಬಿತರಾಗುವುದು ತಪ್ಪುತ್ತದೆ. ದೃಷ್ಟಿದೋಷ ನಿವಾರಣೆಯಾಗುವುದರಿಂದ ದುಡಿಯುವ ವರ್ಗದವರು ಮತ್ತೆ ತಮ್ಮ ಕೆಲಸಗಳಿಗೆ ಮರಳಿ ಕುಟುಂಬಕ್ಕೆ ಆಸರೆಯಾಗಲು ಸಾಧ್ಯವಾಗುತ್ತದೆ. ವಿಶೇಷವಾಗಿ ವೃದ್ದರು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದರು.

ಯುವ ಬಿಜೆಪಿ ಮುಖಂಡ ನರಹರಿ ಕಟ್ಟಿ ಮಾತನಾಡಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತಮ್ಮ ಸಾರ್ವಜನಿಕ ಜೀವನದಲ್ಲಿ ಜನಸೇವೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುತ್ತಾ ಬಂದಿದ್ದಾರೆ. ಅವರ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಂಡಿರುವ ಆರೋಗ್ಯ ಸೇವೆ ಮತ್ತು ಶಾಲಾ ದತ್ತು ಸ್ವೀಕಾರದಂತಹ ಕಾರ್ಯಕ್ರಮಗಳು ಸಮಾಜಮುಖಿ ಚಿಂತನೆಗೆ ಸಾಕ್ಷಿಯಾಗಿವೆ ಎಂದು ತಿಳಿಸಿದರು.

ನ್ಯಾಯವಾದಿ ಡಾ. ಮಲ್ಲೇಶಪ್ಪ ಹರಿಜನ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಕಣ್ಣಿನ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಜಾಗೃತಿ ವಹಿಸುವುದು ಅಗತ್ಯವಾಗಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ನೇತ್ರ ತಪಾಸಣೆ ಹಾಗೂ ಅಗತ್ಯ ಶಸ್ತ್ರಚಿಕಿತ್ಸೆ ಒದಗಿಸುವ ಇಂತಹ ಶಿಬಿರಗಳು ಅತ್ಯಂತ ಉಪಯುಕ್ತವಾಗಿವೆ ಎಂದರು.

ಇದಕ್ಕೂ ಪೂರ್ವದಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಣೆ ಮಾಡಲಾಯಿತು. ನಂತರ ತಾಲೂಕಿನ ನೀರಲಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯನ್ನು ದತ್ತು ಸ್ವೀಕರಿಸಿ, ಶಾಲೆಯ ಮೂಲಭೂತ ಸೌಕರ್ಯಗಳನ್ನು ಉನ್ನತೀಕರಿಸುವ ಮಹತ್ವದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಉಚಿತ ನೇತ್ರ ತಪಾಸಣೆ ಹಾಗೂ ಶಾಶ್ವತ ಚಿಕಿತ್ಸಾ ಶಿಬಿರದಲ್ಲಿ ಶಿಗ್ಗಾಂವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ತಮ್ಮ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಚಾಲನೆ ನೀಡಿದರು.

ಮುಖಂಡರಾದ ಭರಮಜ್ಜ ನವಲಗುಂದ, ಜಯಣ್ಣ ಹೆಸರೂರ, ಕರಿಯಪ್ಪ ಕಟ್ಟಿಮನಿ, ಶಿವಾನಂದ ವಡವಟ್ಟಿ, ಸಂತೊಷ ಹುಬ್ಬಳ್ಳಿ, ಪ್ರಶಾಂತ ಬಡ್ಡಿ, ಮುತ್ತು ಯಲಿಗಾರ, ಬಸನಗೌಡ ಮೇಲಿನಮನಿ, ಹನುಮಂತಪ್ಪ ಮಾದರ, ರವಿ ಬಿಸೆಟ್ಟಿ, ರಂಗನಾಥ ಗಾಯಕವಾಡ, ಸಂತೋಷ ದೊಡ್ಡಮನಿ, ಅಣ್ಣಪ್ಪ ಬಡ್ಡಿ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿ ಬಳಗದ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.