ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಪರಿಸರ ನಾಶದಿಂದ ಮಾಲಿನ್ಯ ಹೆಚ್ಚಾದಂತೆ ಮನುಷ್ಯ ಸೇರಿ ಭೂಮಿ ಮೇಲಿನ ಪ್ರತಿಯೊಂದು ಜೀವಿಯ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ ಎಂದು ವಿಧಾನ ಪರಿಷತ್ ಶಾಸಕ, ಭಾರತೀ ಶಿಕ್ಷಣ ಸಂಸ್ಥೆ ಅಧ್ಯಕ್ಷ ಮಧು ಜಿ.ಮಾದೇಗೌಡ ಎಚ್ಚರಿಕೆ ನೀಡಿದರು.ಸಮೀಪದ ಹನುಮಂತನಗರದ ಭಾರತೀ ವಸತಿ ಸಂಯುಕ್ತ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಡಾ.ರಾವ್ಸ್ ಅಕಾಡೆಮಿ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ವಿದ್ಯಾರ್ಥಿಗಳು ಪರಿಸರ ಕಾಳಜಿ ವಹಿಸಬೇಕು. ಗಿಡ ನೆಡುವ ಜೊತೆಗೆ ಮರಗಳನ್ನು ಕಾಪಾಡುವ ಮನೋಧರ್ಮ ಬೆಳೆಸಿಕೊಳ್ಳಬೇಕು ಎಂದರು.
ನಾವೆಲ್ಲರೂ ಮರಗಳನ್ನು ಕಡಿದು ಪರಿಸರವನ್ನು ನಾಶ ಮಾಡುತ್ತಿರುವುದರಿಂದ ಮಳೆ ಪ್ರಮಾಣ ಕಡಿಮೆಯಾಗಿದೆ. ಅಲ್ಲದೆ ಮಾಲಿನ್ಯ ಹೆಚ್ಚಾಗಿದೆ, ಮನುಷ್ಯನ ಮೇಲೂ ಕಾಯಿಲೆಗಳು ಹೆಚ್ಚಾಗುತ್ತಿವೆ. ಮಳೆ ಇಲ್ಲದೆ ಯಾವುದೇ ಬೆಳೆ ಇಲ್ಲ ಎಂಬುದನ್ನು ಅರಿತು ಕಾಡು ಉಳಿಸಿದರೆ ನಾಡು ಉಳಿಯುತ್ತದೆ ಎಂದು ಕಿವಿಮಾತು ಹೇಳಿದರು.ಕಾಲೇಜು ಪ್ರಾಂಶುಪಾಲ ಪುಟ್ಟಸ್ವಾಮಿ ಮಾತನಾಡಿ, ಪರಿಸರ ಸಮತೋಲನ ಕಾಪಾಡುವುದು ಇಂದು ಅಗತ್ಯವಾಗಿದೆ. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಕಾರ್ಯದರ್ಶಿ ಸಿದ್ದೇಗೌಡ ಬಹುಮಾನ ವಿತರಿಸಿದರು. ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರಶಂಸಿಸಿ ಪರಿಸರ ಜಾಗೃತಿ ಕಾರ್ಯಕ್ರಮದ ಬಗ್ಗೆ ಪ್ರೋತ್ಸಾಹಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಡೀನ್ ನಂದಾ ಯಲಮಾಲಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಉಪಸ್ಥಿತರಿದ್ದರು.