ಕನ್ನಡಪ್ರಭ ವಾರ್ತೆ ಮೈಸೂರುನಗರದ ನಾರಾಯಣಶಾಸ್ತ್ರೀ ರಸ್ತೆಯಲ್ಲಿರುವ ಕಾಲೇಜು ಆವರಣವೇ ಬುಧವಾರ ಸಾಂಸ್ಕೃತಿಕ ಸಂಭ್ರಮದ ಕೇಂದ್ರವಾಗಿ ಮಾರ್ಪಟ್ಟಿತು. ವಿದ್ಯಾರ್ಥಿಗಳ ವರ್ಣರಂಜಿತ ನೃತ್ಯ, ಸುಮಧುರ ಗಾಯನ, ಉತ್ಸಾಹಭರಿತ ಕಲಾ ಪ್ರದರ್ಶನಗಳು ನೆರೆದಿದ್ದವರನ್ನು ರಂಜಿಸಿದವು.ಈ ಮನಮೋಹಕ ದೃಶ್ಯಗಳಿಗೆ ಸಾಕ್ಷಿಯಾದದ್ದು ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸದ್ವಿದ್ಯಾ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವತಿಯಿಂದ ಆಯೋಜಿಸಿದ್ದ ‘ಪ್ರತಿಭಾ ಶೋಧ-2026’ ಸಾಂಸ್ಕೃತಿಕ ಕಾರ್ಯಕ್ರಮ.ಸದ್ವಿದ್ಯಾ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಎಂ.ಡಿ. ಗೋಪಿನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಆಯೋಜಿಸಲಾಗಿರುವ ‘ಪ್ರತಿಭಾ ಶೋಧ’ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿರುವ ಸಾಹಿತ್ಯ, ಸಾಂಸ್ಕೃತಿಕ, ಸಂಗೀತ, ನೃತ್ಯ, ಭಾಷಣ, ಚಿತ್ರಕಲೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಪ್ರತಿಭೆಗಳನ್ನು ಅನಾವರಣಗೊಳಿಸುವ ಪರಿಣಾಮಕಾರಿ ವೇದಿಕೆಯಾಗಿದೆ ಎಂದು ತಿಳಿಸಿದರು.ಶಾಲಾ ಮತ್ತು ಕಾಲೇಜು ಹಂತದಲ್ಲೇ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅವರು ಮುಂದೆ ಅಂತರ ಶಾಲಾ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಭಾ ಶೋಧ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಅತ್ಯುತ್ತಮ ವೇದಿಕೆಯಾಗಿದ್ದು, ವಿವಿಧ ಸ್ಪರ್ಧಾತ್ಮಕ ಕಾರ್ಯಕ್ರಮಗಳಿಗೆ ಅವರನ್ನು ಸಜ್ಜುಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಸದ್ವಿದ್ಯಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಎಸ್.ಕೆ. ನರಹರಿ ಬಾಬು ಮಾತನಾಡಿ, ಶಿಕ್ಷಣವು ಕೇವಲ ಪಠ್ಯಾಧಾರಿತ ಜ್ಞಾನಕ್ಕೆ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ಕೌಶಲ್ಯ, ಸೃಜನಶೀಲತೆ ಹಾಗೂ ಜೀವನ ಮೌಲ್ಯಗಳನ್ನು ಬೆಳೆಸುವ ಸಮಗ್ರ ಪ್ರಕ್ರಿಯೆಯಾಗಿರಬೇಕು ಎಂದರು.ಸಂಸ್ಥೆಯ ಆಡಳಿತ ಮಂಡಳಿಯ ಹಿರಿಯ ಸದಸ್ಯ ಸಿ.ಆರ್. ನಾಗರಾಜ್ ಮಾತನಾಡಿ, ಸದ್ವಿದ್ಯಾ ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿವರ್ಷ ಆಯೋಜಿಸಲಾಗುವ ಪ್ರತಿಭಾ ಶೋಧ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗಿದ್ದು, ವರ್ಷದಿಂದ ವರ್ಷಕ್ಕೆ ಈ ಕಾರ್ಯಕ್ರಮಗಳನ್ನು ಇನ್ನಷ್ಟು ವಿನೂತನವಾಗಿ, ಅರ್ಥಪೂರ್ಣವಾಗಿ ಹಾಗೂ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರುವಲ್ಲಿ ಯಶಸ್ವಿಯಾಗಿದೆ ಎಂದರು. ಸಂಸ್ಥೆಯ ಸಹ ಕಾರ್ಯದರ್ಶಿ ಕೆ.ಎನ್. ಫಣೀಶ್ ಇದ್ದರು. ಪ್ರತಿಭಾ ಶೋಧದ ಅಂಗವಾಗಿ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದು, ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಿದರು. ಎಚ್.ವಿ. ತ್ರಿವೇಣಿ ಹಾಗೂ ಎಚ್.ಎಸ್. ರಶ್ಮಿ ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲ ವೈ.ಆರ್. ರಮೇಶ ಸ್ವಾಗತಿಸಿದರು. ಉಪ ಪ್ರಾಂಶುಪಾಲ ಜಿ.ಕೆ. ಇಂದುಮತಿ ವಂದಿಸಿದರು. ಎಸ್.ಎನ್. ವಸುಮತಿ ನಿರೂಪಿಸಿದರು.ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಎಂ. ಶೈಲಜಾ, ಬೋಧಕ, ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಇದ್ದರು.