ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ

ಹಿಂದೆಂದೂ ಕಂಡರಿಯದ ರೀತಿಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಸಾರ್ವಜನಿಕರು ಆರೋಗ್ಯ ಇಲಾಖೆಯವರು ಕಾಲಕಾಲಕ್ಕೆ ನೀಡಲಿರುವ ಮಾರ್ಗಸೂಚಿ ಕ್ರಮಗಳನ್ನು ಪಾಲಿಸಿ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಮನವಿ ಮಾಡಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸರ್.ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿ, ಹವಾಮಾನ ಇಲಾಖೆಯ ಪ್ರಕಾರ ರಾಜ್ಯದಲ್ಲಿ ಈ ವರ್ಷ ವಾಡಿಕೆ ಮಳೆಗಿಂತ ಕಡಿಮೆ ಪ್ರಮಾಣದ ಮಳೆ ಆಗಲಿದೆ ಎಂದರು.

ವಿದ್ಯುತ್ ಸಂಪರ್ಕ: ಜಿಲ್ಲೆಯಲ್ಲಿ ವಾಡಿಕೆ ಮಳೆ ಆಗಬಹುದು. ಮಳೆಯ ವೈಪರೀತ್ಯಗಳು ಏನೇ ಆದರೂ ನೀರು ಪೂರೈಕೆ ಹಾಗೂ ಇನ್ನಿತರ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಕೊರೆದಿರುವ 313 ಕೊಳವೆ ಬಾವಿಗಳಿಗೆ ಒಂದೆರಡು ದಿನಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿ ಜನರಿಗೆ ನೀರು ಪೂರೈಸಲು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಅಲ್ಲದೆ ಕುಡಿಯುವ ನೀರಿನ ಪೂರೈಕೆಯ ತುರ್ತು ಕ್ರಮಕ್ಕಾಗಿ ರಾಜ್ಯ ಸರ್ಕಾರ 1.5 ಕೋಟಿ ರು.ಅನ್ನು ಜಿಲ್ಲೆಗೆ ಬಿಡುಗಡೆ ಮಾಡಿದೆ. ಜೊತೆಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಅಗತ್ಯಕ್ಕೆ ತಕ್ಕಂತೆ ಅನುದಾನವನ್ನು ಕಾಲವಿಳಂಬವಿಲ್ಲದೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಮೀನುಗಳ ಮಾರಣ ಹೋಮ:


ಇತ್ತೀಚೆಗೆ ಕಂದವಾರ ಕೆರೆಯಲ್ಲಿ ಮೀನುಗಳ ಸಾವಿಗೆ ಹೆಚ್.ಎನ್.ವ್ಯಾಲಿ ನೀರು ಕಾರಣ ಅಲ್ಲ. ನಗರದ ತ್ರಾಜ್ಯ ನೀರು ಕಂದವಾರ ಕೆರೆಗೆ ಹರಿದು ಮೀನುಗಳ ಮಾರಣ ಹೋಮಕ್ಕೆ ಕಾರಣವಾಗಿದೆ ಎಂದು ಐಐಎಸ್ ಸಿ ವಿಜ್ಞಾನಿಗಳು ಸ್ಥಳಕ್ಕೆ ಬಂದು ಕಂದವಾರ ಕೆರೆಯ ನೀರು ಪರಿಶೀಲಿಸಿ ತಿಳಿಸಿದ್ದಾರೆ, ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಕಂದವಾರ ಕೆರೆ, ಮುಷ್ಟೂರು ಕೆರೆ ಮತ್ತು ಗೋಪಾಲಕೃಷ್ಣ ಅಮಾನಿಕೆರೆಗೆ ನಗರದ ಚರಂಡಿ ನೀರು ಸೇರುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ತಡೆಯಲು ಚಿಕ್ಕಬಳ್ಳಾಪುರ ನಗರಕ್ಕೆ ಪೂರ್ಣಪ್ರಮಾಣದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ನಿರ್ಮಿಸಲು 30 ಕೋಟಿ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಈ ಕಾರ್ಯ ಟೆಂಡರ್ ಪ್ರಕ್ರಿಯೆಯ ಹಂತದಲ್ಲಿದೆ. ಇಲ್ಲಿಂದ ನೀರು ಬಾಗೇಪಲ್ಲಿ ಮತ್ತು ಶಿಡ್ಲಘಟ್ಟ ತಾಲೂಕಿನ ಕೆರಗಳಿಗೆ ಹರಿಯುವುದರಿಂದ ಅಲ್ಲಿನ ಕೆರೆಗಳಿಗೂ ತ್ರಾಜ್ಯ ನೀರು ಹರಿಯುವುದನ್ನು ತಪ್ಪಿಸಲು ಶೀಘ್ರದಲ್ಲೇ ನಗರದ ಯುಜಿಡಿ ನೀರನ್ನು ಸಂಸ್ಕರಿಸುವ ಎಸ್ ಟಿಪಿ ಪ್ಲಾಂಟ್ ಗಳನ್ನು ಉನ್ನತ ದರ್ಜೆಗೆ ಏರಿಸಲಾಗುತ್ತಿದ್ದು ಅಲ್ಲಿ ಸಂಸ್ಕರಿಸುವ ನೀರು 3ನೇ ಹಂತದ ಶುದ್ಧೀಕರಿಸಿದ ನೀರಿಗೆ ಸಮವಾಗಿರುತ್ತದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್. ಮಂಜುಳ, ಶಾಸಕರಾದ ಸುಬ್ಬಾರೆಡ್ಡಿ, ಕೆ.ಎಚ್. ಪುಟ್ಟಸ್ವಾಮಿಗೌಡ, ಬಿ.ಎನ್. ರವಿಕುಮಾರ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಹೆಗಡೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್, ಜಿಲ್ಲಾಧಿಕಾರಿ ಜಿ.ಪ್ರಭು, ಸಿಇಒ ಡಾ. ವೈ.ನವೀನ್ ಭಟ್, ಎಸ್ಪಿ ಕುಶಲ್ ಚೌಕ್ಸೆ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಾಥ್, ಚಿಮುಲ್ ಅಧ್ಯಕ್ಷ ಮಂಜುನಾಥರೆಡ್ಡಿ, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಉಪಕಾರ್ಯದರ್ಶಿ ಅತಿಕ್ ಪಾಷಾ ಇದ್ದರು.108 ಗ್ರಾಮಗಳಲ್ಲಿ ನೀರಿನ ಕೊರತೆ?

ಕಳೆದ ಫೆಬ್ರವರಿಯಲ್ಲಿ 12 ಗ್ರಾಮಗಳು, ಮಾರ್ಚ್ ನಲ್ಲಿ 23 ಗ್ರಾಮಗಳು, ಪ್ರಸ್ತುತ 31 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರಿನ ಸಮರ್ಪಕ ಪೂರೈಕೆಗಾಗಿ ಖಾಸಗಿ ಕೊಳವೆಬಾವಿ ಮಾಲಿಕರ ಸಹಕಾರ ಪಡೆದು ನೀರು ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ 108 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಗುರ್ತಿಸಲಾಗಿದೆ. ಅದಕ್ಕೆ ತಕ್ಕಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವರು ಹೇಳಿದರು.