ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ತಾಕೀತು

| Published : Feb 26 2025, 01:03 AM IST

ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ತಾಕೀತು
Share this Article
  • FB
  • TW
  • Linkdin
  • Email

ಸಾರಾಂಶ

ಚಿತ್ರದುರ್ಗ ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಮಾತನಾಡಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳ ಸಭೆಯಲ್ಲಿ ಡಾ.ಕೆ.ಟಿ.ತಿಪ್ಪೇಸ್ವಾಮಿಕನ್ನಡಪ್ರಭ ವಾರ್ತೆ ಚಿತ್ರದುರ್ಗ

ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ ರೂಪಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಕೆಎಸ್‍ಆರ್‌ಟಿಸಿ ನಿಗಮದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 ಮತ್ತು ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಹಲವು ವರ್ಷಗಳಿಂದಲೂ ವಿದ್ಯಾರ್ಥಿಗಳಿಗೆ ರಿಯಾಯತಿ ದರ ಬಸ್‍ಪಾಸ್ ಕೊಡುವ ವ್ಯವಸ್ಥೆ ಜಾರಿಯಲ್ಲಿದ್ದು, ಮಕ್ಕಳಿಗೆ ಉತ್ತಮ ಸೇವೆ ನೀಡುವ ಮೂಲಕ ಮಕ್ಕಳ ಶಿಕ್ಷಣಕ್ಕೆ ಸಹಕಾರ ನೀಡಬೇಕು ಎಂದು ಹೇಳಿದರು.

ಕೆಎಸ್‍ಆರ್‌ಟಿಸಿ ಬಸ್‍ಗಳಲ್ಲಿ ಹೆಚ್ಚಿನ ಮಕ್ಕಳು ಪ್ರಯಾಣಿಸುವುದರಿಂದ ಎಲ್ಲ ಬಸ್‍ನಿಲ್ದಾಣ ಹಾಗೂ ಎಲ್ಲ ಬಸ್‍ಗಳಲ್ಲಿಯೂ ಸಹ ಮಕ್ಕಳ ಸಹಾಯವಾಣಿ-1098 ಮಾಹಿತಿಯ ಸ್ಟಿಕರ್ಸ್‍ಗಳನ್ನು ಅಳವಡಿಸಬೇಕು. ಬಸ್‍ ನಿಲ್ದಾಣಗಳಲ್ಲಿರುವ ತಾಯಂದಿರ ಹಾಲುಣಿಸುವ ಕೇಂದ್ರಗಳನ್ನು ಯಾವಾಗಲೂ ಬೀಗ ಹಾಕಿ ಮುಚ್ಚಿರುತ್ತಾರೆ ಎಂಬ ದೂರುಗಳು ಬಂದಿದ್ದು, ಹಾಲುಣಿಸುವ ಕೇಂದ್ರಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು.

ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

ಜಿಲ್ಲೆಯ ಕೆಎಸ್‍ಆರ್‌ಟಿಸಿ ಸಿಬ್ಬಂದಿ ಹಾಗೂ ಚಾಲನಾ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವವರಿಗೆ ಪೋಕ್ಸೋ ಕಾಯ್ದೆ, ಬಾಲನ್ಯಾಯ ಕಾಯ್ದೆ ಹಾಗೂ ಮಕ್ಕಳ ರಕ್ಷಣಾ ನೀತಿ ಕುರಿತು ತರಬೇತಿ ಅಗತ್ಯವಾಗಿದ್ದು ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ, ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ ಮೂರ್ತಿ ಸೇರಿದಂತೆ ಹಲವರು ಇದ್ದರು.

*ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ:

ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ-2009ರ ಅನುಷ್ಠಾನದ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸರ್ಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಮಕ್ಕಳ ಸಹಾಯವಾಣಿ-1098 ಅನ್ನು ಬರೆಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಲಾ ಆವರಣದಲ್ಲಿ ವಿದ್ಯುತ್ ತಂತಿ ಹಾದು ಹೋಗಿರುವ ಪ್ರಸಂಗ ಇದ್ದಲ್ಲಿ ತೆರವುಗೊಳಿಸಲು ಕ್ರಮವಹಿಸಬೇಕು. ಶಾಲೆಗಳಲ್ಲಿ ಕಡ್ಡಾಯವಾಗಿ ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಅರಿವು ಮೂಡಿಸಬೇಕು. ಬೀಟ್ ಪೊಲೀಸರು ಶನಿವಾರ ಮತ್ತು ಭಾನುವಾರ ಶಾಲೆಯ ಕಡೆ ಗಮನವಹಿಸಬೇಕು, ಎಲ್ಲ ಶಾಲೆಯ ಮುಖ್ಯ ಶಿಕ್ಷಕರಿಗೆ ಮಕ್ಕಳ ಕಲ್ಯಾಣ ಸಮಿತಿ, ಬಾಲನ್ಯಾಯ ಮಂಡಳಿ, ಮಕ್ಕಳ ಸಹಾಯವಾಣಿ ಸಂಖ್ಯೆ-1098 ಕಚೇರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಬಗ್ಗೆ ಮಾಹಿತಿ ತಿಳಿಸಬೇಕು ಎಂದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಇದ್ದರು.