ಚರ್ಚೆ ನಡೆಸಿದ ಬಳಿಕ ಎನ್‌ಡಿಎ ಅಭ್ಯರ್ಥಿ ಅಂತಿಮ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

| Published : Aug 31 2024, 01:43 AM IST / Updated: Aug 31 2024, 12:17 PM IST

ಚರ್ಚೆ ನಡೆಸಿದ ಬಳಿಕ ಎನ್‌ಡಿಎ ಅಭ್ಯರ್ಥಿ ಅಂತಿಮ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಚರ್ಚೆ ನಡೆಸಿ ತೀರ್ಮಾನ ಕೈಗೊಂಡು ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

 ತುಮಕೂರು  : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಚರ್ಚೆ ನಡೆಸಿ ತೀರ್ಮಾನ ಕೈಗೊಂಡು ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.ನಗರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೂ ಮುನ್ನ ಕೊಲ್ಲಾಪುರದಮ್ಮ ದೇವಿಗೆ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಚನ್ನಪಟ್ಟಣ ಉಪಚುನಾವಣೆಗೆ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಸಾಕಷ್ಟು ಅಭಿಪ್ರಾಯಗಳು ಕೇಳಿ ಬರುತ್ತಿವೆ. ಈ ಕುರಿತು ಬಿಜೆಪಿ ಕೇಂದ್ರ ಮತ್ತು ರಾಜ್ಯ ನಾಯಕರು, ಜೆಡಿಎಸ್ ರಾಜ್ಯ ನಾಯಕರು ಸಭೆ ನಡೆಸಿ ಅಂತಿಮವಾಗಿ ತೀರ್ಮಾನ ಕೈಗೊಳ್ಳುವ ಮೂಲಕ ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದಾರೆ ಎಂದರು.

ರಾಜ್ಯದಲ್ಲಿ ಚನ್ನಪಟ್ಟಣ ಒಂದೇ ಕ್ಷೇತ್ರದ ಉಪಚುನಾವಣೆ ನಡೆಯುತ್ತಿಲ್ಲ. ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಲ್ಲೂ ಉಪಚುನಾವಣೆ ನಡೆಯುತ್ತಿದೆ. ಹಾಗಾಗಿ ಎರಡೂ ಪಕ್ಷದ ನಾಯಕರುಗಳು ಕುಳಿತು ಚರ್ಚೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

ಚನ್ನಪಟ್ಟಣ ಉಪಚುನಾವಣೆಗೆ ಜೆಡಿಎಸ್ ಅಥವಾ ಬಿಜೆಪಿ ಅಭ್ಯರ್ಥಿ ಎನ್ನುವ ಪ್ರಶ್ನೆ ಉದ್ಭವಿಸುವುದಿಲ್ಲ. ಅಂತಿಮವಾಗಿ ಯಾರಾದರೂ ಆಗಲಿ ಎನ್‌ಡಿಎ ಅಭ್ಯರ್ಥಿ ಚುನಾವಣಾ ಕಣಕ್ಕಿಳಿಯಲಿದ್ದಾರೆ ಎಂದರು.ರಾಜ್ಯದ ಜನತೆ ಜೆಡಿಎಸ್ ಮತ್ತು ಬಿಜೆಪಿ ಸಮ್ಮಿಲನವನ್ನು ಒಪ್ಪಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಂದ ಹೆಚ್ಚು ಸಂಸದರನ್ನು ಆಯ್ಕೆ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ ಕೊಡುಗೆ ನೀಡಿದ್ದಾರೆ. ಹಾಗೆಯೇ ತುಮಕೂರು ಲೋಕಸಭಾ ಕ್ಷೇತ್ರದಿಂದ ವಿ. ಸೋಮಣ್ಣ ಗೆದ್ದು ಮಂತ್ರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.ರಾಜ್ಯದ ಜನತೆ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆಯನ್ನು ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ, ವಿಧಾನಸಭಾ ಚುನಾವಣೆಗಳನ್ನು ಒಟ್ಟಾಗಿ ಎದುರಿಸುತ್ತೇವೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್‌ಬಾಬು ಉಪಸ್ಥಿತರಿದ್ದರು.

ಕಾನೂನಿಗಿಂತ ಯಾರೂ ದೊಡ್ಡವರಲ್ಲ:  ಚಿತ್ರ ನಟ ದರ್ಶನ್ ವಿಚಾರದಲ್ಲಿ ಕಾನೂನಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಎಲ್ಲರೂ ಕಾನೂನಿಗೆ ತಲೆಬಾಗಬೇಕು. ನಾನು ಆ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.