ಸಾರಾಂಶ
ರಸ್ತೆ ಬದಿ ಕಸ ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳಲು ನಗರದ ಪ್ರತಿ ವಿದ್ಯುತ್ ಕಂಬಕ್ಕೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಕಣ್ಗಾವಲು ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ರಸ್ತೆ ಬದಿ ಕಸ ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳಲು ನಗರದ ಪ್ರತಿ ವಿದ್ಯುತ್ ಕಂಬಕ್ಕೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಕಣ್ಗಾವಲು ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಮನೆಯ ಬಳಿ ಬರುವ ಕಸ ಸಂಗ್ರಹ ವಾಹನಗಳಿಗೆ ಕಸವನ್ನು ಹಾಕದೆ ರಸ್ತೆ ಬದಿ ಎಸೆಯುತ್ತಿದ್ದಾರೆ. ಈ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ನಗರದ ಪ್ರತಿ ವಿದ್ಯುತ್ ಕಂಬಕ್ಕೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸೂಚನೆ ನೀಡಲಾಗಿದೆ. ಈಗಾಗಲೇ ಕಸ ಹಾಗೂ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಹೇಳಿದರು.
ನಗರದಲ್ಲಿ ಡೆಂಘೀ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಕೆಲಸ ಮಾಡುತ್ತಿವೆ. ಎಲ್ಲ ಇಲಾಖೆಗಳ ಮುಖ್ಯಸ್ಥರೊಂದಿಗೆ ಮುಖ್ಯಮಂತ್ರಿಗಳು ಪ್ರತ್ಯೇಕ ಸಭೆ ನಡೆಸುತ್ತಾರೆ ಎಂದರು.