ಸಾರಾಂಶ
ನಗರದ ರೈಲ್ವೆ ನಿಲ್ದಾಣಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಹೆಸರು ಮತ್ತು ಕ್ಯಾತ್ಸಂದ್ರ ನಿಲ್ದಾಣಕ್ಕೆ ಸಿದ್ಧಗಂಗಾ ನಿಲ್ದಾಣ ಎಂದು ಹೆಸರಿಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮತಿಸಿದ್ದಾರೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.
ತುಮಕೂರು : ನಗರದ ರೈಲ್ವೆ ನಿಲ್ದಾಣಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಹೆಸರು ಮತ್ತು ಕ್ಯಾತ್ಸಂದ್ರ ನಿಲ್ದಾಣಕ್ಕೆ ಸಿದ್ಧಗಂಗಾ ನಿಲ್ದಾಣ ಎಂದು ಹೆಸರಿಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮತಿಸಿದ್ದಾರೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.
ತುಮಕೂರಿನಲ್ಲಿ ತಮ್ಮ ಕಚೇರಿ ಉದ್ಘಾಟಿಸಿ ಮಾತನಾಡಿದರು. ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲು ಹಾಗೂ ಕ್ಯಾತ್ಸಂದ್ರ ನಿಲ್ದಾಣಕ್ಕೆ ಸಿದ್ಧಗಂಗಾ ನಿಲ್ದಾಣ ಎಂದು ಹೆಸರಿಡುವಂತೆಯೂ ಪತ್ರಗಳು ಬಂದಿವೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆಯೂ ತಿಳಿಸಲಾಗಿದೆ. ಜತೆಗೆ ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಿದ್ದು, ಅವರು ಸಮ್ಮತಿಸಿದ್ದಾರೆ ಎಂದು ಹೇಳಿದರು.
ರಾಜ್ಯಕ್ಕೆ 3 ಮೆಮೋ ರೈಲು ನೀಡಲಾಗುತ್ತಿದ್ದು, ಈ ಪೈಕಿ ತುಮಕೂರಿಗೂ ಒಂದು ಮೆಮೋ ರೈಲು ಬರಲಿದೆ. ಈ ರೈಲು ಬೆಳಿಗ್ಗೆ 9.05 ಕ್ಕೆ ತುಮಕೂರಿನಿಂದ ಹೊರಟು 10.05ಕ್ಕೆ ಯಶವಂತಪುರ ತಲುಪಲಿದೆ. ಮತ್ತೆ ಸಂಜೆ ತುಮಕೂರಿಗೆ ಆಗಮಿಸಲಿದೆ. ಈ ರೈಲಿನಲ್ಲಿ ೫ ಸಾವಿರ ಪ್ರಯಾಣಿಕರು ಪ್ರಯಾಣಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.
ಅಮೃತ್ ಭಾರತ್ ಯೋಜನೆಯಡಿ ರಾಜ್ಯದ 61 ರೈಲ್ವೆ ನಿಲ್ದಾಣಗಳನ್ನು 2 ಸಾವಿರ ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿರುವ 61 ರೈಲ್ವೆ ನಿಲ್ದಾಣಗಳನ್ನು ಅಮೃತ್ ಭಾರತ್ ಯೋಜನೆಯಡಿ ಮೇಲ್ದರ್ಜೆಗೇರಿಸಲಾಗುತ್ತಿದ್ದು, ಶೀಘ್ರದಲ್ಲೇ ಕೆಲಸ ಪ್ರಾರಂಭವಾಗಲಿದೆ ಎಂದು ತಿಳಿಸಿದರು.
ಈ ಬಾರಿಯ ರೈಲ್ವೆ ಬಜೆಟ್‌ನಲ್ಲಿ ರಾಜ್ಯದ ರೈಲ್ವೆ ಇಲಾಖೆಗೆ 7560 ಕೋಟಿ ರೂ. ಮೀಸಲಿರಿಸಲಾಗಿದೆ. ಇದುವರೆಗೂ ಪ್ರತಿ ವರ್ಷ 5 ಸಾವಿರ ಕೋಟಿ ರೂ.ಗಳನ್ನು ರೈಲ್ವೆ ಅಭಿವೃದ್ಧಿ ಕಾರ್ಯಗಳಿಗೆ ಬಿಡುಗಡೆ ಮಾಡಲಾಗುತ್ತಿತ್ತು. ಈ ಬಾರಿ ಈ ಮೊತ್ತವನ್ನು 7560 ರು.ಗೆ ಹೆಚ್ಚಿಸಲಾಗಿದೆ ಎಂದರು.
ರಾಜ್ಯದಲ್ಲಿ 118 ಕೋಟಿ ರು. ವೆಚ್ಚದಲ್ಲಿ ವ್ಯವಸ್ಥಿತ ರೈಲ್ವೆ ನಿಲ್ದಾಣಗಳ ನಿರ್ಮಾಣ ಮಾಡಲಾಗುತ್ತಿದೆ. ಬೆಂಗಳೂರಿನ ಕಂಟೋಲ್‌ಮೆಂಟ್, ಯಶವಂತಪುರ ಸೇರಿದಂತೆ ಇನ್ನಿತರೆಡೆ ವ್ಯವಸ್ಥಿತ ರೈಲ್ವೆ ನಿಲ್ದಾಣಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ಹಾಸನ ಜಿಲ್ಲೆಯ ಶ್ರವಣಬೆಳಗೊಳ ಮತ್ತು ತುಮಕೂರು ಜಿಲ್ಲೆಯ ಗುಬ್ಬಿ ರೈಲ್ವೆ ನಿಲ್ದಾಣಗಳ ಆಧುನೀಕರಣ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಗುಬ್ಬಿ ರೈಲ್ವೆ ನಿಲ್ದಾಣಕ್ಕೆ 7 ಕೋಟಿ ರು. ಹಾಗೂ ಶ್ರವಣಬೆಳಗೊಳ ರೈಲ್ವೆ ನಿಲ್ದಾಣವನ್ನು 9 ಕೋಟಿ ರು. ವೆಚ್ಚದಲ್ಲಿ ಆಧುನೀಕರಣಗೊಳಿಸಲಾಗುವುದು ಎಂದರು.
ಶಾಸಕರಾದ ಸುರೇಶ್‌ಗೌಡ, ಜ್ಯೋತಿಗಣೇಶ್, ಮಾಜಿ ಸಚಿವ ಬಿ.ಸಿ.ನಾಗೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್ ಮತ್ತಿತರರು ಉಪಸ್ಥಿತರಿದ್ದರು.
24ಕ್ಕೆ ನಗರ ನಿಲ್ದಾಣದಲ್ಲಿ ವಂದೇ ಭಾರತ್ ನಿಲುಗಡೆ: ಬೆಂಗಳೂರಿನಿಂದ ಹುಬ್ಬಳ್ಳಿಗೆ ತುಮಕೂರು ಮೂಲಕ ವಂದೇ ಭಾರತ್ ರೈಲು ಸಂಚರಿಸುತ್ತಿದ್ದು, ತುಮಕೂರಿನಲ್ಲಿ ಈ ರೈಲು ನಿಲುಗಡೆಗೆ ಪ್ರಯಾಣಿಕರಿಂದ ಮನವಿಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಆ.24 ರಂದು ಸಂಜೆ 6 ಗಂಟೆಗೆ ವಂದೇ ಭಾರತ್ ರೈಲು ನಿಲುಗಡೆಯಾಗಲಿದೆ. ಅಂದಿನಿಂದ ಪ್ರತಿನಿತ್ಯ ವಂದೇ ಭಾರತ್ ರೈಲು ತುಮಕೂರು ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಹೇಳಿದರು.