ಸಾರಾಂಶ
ಕನ್ನಡಪ್ರಭ ವಾರ್ತೆ, ಚಾಮರಾಜನಗರ
ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿಶ್ ಶಾ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಡಿ. 31 ರಂದು ಕರೆ ನೀಡಿರುವ ಚಾಮರಾಜನಗರ ಬಂದ್‌ಗೆ ಅಹಿಂದ ಸಂಘಟನೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸಂಘಟನೆ ಜಿಲ್ಲಾಧ್ಯಕ್ಷ ಹಳೇಪುರ ಮಹೇಶ್ ಘೋಷಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಅಹಿಂದ ಸಂಘಟನೆ ವತಿಯಿಂದ ನಡೆದ ಚಾಮರಾಜನಗರ ಬಂದ್ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಭಾರತದ ಸರ್ವರಿಗೂ ಸಮಾನ ಅವಕಾಶ ಕೊಟ್ಟಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಅಮಿಶ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ದೇಶದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ ( ಪಾಪು) ಅವರ ಕರೆ ನೀಡಿರುವ ಚಾಮರಾಜನಗರ ಬಂದ್ ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.ಅಂಬೇಡ್ಕರ್ ಅವರು ಸಂವಿಧಾನ ದಡಿಯಲ್ಲಿ ಕೊಟ್ಟಿರುವ ಮೀಸಲಾತಿ ಋಣದಲ್ಲಿ ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಗೃಹ ಸಚಿವರಾಗಿ ಮುಂದುವರೆಯುವ ಯಾವುದೇ ನೈತಿಕತೆ ಇಲ್ಲ. ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಂಬೇಡ್ಕರ್ ಅವರ ಬಗ್ಗೆ ಬಿಜೆಪಿಗೆ ಗೌರವ ಇದ್ದರೆ ಅಮಿತ್ ಶಾ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಮಹಿಳಾ ಘಟಕ ರಾಜ್ಯ ಉಪಾಧ್ಯಕ್ಷೆ ಕಾವೇರಿ ಶಿವ ಕುಮಾರ್, ಜಿಲ್ಲಾ ಕಾರ್ಯಾಧ್ಯಕ್ಷ ರಾಜ್ ಕುಮಾರ್, ಯಳಂದೂರು ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ ಗಣಿಗನೂರು, ರವಿಕುಮಾರ್, ಜಿಲ್ಲಾ ಉಪಾಧ್ಯಕ್ಷ ಹೊನ್ನಹಳ್ಳಿ ಬಸವಣ್ಣ, ಬಿ.ರವಿ, ರೇಚಂಬಳ್ಳಿ ಮಧು, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಭಾಗ್ಯ, ರತ್ನಮ್ಮ, ಕೋಮಲ, ದುಂಡಮ್ಮ, ರೇಖಾನಾಯಕ್, ಇತರರು ಭಾಗವಹಿಸಿದ್ದರು.