ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ; ಶ್ರೀರಾಮುಲು ಬಂಧನ

| Published : Jun 30 2024, 12:50 AM IST / Updated: Jun 30 2024, 12:51 AM IST

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣವನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು.

ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಅಹೋರಾತ್ರಿ ಧರಣಿ ನಡೆಸಿದ್ದ ಮಾಜಿ ಸಚಿವ ಬಿ.ಶ್ರೀರಾಮುಲು ಹಾಗೂ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಶನಿವಾರ ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣವನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಕುಟುಂಬಕ್ಕೆ ಪರಿಹಾರ ನೀಡಬೇಕು. ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದ್ದರು.

ಆದರೆ, ಮಾಜಿ ಸಚಿವ ಬಿ.ಶ್ರೀರಾಮುಲು ಹಾಗೂ ಕೆಲವು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹೋರಾಟ ಮುಂದುವರಿಸಿ, ಅಹೋರಾತ್ರಿ ಧರಣಿ ಕೈಗೊಂಡರು. ಸಚಿವ ನಾಗೇಂದ್ರ ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ಬಂಧನ ಆಗುವವರೆಗೆ ಹೋರಾಟ ಮುಂದುವರಿಸುವುದಾಗಿ ಶ್ರೀರಾಮುಲು ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಸಹ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶ್ರೀರಾಮುಲು ಧರಣಿ ಮುಂದುವರಿದಿತ್ತು.

ಒಂದು ದಿನಕ್ಕೆ ಮಾತ್ರ ಅನುಮತಿ:

ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪ್ರತಿಭಟನೆಗೆ ಒಂದು ದಿನ ಮಾತ್ರ ಅನುಮತಿ ಪಡೆಯಲಾಗಿದ್ದು, ಧರಣಿಯಿಂದ ಹಿಂದಕ್ಕೆ ಸರಿಯುವಂತೆ ಬಿ.ಶ್ರೀರಾಮುಲು ಅವರಿಗೆ ಮನವೊಲಿಕೆಗೆ ಮುಂದಾದರು. ಇದಕ್ಕೆ ಒಪ್ಪದಿದ್ದಾಗ ಶ್ರೀರಾಮುಲು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಂಧಿಸಿದರು. ಹೆಚ್ಚುವರಿ ಎಸ್ಪಿ ರವಿಕುಮಾರ್ ಅವರು ಶ್ರೀರಾಮುಲು ಅವರನ್ನು ವಶಕ್ಕೆ ಪಡೆಯುತ್ತಿದ್ದಂತೆಯೇ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಇದಕ್ಕೆ ಜಗ್ಗದ ಪೊಲೀಸರು ಶ್ರೀರಾಮುಲು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರನ್ನು ಬಂಧಿಸಿ, ಗ್ರಾಮೀಣ ಠಾಣೆಗೆ ಕರೆದೊಯ್ದರು.

ಪಕ್ಷದ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಡೇದ ಸುರೇಶ್ ತೋರಣಗಲ್, ರೈತ ಮೋರ್ಚಾದ ರಾಜ್ಯ ಮುಖಂಡ ಎಸ್.ಗುರುಲಿಂಗನಗೌಡ, ಕೆ.ಎಸ್. ದಿವಾಕರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುಗುಣಾ, ಉಜ್ವಲಾ, ತಿಮ್ಮಪ್ಪ, ವೇಮಣ್ಣ, ಸುರೇಂದ್ರ, ಗೋವಿಂದರಾಜು ಸೇರಿದಂತೆ ನೂರಾರು ಕಾರ್ಯಕರ್ತರು ಬಂಧನಕ್ಕೊಳಗಾದರು.