ಸಂವಿಧಾನದ ಆಶಯಗಳ ಕುರಿತು ಮಾತನಾಡುವ ಸರ್ಕಾರ, ಜನರ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುವ ಮಹಿಳೆಯರ ನ್ಯಾಯಯುತ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವುದು ಖಂಡನೀಯ. ಆಶಾ ಕಾರ್ಯಕರ್ತೆಯರ ಸೇವೆಯನ್ನು ಭಾಷಣಗಳಲ್ಲಿ ಹೊಗಳುವ ಸರ್ಕಾರ, ಅವರ ಬದುಕಿಗೆ ಅಗತ್ಯವಾದ ಗೌರವಧನ ನೀಡಲು ಹಿಂದೇಟು ಹಾಕುತ್ತಿದೆ. ಕಾರ್ಪೊರೇಟ್ ಕಂಪನಿಗಳಿಗೆ ಸಾವಿರಾರು ಕೋಟಿ ರೂಪಾಯಿ ತೆರಿಗೆ ವಿನಾಯಿತಿ ನೀಡುವ ಸರ್ಕಾರಕ್ಕೆ ದುಡಿಯುವ ಮಹಿಳೆಯರಿಗೆ ನ್ಯಾಯಯುತ ಗೌರವಧನ ನೀಡಲು ಹಣವಿಲ್ಲವೇ? ಆಶಾ ಕಾರ್ಯಕರ್ತೆಯರ ಎಲ್ಲ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ತಿಂಗಳಿಗೆ ₹ 15 ಸಾವಿರ ಗೌರವಧನ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಹೋರಾಟ ೧೨ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ನಿರತ ಆಶಾ ಕಾರ್ಯಕರ್ತೆಯರಿಗೆ ಬೆಂಬಲ ಸೂಚಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ನೇತೃತ್ವದಲ್ಲಿ ನಗರದ ಹೇಮಾವತಿ ಪ್ರತಿಮೆ ಮುಂಭಾಗ ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.ಹಿರಿಯ ಪತ್ರಕರ್ತ ಆರ್. ಪಿ. ವೆಂಕಟೇಶಮೂರ್ತಿ ಮಾತನಾಡಿ, ಆಶಾ ಕಾರ್ಯಕರ್ತೆಯರು ತಮ್ಮ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದಾಗಲೇ ಗಂಭೀರವಾಗಿ ಪರಿಗಣಿಸಿ ಪರಿಹಾರ ಕಲ್ಪಿಸಬೇಕಿತ್ತು. ಇಂದಿನ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ದಿನಕ್ಕೆ ೫೦೦ ಇಲ್ಲದೆ ಜೀವನ ನಡೆಸುವುದೇ ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ತಿಂಗಳಿಗೆ ಕೇವಲ ೫ ಸಾವಿರ ಗೌರವಧನ ನೀಡುತ್ತಿರುವುದು ದುಡಿಯುವ ಮಹಿಳೆಯರ ಶ್ರಮಕ್ಕೆ ತಕ್ಕ ಪ್ರತಿಫಲ ನೀಡದಂತಾಗಿದೆ. ಸರ್ಕಾರ ಕೂಡಲೇ ಅವರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು. ಸಂವಿಧಾನದ ಆಶಯಗಳ ಕುರಿತು ಮಾತನಾಡುವ ಸರ್ಕಾರ, ಜನರ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುವ ಮಹಿಳೆಯರ ನ್ಯಾಯಯುತ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವುದು ಖಂಡನೀಯ. ಆಶಾ ಕಾರ್ಯಕರ್ತೆಯರ ಸೇವೆಯನ್ನು ಭಾಷಣಗಳಲ್ಲಿ ಹೊಗಳುವ ಸರ್ಕಾರ, ಅವರ ಬದುಕಿಗೆ ಅಗತ್ಯವಾದ ಗೌರವಧನ ನೀಡಲು ಹಿಂದೇಟು ಹಾಕುತ್ತಿದೆ. ಕಾರ್ಪೊರೇಟ್ ಕಂಪನಿಗಳಿಗೆ ಸಾವಿರಾರು ಕೋಟಿ ರೂಪಾಯಿ ತೆರಿಗೆ ವಿನಾಯಿತಿ ನೀಡುವ ಸರ್ಕಾರಕ್ಕೆ ದುಡಿಯುವ ಮಹಿಳೆಯರಿಗೆ ನ್ಯಾಯಯುತ ಗೌರವಧನ ನೀಡಲು ಹಣವಿಲ್ಲವೇ? ಆಶಾ ಕಾರ್ಯಕರ್ತೆಯರ ಎಲ್ಲ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಆಗ್ರಹಿಸಿದರು.ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲೇಶ್ ಗೌಡ ಮಾತನಾಡಿ, ಆಶಾ ತಾಯಂದಿರ ಹೋರಾಟ ಅತ್ಯಂತ ಮನಕಲಕುವಂತಿದೆ. ರಾಜ್ಯದ ಜನತೆ ಅವರ ಹೋರಾಟಕ್ಕೆ ಬೆಂಬಲ ಸೂಚಿಸುತ್ತಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ಸರಿಯಲ್ಲ. ಮಹಿಳೆಯರ ಆರೋಗ್ಯಕ್ಕಾಗಿ ದುಡಿಯುವ ಆಶಾ ಕಾರ್ಯಕರ್ತೆಯರ ಆರೋಗ್ಯ, ಯೋಗಕ್ಷೇಮ ಮತ್ತು ಗೌರವಯುತ ಬದುಕನ್ನು ಖಚಿತಪಡಿಸುವುದು ಸರ್ಕಾರದ ಕರ್ತವ್ಯವಾಗಿದೆ. ಕಳೆದ ವರ್ಷ ೨ ಸಾವಿರ ಗೌರವಧನ ಹೆಚ್ಚಿಸುವುದಾಗಿ ನೀಡಿದ್ದ ಭರವಸೆಯನ್ನೂ ಈಡೇರಿಸಿಲ್ಲ. ಕೇವಲ ಭರವಸೆಗಳಿಂದ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಬೇಡಿಕೆಗಳನ್ನು ಈಡೇರಿಸುವ ಅಧಿಕೃತ ಆದೇಶ ಹೊರಡಿಸುವ ಮೂಲಕ ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸಬೇಕು ಎಂದು ಆಗ್ರಹಿಸಿದರು. ಮಾಸಿಕ ೧೫ ಸಾವಿರ ಗೌರವಧನ ನೀಡಬೇಕು ಎಂಬ ಪ್ರಮುಖ ಬೇಡಿಕೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸಾವಿರಾರು ಆಶಾ ಕಾರ್ಯಕರ್ತೆಯರು ನವೆಂಬರ್ ೧೫ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಮೈಕೊರೆಯುವ ಚಳಿ, ಮಳೆಯನ್ನೂ ಲೆಕ್ಕಿಸದೆ ಪುಟ್ಟ ಮಕ್ಕಳೊಂದಿಗೆ ಬೀದಿಯಲ್ಲೇ ಹೋರಾಟ ನಡೆಸುತ್ತಿರುವ ಆಶಾ ತಾಯಂದಿರ ಹೋರಾಟ ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಎಐಯುಟಿಯುಸಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಹೋರಾಟ ನಿಜಕ್ಕೂ ಸ್ಪೂರ್ತಿದಾಯಕವಾಗಿದೆ ಎಂದು ಹೇಳಿದರು. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಪ್ರಸ್ತುತ ನೀಡುತ್ತಿರುವ ಗೌರವಧನದಲ್ಲಿ ಕುಟುಂಬ ನಿರ್ವಹಣೆ ಮಾಡುವುದು ಅಸಾಧ್ಯವಾಗಿದೆ. ಇದೇ ಕಾರಣಕ್ಕೆ ಅನಿರ್ದಿಷ್ಟಾವಧಿ ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಕೋವಿಡ್ನಂತಹ ಸಂಕಷ್ಟದ ಸಂದರ್ಭದಲ್ಲಿ ಜೀವದ ಹಂಗು ತೊರೆದು ಮನೆಮನೆಗೆ ತೆರಳಿ ಆರೋಗ್ಯ ಇಲಾಖೆಯ ಕೆಲಸಗಳನ್ನು ನಿರ್ವಹಿಸಿದ ನಮ್ಮ ಸೇವೆ ಈಗ ಸರ್ಕಾರಕ್ಕೆ ನೆನಪಾಗುತ್ತಿಲ್ಲವೇ? ವಿದ್ಯಾರ್ಥಿಗಳು ನಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತಿರುವುದು ಮತ್ತಷ್ಟು ಹೋರಾಟದ ಶಕ್ತಿ ತುಂಬಿದೆ. ಸರ್ಕಾರ ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಈಡೇರಿಸಬೇಕು ಎಂದು ಮನವಿ ಮಾಡಿದರು.ಪ್ರತಿಭಟನೆಯಲ್ಲಿ ಹಾಸನ ಜಿಲ್ಲಾ ಅಧ್ಯಕ್ಷೆ ಚೈತ್ರ, ಆಶಾ ಕಾರ್ಯಕರ್ತೆ ವಿಜಯಲಕ್ಷ್ಮಿ ಎಐಡಿಎಸ್ಒ ಜಿಲ್ಲಾಧ್ಯಕ್ಷೆ ಚೈತ್ರ, ಜಿಲ್ಲಾ ಉಪಾಧ್ಯಕ್ಷ ಅಭಿಷೇಕ್, ಜಿಲ್ಲಾ ಕಾರ್ಯದರ್ಶಿ ಸುಷ್ಮಾ, ವಿದ್ಯಾರ್ಥಿಗಳಾದ ವಿನೋದ್, ತರುಣ್, ಶೃತಿ, ತಿಲಕ್, ಮನೋಜ್, ಯಶವಂತ್ ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.ಫೋಟೋ:
ಆಶಾ ಕಾರ್ಯಕರ್ತೆಯರಿಗೆ ಬೆಂಬಲ ಸೂಚಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ನೇತೃತ್ವದಲ್ಲಿ ನಗರದ ಹೇಮಾವತಿ ಪ್ರತಿಮೆ ಮುಂಭಾಗ ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.