ಸಾರಾಂಶ
ಕನ್ನಡಪ್ರಭ ವಾರ್ತೆ ಬಳ್ಳಾರಿ
ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕಾಲೇಜು ವಿದ್ಯಾರ್ಥಿನಿಗೆ ಬ್ಲ್ಯಾಕ್ ಮೇಲ್ ಮಾಡಿ ಇಬ್ಬರು ಉಪನ್ಯಾಸಕರು ಅತ್ಯಾಚಾರ ಎಸಗಿರುವ ಪ್ರಕರಣ ಖಂಡಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ಸದಸ್ಯರು ಇಲ್ಲಿನ ಜಿಲ್ಲಾಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದರು.ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ಕಾರ ಯಾವುದೇ ಗಂಭೀರ ಕ್ರಮ ಕೈಗೊಳ್ಳದಿರುವುದರಿಂದ ಪ್ರಕರಣಗಳ ಸಂಖ್ಯೆ ದಿನದಿನಕ್ಕೆ ಹೆಚ್ಚಾಗುತ್ತಿದೆ. ಮಹಿಳೆಯರಿಗೆ ರಕ್ಷಣೆಗೆ ನೀಡಲು ಪೂರಕ ಕ್ರಮಗಳನ್ನು ಸರ್ಕಾರಗಳು ವಹಿಸಬೇಕು ಎಂದು ಒತ್ತಾಯಿಸಿದರು.
ದಕ್ಷಿಣ ಕನ್ನಡದ ಖಾಸಗಿ ಕಾಲೇಜೊಂದರ ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ ಉಪನ್ಯಾಸಕರಾದ ನರೇಂದ್ರ ಹಾಗೂ ಸಂದೀಪ್ ಹಾಗೂ ನರೇಂದ್ರ ಎಂಬಾತನ ಸ್ನೇಹಿತ ಅನೂಪ್ ಎಂಬುವರು ವಿದ್ಯಾರ್ಥಿನಿಯ ಮೇಲೆ ಬೆಂಗಳೂರಿನ ಕಾಡುಬೀಸನಹಳ್ಳಿಯಲ್ಲಿ ಅತ್ಯಾಚಾರ ಎಸಗಿರುವುದು ತೀವ್ರ ಆಘಾತ ತಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿ, ಜೈಲಿಗೆ ಕಳಿಸಲಾಗಿದೆಯಾದರೂ, ಈ ರೀತಿಯ ಪ್ರಕರಣಗಳು ಜರುಗದಂತೆ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, ಬೆಂಗಳೂರಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ, ಬೆದರಿಕೆ ಒಡ್ಡಿರುವ ಇಬ್ಬರು ಉಪನ್ಯಾಸಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದಂತೆ ನಿಗಾ ವಹಿಸಬೇಕು ಎಂದು ಆಗ್ರಹಿಸಿದರು.
ಒರಿಸ್ಸಾದಲ್ಲಿ ಕಾಲೇಜಿನ ಉಪನ್ಯಾಸಕರು ನೀಡಿರುವ ಲೈಂಗಿಕ ಕಿರುಕುಳದಿಂದ ಬೇಸತ್ತು, ಒಬ್ಬ ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೇಶದ ನಾನಾ ಕಡೆಗಳಲ್ಲಿ ನಿತ್ಯವೂ ಮಹಿಳಾ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡದಿರುವುದೇ ಮಹಿಳಾ ದೌರ್ಜನ್ಯಗಳು ಹೆಚ್ಚಾಗಲು ಕಾರಣವಾಗಿದೆ ಎಂದು ತಿಳಿಸಿದರು.ಬೆಂಗಳೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣವನ್ನು ತ್ವರಿತ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಎಲ್ಲಾ ಅಪರಾಧಿಗಳನ್ನು ಕೂಡಲೇ ಕಾನೂನಿನ ಮುಂದೆ ತರಬೇಕು. ಆರೋಪಿ ಉಪನ್ಯಾಸಕರನ್ನು ತಕ್ಷಣವೇ ಅಮಾನತುಗೊಳಿಸಬೇಕು. ಇದರಲ್ಲಿ ಪ್ರಬಲ ಕುಂದುಕೊರತೆ ನಿವಾರಣಾ ಕಾರ್ಯಸಮಿತಿ ಸ್ಥಾಪಿಸುವುದು ಸೇರಿದಂತೆ, ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯದಿಂದ ವಿದ್ಯಾರ್ಥಿಗಳನ್ನು ರಕ್ಷಿಸಲು ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾಧ್ಯಕ್ಷ ಕೆ.ಈರಣ್ಣ, ಜಿಲ್ಲಾ ಉಪಾಧ್ಯಕ್ಷ ಎಂ.ಶಾಂತಿ, ಪದಾಧಿಕಾರಿಗಳಾದ ಹೊನ್ನರಸ್ವಾಮಿ, ಗಿರೀಶ್ ಮತ್ತು ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.