ಸಾರಾಂಶ
ಕನ್ನಡಪ್ರಭ ವಾರ್ತೆ ರಾಯಚೂರು
ಜಿಲ್ಲೆಗೆ ಏಮ್ಸ್ ಮಂಜೂರು ಮಾಡುವ ವಿಚಾರವಾಗಿ ಫೆ.10ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಏಮ್ಸ್ ಹೋರಾಟಗಾರರ ನಿಯೋಗವು ಭೇಟಿಯಾಗಿ ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಏಮ್ಸ್ ಮಂಜೂರಾತಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಬಸವರಾಜ ಕಳಸ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಏಮ್ಸ್ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿ ಕಳೆದ 634 ದಿನಗಳಿಂದ ಧರಣಿ ಸತ್ಯಗ್ರಹ ನಡೆಸಲಾಗುತ್ತಿದೆ. ಇದೀಗ ಈ ಹೋರಾಟಕ್ಕೆ ಕೇವಲ ಜಿಲ್ಲೆಯಷ್ಟೇ ಅಲ್ಲ ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಪ್ರತ್ಯೇಕ್ಷ ಹಾಗೂ ಪರೋಕ್ಷವಾಗಿ ಬೆಂಬಲ ವ್ಯಕ್ತವಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಮೂರು ಬಾರಿ ಪತ್ರ ಬರೆದಿದ್ದರು. ಕಳೆದ ತಿಂಗಳು ಜಿಲ್ಲೆಗೆ ಆಗಮಿಸಿದ್ದ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಭೇಟಿ ಮಾಡಿದಾಗ ಏಮ್ಸ್ ವಿಚಾರಕ್ಕೆ ಸಕರಾತ್ಮಕವಾಗಿ ಸ್ಪಂದಿಸಿ ಈಗ ಅಮಿತ್ ಶಾ ಅವರ ಭೇಟಿಗೆ ಅನುಕೂಲ ಕಲ್ಪಿಸಿದ್ದಾರೆ ಎಂದರು.
ಬೆಂಗಳೂರಿನಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಏಮ್ಸ್ ಅವಶ್ಯಕತೆ ಹಾಗೂ ಹೋರಾಟದ ಕುರಿತು ಸಮಗ್ರವಾಗಿ ಮನವರಿಕೆ ಮಾಡಿಕೊಡಲಾಗುವುದು, ಅಲ್ಲಿ ಅವರಿಂದ ಸರಿಯಾದ ಪ್ರತಿಕ್ರಿಯೆ ಸಿಗದಿದ್ದರೆ ದೆಹಲಿಯಲ್ಲಿ ಸಹ ಹೋರಾಟ ಆರಂಭಿಸಲಾಗುವುದು ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಸಹ ಸಂಚಾಲಕ ಅಶೋಕ ಕುಮಾರ ಜೈನ್, ಮಹಾವೀರ್, ಜಾನ್ ವೆಸ್ಲಿ, ಜಗದೀಶ ಪೂರ್ತಿಪ್ಲಿ ಇದ್ದರು.