ಐಕಳಬಾವ ಕಾಂತಾಬಾರೆ ಬೂದಾಬಾರೆ ಕುಂಬಳ ಸಮಿತಿ, ಐಕಳ ಮತ್ತು ಮುಂಬೈ ವತಿಯಿಂದ ಫೆಬ್ರವರಿ 7ರಂದು ನಡೆಯುವ ಐಕಳಬಾವ ಕಾಂತಾಬಾರೆ ಬೂದಾಬಾರೆ ಕಂಬಳದ ಸುವರ್ಣ ಸಂಭ್ರಮದ ಕಂಬಳೋತ್ಸವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ‘ಕಂಬಳ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮಂಗಳೂರು: ಐಕಳಬಾವ ಕಾಂತಾಬಾರೆ ಬೂದಾಬಾರೆ ಕುಂಬಳ ಸಮಿತಿ, ಐಕಳ ಮತ್ತು ಮುಂಬೈ ವತಿಯಿಂದ ಫೆಬ್ರವರಿ 7ರಂದು ನಡೆಯುವ ಐಕಳಬಾವ ಕಾಂತಾಬಾರೆ ಬೂದಾಬಾರೆ ಕಂಬಳದ ಸುವರ್ಣ ಸಂಭ್ರಮದ ಕಂಬಳೋತ್ಸವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ‘ಕಂಬಳ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಂಬಳೋತ್ಸವ ಸಮಿತಿ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ.ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕಳೆದ 32 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಸಾರ್ಥಕ ಸೇವೆಯನ್ನು ಗೈದಿರುವ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಎಸ್‌ಸಿಡಿಸಿಸಿ ಬ್ಯಾಂಕಿನ ಅಪೂರ್ವ ಪ್ರಗತಿಯ ಸ್ಫೂರ್ತಿ ಶಕ್ತಿಯಾಗಿದ್ದಾರೆ. ನಾಲ್ಕೂವರೆ ದಶಕಗಳಿಂದ ಸಹಕಾರ ರಂಗದಲ್ಲಿ ನಿರ್ವಂಚನೆಯಿಂದ ಕಾರ್ಯ ನಿರ್ವಹಿಸುತ್ತಾ ಬಂದಿರುವ ಇವರು, ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಯ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಿ ಸಹಕಾರಿ ರಂಗಕ್ಕೆ ಹೊಸ ಆಯಾಮವನ್ನು ತಂದುಕೊಟ್ಟವರು. ಪ್ರಭಾವಶಾಲಿ ನಾಯಕತ್ವದಿಂದ ಗುರುತಿಸಿಕೊಂಡ ಇವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷರಾಗಿ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಇದರ ಸಂಸ್ಥಾಪಕರಾಗಿ ವಿಶಿಷ್ಟ ಹಾಗೂ ಅನುಕರಣೀಯವಾಗಿ ಸಮಾಜಸೇವೆಗೈದಿದ್ದಾರೆ.ಸಹಕಾರ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿರುವ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಕಾರ್ಯ ಸಾಧನೆಯನ್ನು ಗುರುತಿಸಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳು ಅರಸಿ ಬಂದಿವೆ. ಈ ಬಾರಿ ಅವರು ವಿಶ್ವ ಜಾಗತಿಕ ಪ್ರಭಾವಿ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ, ಹೆಮ್ಮೆಯ ಕನ್ನಡಿಗ ಪ್ರಶಸ್ತಿ, ಗ್ಲೋಬಲ್ ಅಚೀವರ್ಸ್ ಪ್ರಶಸ್ತಿ ಹಾಗೂ ಅಮೆರಿಕದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಿಂದ ಮಹಿಳಾ ಸಬಲೀಕರಣಕ್ಕಾಗಿ ‘ವಿಷನರಿ ಲೀಡರ್‌ಶಿಪ್ ಅವಾರ್ಡ್’ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಕಂಬಳ ಪ್ರೇಮಿ: ಸಹಕಾರ, ಸಾಮಾಜಿಕ, ಬ್ಯಾಂಕಿಂಗ್, ಧಾರ್ಮಿಕ.. ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧಕರಾಗಿ, ನವೋದಯ ಸ್ವಸಹಾಯ ಸಂಘಗಳ ಹರಿಕಾರರಾಗಿ ಅಪೂರ್ವ ಪರಂಪರೆಯನ್ನು ರೂಪಿಸಿದ ರಾಜೇಂದ್ರ ಕುಮಾರ್ ಅವರೊಬ್ಬ ಕಂಬಳ ಪ್ರೇಮಿ. ಅವರ ಅತ್ಯಪೂರ್ವ ಕೊಡುಗೆ ಕರಾವಳಿಯ ಜಾನಪದ ಕ್ರೀಡೆ ಎನಿಸಿದ ಕಂಬಳಕ್ಕೂ ಲಭಿಸಿದೆ. ಕಂಬಳ ಪ್ರೇಮಿಯಾಗಿ, ಪ್ರೋತ್ಸಾಹಕರಾಗಿ, ಮಾರ್ಗದರ್ಶಕರಾಗಿರುವ ಇವರ ಸೇವೆ ಅನನ್ಯವಾದದ್ದು. ಕರಾವಳಿ ಭಾಗದ ಸಾಂಪ್ರದಾಯಿಕ ಹಾಗೂ ಗ್ರಾಮೀಣ ಕ್ರೀಡೆಯಾದ ಕಂಬಳವನ್ನು ನಿರಂತರವಾಗಿ ಪ್ರೋತ್ಸಾಹಿಸಿಸುತ್ತಾ ಬಂದಿರುವ ರಾಜೇಂದ್ರ ಕುಮಾರ್ ಅವರನ್ನು ತುಳುನಾಡಿನ ಸಮಸ್ತ ಕಂಬಳ ಅಭಿಮಾನಿಗಳ ಪರವಾಗಿ ಐಕಳಬಾವ ಕಾಂತಾಬಾರೆ ಬೂದಾಬಾರೆ ಕಂಬಳದ ಸುವರ್ಣ ಸಂಭ್ರಮದ ಕಂಬಳೋತ್ಸವದಲ್ಲಿ ‘ಕಂಬಳ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ.