ದುಡಿಯುವ ವರ್ಗದ ಜನರ ಹಕ್ಕುಗಳ ರಕ್ಷಣೆ, ಸಮಸ್ಯೆಗಳ ಪರಿಹಾರ ಹಾಗೂ ಕಾರ್ಮಿಕರಲ್ಲಿ ಸಂಘಟನಾ ಮನೋಭಾವ ಬೆಳೆಸುವ ಉದ್ದೇಶದಿಂದ ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ನಿರಂತರವಾಗಿ ಹೋರಾಟ ನಡೆಸುತ್ತಿದೆ. ಪ್ರಸ್ತುತ ಕಾರ್ಮಿಕರ ಹಕ್ಕುಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ ಎಂದು ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ಷಣ್ಮುಖಸ್ವಾಮಿ ಹೇಳಿದರು.

ಹಾವೇರಿ: ದುಡಿಯುವ ವರ್ಗದ ಜನರ ಹಕ್ಕುಗಳ ರಕ್ಷಣೆ, ಸಮಸ್ಯೆಗಳ ಪರಿಹಾರ ಹಾಗೂ ಕಾರ್ಮಿಕರಲ್ಲಿ ಸಂಘಟನಾ ಮನೋಭಾವ ಬೆಳೆಸುವ ಉದ್ದೇಶದಿಂದ ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ನಿರಂತರವಾಗಿ ಹೋರಾಟ ನಡೆಸುತ್ತಿದೆ. ಪ್ರಸ್ತುತ ಕಾರ್ಮಿಕರ ಹಕ್ಕುಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ ಎಂದು ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ಷಣ್ಮುಖಸ್ವಾಮಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.22ರಿಂದ 26ರ ವರೆಗೆ ಬೆಂಗಳೂರಿನಲ್ಲಿ ಎಐಟಿಯುಸಿಯ 43ನೇ ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ. ದೇಶದ ವಿವಿಧ ರಾಜ್ಯಗಳಿಂದ 1,200ಕ್ಕೂ ಹೆಚ್ಚು ಪ್ರತಿನಿಧಿಗಳು ಹಾಗೂ ವಿಶ್ವದ 15 ದೇಶಗಳ ಕಾರ್ಮಿಕ ಸಂಘಟನೆಗಳ ನಾಯಕರು ಪಾಲ್ಗೊಳ್ಳಲಿದ್ದಾರೆ. ಈ ಬೃಹತ್ ಸಮಾವೇಶಕ್ಕೆ 50 ಸಾವಿರಕ್ಕೂ ಅಧಿಕ ಎಲ್ಲಾ ವರ್ಗದ ಕಾರ್ಮಿಕರು ಭಾಗವಹಿಸುವ ನಿರೀಕ್ಷೆ ಇದೆ. ದುಡಿಯುವ ವರ್ಗದ ಜನರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಅವರ ಹಕ್ಕು, ಕರ್ತವ್ಯ ಹಾಗೂ ಸಮಸ್ಯೆಗಳ ಕುರಿತು ಚರ್ಚಿಸುವುದು ಸಮ್ಮೇಳನದ ಪ್ರಮುಖ ಉದ್ದೇಶವಾಗಿದೆ. ಜಿಲ್ಲೆಯ ದುಡಿಯುವ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಬಿಸಿಯೂಟ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಚಲೋ ಹೋರಾಟ ಹಮ್ಮಿಕೊಂಡಿದ್ದಾರೆ. ಈ ಹೋರಾಟದಲ್ಲಿಯೂ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬೆಂಬಲಿಸಬೇಕು ಎಂದು ಕರೆ ನೀಡಿದರು.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಶನ್ ಜಿಲ್ಲಾಧ್ಯಕ್ಷೆ ಸುನಂದಾ ರೇವಣಕರ ಮಾತನಾಡಿ, ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಸಮ್ಮೇಳನದಲ್ಲಿ ಆಶಾ, ಅಂಗನವಾಡಿ, ಬಿಸಿಯೂಟ ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರು ಭಾಗವಹಿಸಲಿದ್ದಾರೆ. ದುಡಿಯುವ ವರ್ಗದ ಎಲ್ಲ ವಿಭಾಗಗಳ ಪ್ರತಿನಿಧಿಗಳು ಪಾಲ್ಗೊಂಡು ತಮ್ಮ ಸಮಸ್ಯೆ ಹಾಗೂ ಬೇಡಿಕೆಗಳನ್ನು ಚರ್ಚಿಸಬೇಕು. ಮುಂದಿನ ದಿನಗಳಲ್ಲಿ ಬೆಳಗಾವಿಯಲ್ಲಿ ನಡೆಯುವ ಚಲೋ ಹೋರಾಟಕ್ಕೂ ಎಲ್ಲರೂ ಕೈಜೋಡಿಸಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಎಐಟಿಯುಸಿ ಜಿಲ್ಲಾಧ್ಯಕ್ಷ ಹನುಮಂತಪ್ಪ ಅಗಸಿಬಾಗಿಲ, ನಾಗಮ್ಮ ಮುದಕಮ್ಮವರ, ನಾಗರತ್ನ ಎಲಿಗಾರ, ಹನುಮಂತಪ್ಪ ಕಬ್ಬಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.