ಆಕಾಶ ಕೊಲೆ ಪ್ರಕರಣದ ಸೂಕ್ತ ತನಿಖೆಯಾಗಲಿ: ಮಹೇಶ ಟೆಂಗಿನಕಾಯಿ

| Published : Jun 24 2024, 01:39 AM IST

ಸಾರಾಂಶ

ಆಕಾಶ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಕೊಡಿಸುವ ಕ್ರಮವಾಗಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಉತ್ತರ ಕರ್ನಾಟಕ ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಅವರ ಪುತ್ರ ಆಕಾಶ​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಕೊಡಿಸುವ ಕ್ರಮವಾಗಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಭಾನುವಾರ ನಗರದ ಕಿಮ್ಸ್​​ ಶವಾಗಾರಕ್ಕೆ ಭೇಟಿ ನೀಡಿ ಮೃತ ಆಕಾಶ ತಂದೆ ಶೇಖರಯ್ಯ ಅವರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಕೊಲೆ ಪ್ರಕರಣದ ಬಗ್ಗೆ ಸ್ಪಷ್ಟತೆ ಇಲ್ಲ. ಈಗಾಗಲೇ ಮೃತನ ತಂದೆ ಶೇಖರಯ್ಯ ಅವರು ನನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಈಗಾಗಲೇ ಪೊಲೀಸರೊಂದಿಗೆ ಮಾತನಾಡಿದ್ದೇನೆ. ಪ್ರಕರಣದ ಬಗ್ಗೆ ಕುಲಂಕಷವಾಗಿ ತನಿಖೆ ನಡೆಸಿ ಸೂಕ್ತ ಕ್ರಮಗಳನ್ನು ಜರುಗಿಸಬೇಕಿದೆ. ಇನ್ನು ಮರಣೋತ್ತರ ಪರೀಕ್ಷೆಯಲ್ಲಿ ಕೇವಲ ಹಣೆಗೆ ಮಾತ್ರವೇ ಹೊಡೆತ ಬಿದ್ದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ನಿಜಾಂಶ ಹೊರಬರಲಿದೆ. ಈ ಬಗ್ಗೆ ಪೊಲೀಸ್ ಇಲಾಖೆಯು ಸೂಕ್ತ ತನಿಖೆ ನಡೆಸಿ ಕಾನೂನು ರೀತಿಯಲ್ಲಿ ಕ್ರಮಗಳನ್ನು ಜರುಗಿಸಬೇಕಿದೆ.

ಕೊಲೆ ಆಗಿದ್ದರೆ ಪೊಲೀಸ್ ಇಲಾಖೆ ಸಂಪೂರ್ಣ ತನಿಖೆ ಮಾಡಬೇಕು. ಇದರಲ್ಲಿ ಯಾರು ಭಾಗಿಯಾಗಿದ್ದಾರೆ ಅವರೆಲ್ಲರನ್ನೂ ಬಂಧಿಸಬೇಕು. ಈ ರೀತಿಯ ಘಟನೆಗಳು ನಡೆಯಬಾರದು. ಹುಬ್ಬಳ್ಳಿ-ಧಾರವಾಡದಲ್ಲಿ ಇಂತಹ ಘಟನೆಗಳು ಮೇಲಿಂದ ಮೇಲೆ ಮರುಕಳಿಸುತ್ತಿವೆ. ಕಾನೂನು ಸುವ್ಯವಸ್ಥೆಯನ್ನು ತಹಬದಿಗೆ ತರುವ ಕಾರ್ಯವನ್ನ ಪೊಲೀಸರು ಮಾಡಬೇಕು ಎಂದರು.