ಸಾರಾಂಶ
ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ ಸಹಕಾರಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣ ಪ್ರಕಾಶ್ ಆರ್.ಪಾಟೀಲ್ ಹೇಳಿದರು.
ದೊಡ್ಡಬಳ್ಳಾಪುರ: ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ ಸಹಕಾರಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣ ಪ್ರಕಾಶ್ ಆರ್.ಪಾಟೀಲ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೇವನಹಳ್ಳಿ ತಾಲೂಕು ಪಂಚಾಯಿತಿ ಆವರಣದಲ್ಲಿ ನಿರ್ಮಿತಗೊಂಡಿರುವ ಅಕ್ಕ- ಬೇಕರಿ ಮತ್ತು ಕೆಫೆ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಉಪಕ್ರಮದ ಅಡಿಯಲ್ಲಿ ʼಅಕ್ಕ ಕೆಫೆʼಯನ್ನು ಆರಂಭಿಸಲಾಗಿದೆ. ಮಹಿಳಾ ಸಬಲೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(NRLM), ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಮೊದಲ ಅಕ್ಕ ಕೆಫೆಯನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಲಾಗಿದ್ದು, ದೇವನಹಳ್ಳಿಯಲ್ಲಿ 2ನೇ ಅಕ್ಕ ಕೆಫೆ- ಬೇಕರಿ ಪ್ರಾರಂಭಿಸಲಾಗಿದೆ ಎಂದರು.
ಮಹಿಳೆಯರ ಸಬಲೀಕರಣ:
ರಾಜ್ಯಾದ್ಯಂತ 50 ಅಕ್ಕ ಕೆಫೆ ತೆರೆಯಲು ಉದ್ದೇಶಿಸಲಾಗಿದೆ. ಮಹಿಳೆಯರ ಸಬಲೀಕರಣ ಆಶಯದೊಂದಿಗೆ ರಾಜ್ಯದಲ್ಲಿ 2500 ಕಾಫಿ ಕೆಫೆ ಸ್ಥಾಪನೆ ಮಾಡುವ ಉದ್ದೇಶವಿದೆ. 3500 ಮಹಿಳೆಯರು ತರಬೇತಿ ಪಡೆದುಕೊಂಡು ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಗೆ ತಂದಿದ್ದೇವೆ ಎಂದರು.
ಸ್ವಸಹಾಯ ಸಂಘಗಳಿಂದ ನಿರ್ವಹಣೆ:
ಸ್ವಸಹಾಯ ಗುಂಪಿಗೆ ಸೇರಿದ 12 ಮಹಿಳೆಯರ ತಂಡವು ಈ ಕೆಫೆಯನ್ನು ನಡೆಸುತ್ತದೆ. ಅಕ್ಕ ಕೆಫೆ ಬೆಳಗ್ಗೆ 09 ರಿಂದ ರಾತ್ರಿ 09 ರ ವರೆಗೆ ವಾರವಿಡಿ ಕಾರ್ಯನಿರ್ಹಿಸಲಿದೆ. ಮತ್ತು ಇಲ್ಲಿ ಆರೋಗ್ಯಕರ, ಸ್ವಾದಿಷ್ಟಕರವಾದ ಆಹಾರ ಲಭ್ಯವಿದ್ದು, ಶುಚಿ-ರುಚಿಯ ಜೊತೆಗೆ ಕೈಗೆಟುಕುವ ದರದಲ್ಲಿ ಗ್ರಾಹಕರಿಗೆ ಆಹಾರವನ್ನು ಪೂರೈಸಲಾಗುತ್ತದೆ. ಸರ್ಕಾರ ಬಜೆಟ್ನಲ್ಲಿ ಘೋಷಣೆ ಮಾಡಿದಂತೆ ಅಕ್ಕ ಕೆಫೆಯು ಕಾರ್ಯರೂಪಕ್ಕೆ ಬಂದಿದೆ ಎಂದು ವಿವರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರನ್ನು ಬಲಗೊಳಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮಹಿಳೆಯರು ಸದುಪಯೋಗ ಪಡಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕು. ಅಕ್ಕ ಕೆಫೆಯು ಒಂದು ಉತ್ತಮ ವೇದಿಕೆಯಾಗಿದ್ದು ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಲಿದೆ ಎಂದರು.
ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪನೆಗೆ ಮನವಿ:
ಜಿಲ್ಲೆಯಲ್ಲಿ ನಿರುದ್ಯೋಗಿಗಳಿಗೆ ಕೌಶಲ್ಯ ಆಧಾರಿತ ತರಬೇತಿ ಅವಶ್ಯಕತೆ ಇದ್ದು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಸಚಿವರಾದ ಮುನಿಯಪ್ಪ ಅವರು ಮನವಿ ಮಾಡಿದರು. ಇದಕ್ಕೆ ಸಚಿವರಾದ ಶರಣ ಪ್ರಕಾಶ್ ಪಾಟೀಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಐಟಿಐ, ಜಿಟಿಟಿಸಿ ಕೇಂದ್ರಗಳನ್ನು ಮೇಲ್ದರ್ಜೆ ಏರಿಸಿ, ಮುಂದಿನ ದಿನಗಳಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ಅಧ್ಯಕ್ಷ ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ಜಗನ್ನಾಥ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕರಾದ ಪಿ.ಶ್ರೀವಿದ್ಯಾ, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಜಿಪಂ ಸಿಇಒ ಅನುರಾಧ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಅಧಿಕಾರಿಗಳು ಸ್ವಸಹಾಯ ಗುಂಪುಗಳ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.