ಕನ್ನಡಪ್ರಭ ವಾರ್ತೆ ವಿಜಯಪುರ
ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಮಹಿಳಾ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಕ್ಕೆ ಮಾದರಿಯಾಗಿದ್ದು, ಮಹಿಳೆಯರ ಉನ್ನತ ಶಿಕ್ಷಣ ಮತ್ತು ಸಬಲೀಕರಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಞಾನಶಕ್ತಿ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ದಶಮಾನೋತ್ಸವ ಕಟ್ಟಡ ಉದ್ಘಾಟನೆ ಹಾಗೂ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಮಹಿಳಾ ಉನ್ನತ ಶಿಕ್ಷಣದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿದೆ. ವಿಶ್ವವಿದ್ಯಾಲಯದ ಶೈಕ್ಷಣಿಕ ವಾತಾವರಣ, ವಿದ್ಯಾರ್ಥಿನಿಯರ ಶಿಸ್ತು ಹಾಗೂ ಶೈಕ್ಷಣಿಕ ಸಾಧನೆ ಶ್ಲಾಘನೀಯವಾಗಿದೆ. ರಾಜ್ಯದ ವಿವಿಧ ಭಾಗಗಳ ವಿದ್ಯಾರ್ಥಿನಿಯರು ಇಲ್ಲಿ ಶಿಕ್ಷಣ ಪಡೆಯುವಂತಹ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಇನ್ನಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ವಸತಿ ಸೌಲಭ್ಯಗಳು ಹಾಗೂ ಶೈಕ್ಷಣಿಕ ಮೂಲ ಸೌಕರ್ಯಗಳನ್ನು ವಿಸ್ತರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಸಂಸ್ಥಾಪನಾ ಭಾಷಣ ಮಾಡಿದ ವಿಶ್ರಾಂತ ಕುಲಪತಿ ಪ್ರೊ.ಎಸ್.ವಿ.ಹಲಸೆ, ಗುಣಮಟ್ಟದ ಶಿಕ್ಷಣದ ಜತೆಗೆ ಕೌಶಲ್ಯಾಧಾರಿತ ಹಾಗೂ ಉದ್ಯೋಗಮುಖಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ಮಹಿಳಾ ಶಿಕ್ಷಣವು ಸಮಾಜದ ಅಭಿವೃದ್ಧಿಗೆ ಭದ್ರ ಅಡಿಪಾಯವಾಗಿದೆ. ವಿದ್ಯಾರ್ಥಿನಿಯರು ಪದವಿಗೆ ಸೀಮಿತರಾಗದೆ ಸಂಶೋಧನೆ, ವಿಜ್ಞಾನ, ತಂತ್ರಜ್ಞಾನ ಹಾಗೂ ಆಡಳಿತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಗುರಿ ಹೊಂದಬೇಕು. ಉನ್ನತ ಶಿಕ್ಷಣವು ಮಹಿಳೆಯರಲ್ಲಿ ಆತ್ಮವಿಶ್ವಾಸ, ಸ್ವಾವಲಂಬನೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುತ್ತದೆ. ವಿಶ್ವವಿದ್ಯಾಲಯಗಳಲ್ಲಿ ಗುಣಮಟ್ಟದ ಶಿಕ್ಷಣ, ಆಧುನಿಕ ಸೌಲಭ್ಯಗಳು, ಸಂಶೋಧನೆಗೆ ಉತ್ತೇಜನ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಾಗ ಮಾತ್ರ ಮಹಿಳಾ ಸಬಲೀಕರಣದ ಉದ್ದೇಶ ಸಾಕಾರವಾಗುತ್ತದೆ ಎಂದು ಅಭಿಪ್ರಾಯಪಟ್ಟರು.ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಮುಂದಿನ ದಿನಗಳಲ್ಲಿ ಮಹಿಳಾ ವಿಶ್ವವಿದ್ಯಾಲಯವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮತ್ತು ವಿವಿಧ ಸಂಘ ಸಂಸ್ಥೆಗಳಿಗೆ ಹಾಗೂ ಕಾರ್ಪೋರೇಟ್ ಸಂಸ್ಥೆಗಳಿಗೆ ಕಳೆದ ಒಂದು ವರ್ಷದ ಅವಧಿಯಲ್ಲಿ ಸುಮಾರು ₹ 250 ಕೋಟಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾಗಿ ತಿಳಿಸಿದರು.ಕುಲಸಚಿವ ಶಂಕರಗೌಡ ಸೋಮನಾಳ ಸ್ವಾಗತಿಸಿ, ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ, ಹಿರಿಯ ಪ್ರಾಧ್ಯಾಪಕ ಪ್ರೊ.ಮಹೇಶ ಚಿಂತಾಮಣಿ, ಪ್ರೊ.ರಾಜಕುಮಾರ ಮಾಲಿಪಾಟೀಲ ಹಾಗೂ ಪ್ರೊ.ಸಕ್ಪಾಲ್ ಹೂವಣ್ಣ ಅತಿಥಿಗಳನ್ನು ಪರಿಚಯಿಸಿದರು. ಪ್ರೊ.ಹನುಮಂತಯ್ಯ ಪೂಜಾರಿ ನಿರೂಪಿಸಿದರು. ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ ವಂದಿಸಿದರು. ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಸಿಂಡಿಕೇಟ್ ಸದಸ್ಯೆ ಮಲ್ಲಮ್ಮ ಯಾಳವಾರ, ಹಣಕಾಸು ಅಧಿಕಾರಿ ರಾಮಣ್ಣ ಅಥಣಿ, ವಿವಿಧ ನಿಕಾಯಗಳ ಡೀನ್‌ಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು