ಕನ್ನಡಪ್ರಭ ವಾರ್ತೆ ಮಡಿಕೇರಿ

ಕೇಂದ್ರ ಪುರಸ್ಕೃತ ಜಲಜೀವನ್ ಮಿಷನ್ 2.0 ಯೋಜನೆಯನ್ನು 2028 ನೇ ಸಾಲಿನ ವರೆಗೂ ವಿಸ್ತರಿಸುವ ಹಿನ್ನೆಲೆ ಯೋಜನೆಯ ಪ್ರಗತಿ ಮತ್ತು ಪರಿಣಾಮಕಾರಿ ಅನುಷ್ಠಾನ ಕುರಿತು ಸಂಸದರಾದ ಯದುವೀರ್ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಜೊತೆಗೆ ಜಲ ಮಹೋತ್ಸವ ಸೇರಿದಂತೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲು ಸರ್ಕಾರದಿಂದ ಅನುಮತಿ ದೊರೆತಿದ್ದು, ಆ ನಿಟ್ಟಿನಲ್ಲಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಂಸದರು ಸೂಚಿಸಿದರು. ಕೇಂದ್ರ ಪುರಸ್ಕೃತ ಜಲ ಜೀವನ್ ಮಿಷನ್ 2.0 ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ಲೋಪ ಉಂಟಾಗದಂತೆ ಎಚ್ಚರ ವಹಿಸುವಂತೆ ಸಂಸದರು ನಿರ್ದೇಶನ ನೀಡಿದರು. ಕೇಂದ್ರ ಸರ್ಕಾರ, ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂಬ ಉದ್ದೇಶದದಿಂದ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರದಿಂದ ಕಾರ್ಯ ನಿರ್ವಹಿಸಬೇಕು ಎಂದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಜಲಜೀವನ್ ಮಿಷನ್ ಪ್ರಗತಿ ಮತ್ತು ಅನುಷ್ಠಾನ ಸಂಬಂಧ ಹಲವು ಸಲಹೆ ಮಾರ್ಗದರ್ಶನ ನೀಡಿದರು. ಜಿ.ಪಂಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಂಬಂಧ ಕಾಲ ಕಾಲಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುತ್ತದೆ. ಹಾಗೆಯೇ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್ ಅವರು ಜಲ ಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲೆಯ 23 ಗ್ರಾಮ ಪಂಚಾಯಿತಿಗಳಲ್ಲಿ ಹಮ್ಮಿಕೊಳ್ಳಲು ಅನುಮತಿ ದೊರೆತಿದೆ ಎಂದು ಅವರು ಮಾಹಿತಿ ನೀಡಿದರು. ಜೆಜೆಎಂ ಯೋಜನೆಯಡಿ ಕೈಗೊಂಡಿರುವ ಎಸ್‌ವಿಎಸ್ ಕಾಮಗಾರಿಯನ್ನು ಘಟಕವಾರು ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ 457 ಕಾಮಗಾರಿಗಳಲ್ಲಿ 369 ಕಾಮಗಾರಿ ಪೂರ್ಣಗೊಂಡಿದ್ದು, 86 ಕಾಮಗಾರಿ ಪ್ರಗತಿಯಲ್ಲಿದೆ ಎಂದು ಭಾಸ್ಕರ್ ಅವರು ಹೇಳಿದರು. ಕೊಡಗು ಜಿಲ್ಲೆಯಲ್ಲಿ ಎಂವಿಎಸ್ ಯೋಜನೆಯಡಿ 8.52 ಕೋಟಿ ರೂ. ವೆಚ್ಚದಲ್ಲಿ ಬಹು ಗ್ರಾಮ ಕುಡಿಯುವ ನೀರು ಪೂರೈಕೆಗೆ ಕುಶಾಲನಗರ ತಾಲೂಕಿನ 12 ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ ಎಂದರು. 533 ಜನ ವಸತಿ ಪ್ರದೇಶದಲ್ಲಿ 12 ಕಾಮಗಾರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಹೊಸದಾಗಿ ಅನುಷ್ಠಾನ ಮಾಡಲು ಉದ್ದೇಶಿಸಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ ಸಂಬಂಧಿಸಿದಂತೆ ಮಡಿಕೇರಿ ಉಪ ವಿಭಾಗ, ಸೋಮವಾರಪೇಟೆ, ಕುಶಾಲನಗರ, ಸೋಮವಾರಪೇಟೆ ಉಪ ವಿಭಾಗ, ಪೊನ್ನಂಪೇಟೆ ಮತ್ತು ವಿರಾಜಪೇಟೆ, ತಾಲ್ಲೂಕುಗಳನ್ನು ಗುರುತಿಸಲಾಗಿದ್ದು, 533 ಜನ ವಸತಿ ಪ್ರದೇಶದಲ್ಲಿ 12 ಕಾಮಗಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಭಾಸ್ಕರ್ ಅವರು ವಿವರಿಸಿದರು.

2025-26ನೇ ಸಾಲಿನ ಕ್ರೀಯಾ ಯೋಜನೆ ಕಾಮಗಾರಿಗಳ ಆರ್ಥಿಕ ಮತ್ತು ಬೌದ್ಧಿಕ ಪ್ರಗತಿ ಪರಿಶೀಲಿಸಿದಾಗ ಮಡಿಕೇರಿ ತಾಲ್ಲೂಕಿನಲ್ಲಿ 24 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, 35 ಲಕ್ಷ ರೂ. ವೆಚ್ಚ ಅಂದಾಜು ಮಾಡಲಾಗಿದೆ ಎಂದರು. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಘಟಕ ಸಂಬಂಧಿಸಿದಂತೆ 36 ಶುದ್ದೀಕರಣ ಘಟಕಗಳನ್ನು ಅಳವಡಿಸಲಾಗಿದ್ದು, ಇದರಲ್ಲಿ 27 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, 9 ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದರು. ಪಿವಿಟಿಜಿ, ಪಿ.ಎಂ.ಜನಮನ್ ಯೋಜನೆಯಡಿ ಜಿಲ್ಲೆಯಲ್ಲಿ 8 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಇದರಲ್ಲಿ ಒಂದು ಕಾಮಗಾರಿ ಪೂರ್ಣಗೊಂಡಿದೆ. 6 ಕಾಮಗಾರಿ ಪ್ರಗತಿಯಲ್ಲಿದ್ದು, ಒಂದು ಕಾಮಗಾರಿ ಪ್ರಾರಂಭವಾಗಿಲ್ಲ ಎಂದು ವಿವರಿಸಿದರು.ತಟ್ಟೆಕೆರೆಯಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು, ಗ್ರಾ.ಪಂ.ಗೆ ಹಸ್ತಾಂತರಿಸಲಾಗಿದೆ. 6 ಕಾಮಗಾರಿಗಳ ಕೊಳವೆ ಮಾರ್ಗ ಮತ್ತು ನಳ ಸಂಪರ್ಕ ಪೂರ್ಣಗೊಂಡಿದೆ. ಹಾಗೆಯೇ ಒಎಚ್‌ಟಿ ಕಾಮಗಾರಿಯು ಪ್ರಗತಿಯಲ್ಲಿದೆ. ಒಟ್ಟು 374 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ತ್ಯಾಜ್ಯ ವಿಲೇವಾರಿಗೆ ಮುಂದಾಗಲಾಗಿದೆ ಎಂದರು. ಜವಾಹರ್ ನವೋದಯ ವಿದ್ಯಾಲಯಕ್ಕೆ ಕುಡಿಯುವ ನೀರು ಪೂರೈಕೆ ಸಂಬಂಧ ಇದೇ ಸಂದರ್ಭದಲ್ಲಿ ಚರ್ಚಿಸಲಾಯಿತು. ಜನವರಿ, ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ನವೋದಯ ಶಾಲೆಗೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಆದ್ದರಿಂದ ಕೂಟುಹೊಳೆಯಿಂದ ಪೂರೈಕೆಯಾಗುವ ನೀರನ್ನು ನವೋದಯ ಶಾಲೆಗೂ ಪೂರೈಸುವಂತಾಗಬೇಕು ಎಂದು ಕೋರಲಾಗಿತ್ತು. ಆದರೆ ಬೇಸಿಗೆ ಅವಧಿಯಲ್ಲಿ ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಪರಿಹಾರ ಮಾರ್ಗ ಕಂಡು ಕೊಳ್ಳುವ ಸಂಬಂಧ ಚರ್ಚೆ ನಡೆಯಿತು. ಕುಡಿಯುವ ನೀರು ಪೂರೈಕೆಗಾಗಿ ನವೋದಯ ವಿದ್ಯಾ ಸಂಸ್ಥೆಯಿಂದ 78 ಲಕ್ಷ ರೂ. ಬಿಡುಗಡೆಯಾಗಿದ್ದು, ಟೆಂಡರ್‌ನ್ನು ಸಹ ಆಹ್ವಾನಿಸಲಾಗಿತ್ತು ಎಂದು ಕುಡಿಯುವ ನೀರು ಮತ್ತು ನೈರ್ಮಲ ವಿಭಾಗದ ಎಂಜಿನಿಯರ್ ಭಾಸ್ಕರ್ ಅವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ಬೇಸಿಗೆ ಅವಧಿಯಲ್ಲಿ ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ ಈ ಸಂಬಂಧ ಮತ್ತೊಮ್ಮೆ ಸ್ಥಳ ಪರಿಶೀಲಿಸಿ ಕ್ರಮವಹಿಸಲಾಗುವುದು ಎಂದು ಹೇಳಿದರು. ನವೋದಯ ಶಾಲೆಯಲ್ಲಿ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದೊಡ್ಡ ಮನಸ್ಸು ಮಾಡಬೇಕಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಸಲಹೆ ಮಾಡಿದರು. ನವೋದಯ ಶಾಲೆಯ ಪ್ರಾಂಶುಪಾಲರಾದ ಪ್ರಮೀಳಾ ಅವರು ಮಾತನಾಡಿ ಜನವರಿ, ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳಲಿದೆ. ಆದ್ದರಿಂದ ಈ ಬಗ್ಗೆ ಗಮನಹರಿಸುವಂತಾಗಬೇಕು ಎಂದು ಕೋರಿದರು.ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಕೂಟುಹೊಳೆಯಿಂದ ಮಡಿಕೇರಿ ನಗರಕ್ಕೆ ಪೂರೈಕೆಯಾಗುವ ನೀರನ್ನು ನವೋದಯ ಶಾಲೆಗೆ ನೀಡಲು ಕಷ್ಟವಾಗಲಿದೆ. ಆದ್ದರಿಂದ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸಲಹೆ ಮಾಡಿದರು. ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿರೇಂದ್ರ, ಎಂಜಿನಿಯರ್‌ಗಳು ಇತರರು ಇದ್ದರು.