ಗ್ರಾಮೀಣ ಪ್ರದೇಶದ ಬಡ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುವಲ್ಲಿ ನರೇಗಾ ಯೋಜನೆ ಪ್ರಮುಖ ಪಾತ್ರ ವಹಿಸಿತ್ತು.
ಕನ್ನಡಪ್ರಭ ವಾರ್ತೆ ನಂಜನಗೂಡುಗ್ರಾಮೀಣ ಬಡ ಕೂಲಿ ಕಾರ್ಮಿಕರಿಗೆ ಉದ್ಯೋಗದ ಭರವಸೆಯಾಗಿದ್ದ ನರೇಗಾ ಯೋಜನೆಯನ್ನು ರದ್ದುಗೊಳಿಸಿರುವುದನ್ನು ಖಂಡಿಸಿ, ಬದಲಿ ಯೋಜನೆಯಲ್ಲಿನ ಕಾರ್ಮಿಕ ವಿರೋಧಿ ಅಂಶಗಳನ್ನು ಕೈಬಿಡಬೇಕು ಹಾಗೂ ಕೂಲಿ ಕಾರ್ಮಿಕರಿಗೆ ಯಾವುದೇ ಷರತ್ತುಗಳಿಲ್ಲದೆ ಕೆಲಸ ನೀಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಕಾರ್ಯಕರ್ತರು ಮಂಗಳವಾರ ತಾಲೂಕು ಕಚೇರಿ ಎದುರು ಪ್ರತಿಭಟಿಸಿದರು.ಗ್ರಾಮೀಣ ಪ್ರದೇಶದ ಬಡ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುವಲ್ಲಿ ನರೇಗಾ ಯೋಜನೆ ಪ್ರಮುಖ ಪಾತ್ರ ವಹಿಸಿತ್ತು. ಕೃಷಿ ಚಟುವಟಿಕೆಗಳು ಕಡಿಮೆಯಾಗುವ ಅವಧಿಯಲ್ಲಿ ಕೂಲಿ ಕಾರ್ಮಿಕರಿಗೆ ಉದ್ಯೋಗ ದೊರೆಯಲು ಇದು ನೆರವಾಗುತ್ತಿತ್ತು. ಆದರೆ, ಯೋಜನೆಯ ಬದಲಾವಣೆಗಳಿಂದ ಗ್ರಾಮೀಣ ಜನರ ಜೀವನೋಪಾಯಕ್ಕೆ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ನರೇಗಾ ಯೋಜನೆಯ ಬದಲಿಗೆ ಜಿ-ರಾಮ್ ಯೋಜನೆ ಜಾರಿಗೊಳಿಸಿರುವುದರಿಂದ ಕಾರ್ಮಿಕರಿಗೆ ಅನಾನುಕೂಲವಾಗುವ ಅಂಶಗಳನ್ನು ಸೇರಿಸಲಾಗಿದೆ. ಉದ್ಯೋಗ ಪಡೆಯಲು ಮುಂದಾಗುವ ಬಡಜನರಿಗೆ ವಿವಿಧ ನಿಯಮಗಳ ನೆಪದಲ್ಲಿ ತೊಂದರೆ ನೀಡಲಾಗುತ್ತಿದೆ. ಹೀಗಾಗಿ ಯೋಜನೆಯನ್ನು ಜನಪರವಾಗಿ ರೂಪಿಸಿ, ಅರ್ಹ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಒತ್ತಾಯಿಸಿದರು.ಇ-ಕೆವೈಸಿ, ಆಧಾರ್ ಸಮಸ್ಯೆ ಪರಿಹರಿಸಿ
ಪಡಿತರ ಪಡೆಯಲು ಇ-ಕೆವೈಸಿ ಕಡ್ಡಾಯಗೊಳಿಸಿರುವುದರಿಂದ ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವ ಅನೇಕರು ಸೌಲಭ್ಯದಿಂದ ವಂಚಿತರಾಗುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗಳನ್ನು ಪರಿಹರಿಸಿ ಪ್ರಕ್ರಿಯೆಯನ್ನು ಸರಳಗೊಳಿಸಬೇಕು. ಗ್ರಾಮೀಣ ಜನರು ಆಧಾರ್ ಸೇವೆಗಳಿಗಾಗಿ ದೂರದ ಕೇಂದ್ರಗಳಿಗೆ ಅಲೆದಾಡುವುದನ್ನು ತಪ್ಪಿಸಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಧಾರ್ ಕೇಂದ್ರಗಳನ್ನು ಆರಂಭಿಸಿ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.ಮಹಿಳಾ ಸ್ವಸಹಾಯ ಸಂಘಗಳ ಸಾಲ ಮನ್ನಾಕ್ಕೆ ಆಗ್ರಹ
ತಾಲೂಕಿನಲ್ಲಿ ಬರಗಾಲದ ಪರಿಸ್ಥಿತಿಯಿಂದ ಕೃಷಿ ಹಾಗೂ ಕೂಲಿ ಕೆಲಸಗಳ ಆದಾಯ ಕುಂಠಿತಗೊಂಡಿದ್ದು, ಗ್ರಾಮೀಣ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮಹಿಳಾ ಸ್ವಸಹಾಯ ಸಂಘಗಳು ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಕಿರುಸಾಲ ಸಂಸ್ಥೆಗಳಿಂದ ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಸಾರಿಗೆ ವ್ಯವಸ್ಥೆ ಸುಧಾರಿಸಲು ಒತ್ತಾಯ- ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸುಗಮ ಸಾರಿಗೆ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಬಸ್ ಸಂಚಾರದ ಕೊರತೆಯನ್ನು ನಿವಾರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಹೊರಳವಾಡಿ ಮತ್ತು ಮುಳ್ಳೂರು ಗ್ರಾಮಗಳಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಲು ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಗದೀಶ್, ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಸಹ ಕಾರ್ಯದರ್ಶಿ ಸುಶೀಲ, ಜಿಲ್ಲಾ ಸಂಚಾಲಕಿ ಶಕುಂತಲಾ, ರೂಪಾ, ಶಿವಮ್ಮ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು.