ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಮ್ಮ ಕ್ಷೇತ್ರದಲ್ಲಿನ ಪ್ರತಿ ಮಗುವಿನ ಮಾಹಿತಿ ಹೊಂದಿದ್ದು, ಕೆಲವು ಸೂಕ್ಷ್ಮ ಪ್ರಕರಣಗಳ ಮೂಲ ಅರಿತು ಅದರ ಇತ್ಯರ್ಥಕ್ಕೆ ವಿಶೇಷ ಗಮನ ಹರಿಸಬೇಕು. ಅಗತ್ಯವಿದ್ದಲ್ಲಿ ಜಿಲ್ಲಾಡಳಿತದ ವತಿಯಿಂದ ನೈತಿಕ ಮತ್ತು ಕಾನೂನಾತ್ಮಕ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ತಮ್ಮ ಹಂತದಲ್ಲಿ ಇತ್ಯರ್ಥವಾಗದ ಸಮಸ್ಯೆಗಳನ್ನು ಕೂಡಲೇ ತಮ್ಮ ಮೇಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಕ್ರಮ ವಹಿಸಲಾಗುತ್ತಿದೆ. ಕೆಲವು ಗ್ರಾಮಗಳಲ್ಲಿನ ಶಾಲಾ ಆವರಣದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದ್ದು, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಕೂಡಲೇ ನಿರಾಕ್ಷೇಪಣಾ ಪತ್ರ ನೀಡಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಸೂಚಿಸಿದರು.ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಸ್ಥಳೀಯವಾಗಿರುವ ಗರ್ಭಿಣಿ, ಬಾಣಂತಿ ಮತ್ತು ಹಸುಕಂದಮ್ಮಗಳ ಅಧಿಕೃತ ಮಾಹಿತಿ, ಶಾಲೆಯಿಂದ ಹೊರಗುಳಿದ ಹಾಗೂ ನಿತ್ಯ ಶಾಲೆಗೆ ಹೋಗುತ್ತಿರುವ ಮಕ್ಕಳ ದಾಖಲೆಗಳನ್ನು ನಿರ್ವಹಿಸುವಂತೆ ಸೂಚಿಸಿದ ಅವರು, ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕ್ಷೇತ್ರವ್ಯಾಪ್ತಿಯಲ್ಲಿನ ಸಾಂತ್ವನ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ ಪ್ರಗತಿ ಪರಿಶೀಲಿಸಬೇಕು. ಇದೇ ವೇಳೆ ಅಲ್ಲಿನ ಅಪೌಷ್ಟಿಕ ಮಕ್ಕಳ ಬಗ್ಗೆಯೂ ಮಾಹಿತಿ ಪಡೆದು, ಚಿಕಿತ್ಸೆಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ರಕ್ಷಣಾ ಕಾಯ್ದೆಯಡಿ ದಾಖಲಾದ ಪ್ರಕರಣಗಳಿಗೆ ಮೊಕದ್ದಮೆ ದಾಖಲಿಸಲು ಗಮನಹರಿಸಬೇಕು. ಅಪ್ರಾಪ್ತರ ವಿವಾಹ ನಿಯಂತ್ರಣಕ್ಕೆ ಗಮನಹರಿಸಬೇಕಲ್ಲದೇ ಅವರನ್ನು ಶಿಕ್ಷಣದ ಮುಖ್ಯವಾಹಿನಿಗೆ ಕರೆತರುವಂತೆ ಸೂಚಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎನ್.ಹೇಮಂತ್ ಮಾತನಾಡಿ, ಮಕ್ಕಳ ರಕ್ಷಣಾ ಕಾವಲು ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿರುವ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಮ್ಮ ಜವಾಬ್ದಾರಿಯರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ತಮ್ಮ ಕಾರ್ಯಕ್ಷೇತ್ರದಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಮಕ್ಕಳ ಸಮಗ್ರ ವಿವರಗಳನ್ನು ಹೊಂದಿರಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಎಂ.ಎಸ್.ಸಂತೋಷ್ , ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಟರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಭಜಂತ್ರಿ, ಮಕ್ಕಳ ರಕ್ಷಣಾ ಸಮಿತಿಯ ಅಧ್ಯಕ್ಷ ತಾಜುದ್ದೀನ್‌ಖಾನ್, ಜಿಲ್ಲೆಯ ಎಲ್ಲಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಧಿಕಾರಿ-ಸಿಬ್ಬಂದಿ ಹಾಜರಿದ್ದರು.ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದ 400ಕ್ಕೂ ಹೆಚ್ಚಿನ ಪ್ರಕರಣಗಳು ದಾಖಲಾಗಿರುವುದು. ಮಾತೃವಂದನಾ ಯೋಜನೆಯ ಅನುಷ್ಠಾನದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ.
ಎನ್.ಹೇಮಂತ್, ಜಿಪಂ ಸಿಇಒ.