ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಸಕಲ ಸಿದ್ಧತೆ: ಡಿಸಿ ನಿತೇಶ್‌ ಪಾಟೀಲ

| Published : Mar 17 2024, 02:05 AM IST

ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಸಕಲ ಸಿದ್ಧತೆ: ಡಿಸಿ ನಿತೇಶ್‌ ಪಾಟೀಲ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳಗಾವಿ: ಲೋಕಸಭಾ ಸಾರ್ವತ್ರಿಕ ಚುನಾವಣೆಗಳಿಗೆ ಭಾರತ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಜಿಲ್ಲೆಯಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಲೋಕಸಭಾ ಸಾರ್ವತ್ರಿಕ ಚುನಾವಣೆಗಳಿಗೆ ಭಾರತ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಜಿಲ್ಲೆಯಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಾ.16 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಏ.12ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ಏ.19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏ.20ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.22 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನ. ಮೇ 7ರಂದು ಮತದಾನ ನಡೆಯಲಿದ್ದು, ಜೂ.4ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 40,62,210 ಮತದಾರರಿದ್ದು, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ 8,65,731 ಮಹಿಳಾ ಮತದಾರರು ಸೇರಿ ಒಟ್ಟು 17,41,758 ಮತದಾರರಿದ್ದಾರೆ. ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ 9,55,725 ಮಹಿಳಾ ಮತದಾರರು ಸೇರಿ ಒಟ್ಟು 19,04,099 ಮತದಾರರು, ಖಾನಾಪುರ ಹಾಗೂ ಕಿತ್ತೂರ ಮತಕ್ಷೇತ್ರದಲ್ಲಿ 2,04,848 ಮಹಿಳಾ ಮತದಾರರು ಸೇರಿ ಒಟ್ಟು 4,16,353 ಮತದಾರರಿದ್ದಾರೆ ಎಂದರು.

ಜಿಲ್ಲೆಯಲ್ಲಿ ಒಟ್ಟು 4524 ಮತಗಟ್ಟೆ ತೆರೆಯಲಾಗಿದ್ದು, ಚಿಕ್ಕೋಡಿ ಮತಕ್ಷೇತ್ರದಲ್ಲಿ ನಗರಪ್ರದೇಶದಲ್ಲಿ 419, ಗ್ರಾಮೀಣ ಪ್ರದೇಶಗಳಲ್ಲಿ 1477 ಮತಗಟ್ಟೆ ಸೇರಿ ಒಟ್ಟು 1896 ಮತಗಟ್ಟೆಗಳು, ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ನಗರ ಪ್ರದೇಶದಲ್ಲಿ 814, ಗ್ರಾಮೀಣ ಪ್ರದೇಶಗಳಲ್ಲಿ 1272 ಸೇರಿದಂತೆ ಒಟ್ಟು 2086 ಮತಗಟ್ಟೆಗಳು, ಖಾನಾಪುರ ಹಾಗೂ ಕಿತ್ತೂರು ಮತಕ್ಷೇತ್ರಗಳಲ್ಲಿ ಒಟ್ಟು 542 ಮತಗಟ್ಟೆ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಚುನಾವಣೆಯನ್ನು ಶಾಂತಿಯುತ, ಮುಕ್ತವಾಗಿ, ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತದಿಂದ ನಡೆಸಲು ಹಾಗೂ ಚುನಾವಣೆ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದ್ದು, ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಸಿಇಒ ರಾಹುಲ್‌ ಶಿಂಧೆ, ಐ.ಜಿ.ಪಿ. ವಿಕಾಶ ಕುಮಾರ್‌, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ಡಿ.ಸಿ.ಪಿ. ರೋಹನ್‌ ಜಗದೀಶ, ಪ್ರೊಬೆಷನರಿ ಐ.ಎ.ಎಸ್. ಅಧಿಕಾರಿ ಶುಭಂ ಶುಕ್ಲಾ ಉಪಸ್ಥಿತರಿದ್ದರು.

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿ ₹ 95 ಲಕ್ಷವರೆಗೆ ಚುನಾವಣೆಗೆ ಖರ್ಚು ಮಾಡಬಹುದಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭ್ಯರ್ಥಿಗಳು ಪ್ರಚಾರ, ಜಾಹೀರಾತು ಮೂಲಕ ಪ್ರಚಾರ ಮಾಡಲು ಚುನಾವಣಾಧಿಕಾರಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಚುನಾವಣಾ ಅಕ್ರಮ ತಡೆಗೆ ಚುನಾವಣಾ ಕಣ್ಗಾವಲು ಸಮಿತಿ ರಚಿಸಲಾಗಿದೆ. ಜಿಲ್ಲೆಯ ಗಡಿಭಾಗದಲ್ಲಿ ಚೆಕ್‌ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ.

-ನಿತೇಶ್ ಪಾಟೀಲ, ಜಿಲ್ಲಾ ಚುನಾವಣಾಧಿಕಾರಿ