ಸಾರಾಂಶ
ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆ.15ರಂದು ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆ.15ರಂದು ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ತಿಳಿಸಿದರು.ನಗರದ ಉಪವಿಭಾಗಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಪಾಲಿಕೆ ವತಿಯಿಂದ ಟೌನ್ ಹಾಲ್, ಚರ್ಚ್ ಸರ್ಕಲ್, ಭದ್ರಮ್ಮ ವೃತ್ತ, ಶಿವಕುಮಾರ ಸ್ವಾಮೀಜಿ ವೃತ್ತ ಸೇರಿ ನಗರ ಪ್ರಮುಖ ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಬೇಕೆಂದು ಪಾಲಿಕೆಗೆ ಜವಾಬ್ದಾರಿವಹಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುರೇಶ್ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಂದು ಸಂಜೆ 4.30 ಗಂಟೆಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಂದ 9 ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ 3 ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದರು.ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಮಾತನಾಡಿ, ತೋಟಗಾರಿಕೆ ಇಲಾಖೆಯಿಂದ ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ವೇದಿಕೆ ಮುಂಭಾಗ ಹೂವಿನ ಕುಂಡ ಹಾಗೂ ಅಲಂಕಾರಿಕ ಗಿಡಗಳ ವ್ಯವಸ್ಥೆ ಮಾಡಬೇಕು. ಪ್ರೌಢಶಾಲಾ ವಿದ್ಯಾರ್ಥಿಗಳಿಂದ ೫ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜಿಲ್ಲಾ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಕೆಎಂಎಫ್ ಅಧಿಕಾರಿಗಳಿಗೆ ತಿಳಿಸಿದರು.
ಕ್ರೀಡಾಂಗಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆ್ಯಂಬುಲೆನ್ಸ್, ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗ ಹಾಗೂ ಅಗ್ನಿಶಾಮಕ ವಾಹನಗಳ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದರು. ಸಭೆಯಲ್ಲಿ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.