ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ‘ನವೋದಯ ರಜತ ಸಂಭ್ರಮ’ ಸಮಾರಂಭವನ್ನು ಮೇ 10ರಂದು ಬೆಳಗ್ಗೆ 10.30 ಗಂಟೆಗೆ ನಗರದ ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಅದ್ಧೂರಿ ಹಾಗೂ ಚಾರಿತ್ರಿಕ ರೀತಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಂಸ್ಥಾಪಕ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೋದಯ ಸ್ವಸಹಾಯ ಗುಂಪುಗಳು ಗ್ರಾಮೀಣ ಜನರ ಬದುಕಿನಲ್ಲಿ ಆರ್ಥಿಕ ಸ್ವಾವಲಂಬನೆ ಮೂಡಿಸಿ ಪ್ರಜಾಪ್ರಭುತ್ವದ ತಳಹದಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸಂಘಟನೆ ಹಾಗೂ ಜನಜಾಗೃತಿ ಮೂಲಕ ಜನಸೇವೆಯಲ್ಲಿ ತೊಡಗಿಸಿಕೊಂಡಿವೆ. ‘ನಮ್ಮಿಂದ ನಮಗಾಗಿ, ನಮಗೋಸ್ಕರ ಸ್ವಸಹಾಯ ಸಂಘಗಳು’ ಎಂಬ ಧೋರಣೆ ಹೊಂದಿರುವ ನವೋದಯ ಸ್ವಸಹಾಯ ಗುಂಪುಗಳು ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯ ಜೊತೆಗೆ ಸಬಲೀಕರಣದ ಹಾದಿಯಲ್ಲಿ ದಾಪುಗಾಲು ಹಾಕುತ್ತಿವೆ. ಈ ಉದಾತ್ತ ಉದ್ದೇಶವನ್ನಿಟ್ಟುಕೊಂಡು ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
3 ಸಾವಿರ ಬಸ್ಸುಗಳಲ್ಲಿ ಜನಸಾಗರ:2000ನೇ ಜನವರಿ 29ರಂದು ಕಾರ್ಕಳದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹಾಗೂ ಆಗಿನ ಸಹಕಾರ ಸಚಿವ ಡಿ.ಕೆ. ಶಿವಕುಮಾರ್ ಅವರಿಂದ ಉದ್ಘಾಟಿಸಲ್ಪಟ್ಟ ನವೋದಯ ಸ್ವಸಹಾಯ ಗುಂಪುಗಳ ಕಾರ್ಯ ವಿಸ್ತಾರವು ಇಂದು ರಾಜ್ಯದ 8 ಜಿಲ್ಲೆಗಳಿಗೆ ಪಸರಿಸಿದ್ದು, 8ರಿಂದ 9 ಲಕ್ಷ ಸದಸ್ಯರಿದ್ದಾರೆ. ಮುಖ್ಯವಾಗಿ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಲ್ಪಿಸಿಕೊಟ್ಟಿದೆ. ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಬದುಕು ಕಟ್ಟಿಕೊಳ್ಳಲು ಕಾರಣವಾಗಿದೆ. ಆದ ಕಾರಣ ನವೋದಯದ ರಜತ ಸಂಭ್ರಮವನ್ನು ದೇಶಕ್ಕೆ ಮಾದರಿಯಾಗಿ ಹಮ್ಮಿಕೊಳ್ಳುವ ಯೋಜನೆ ರೂಪಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸುಮಾರು 3000 ಬಸ್‌ಗಳಲ್ಲಿ ಜನ ವಿವಿಧ ಕಡೆಗಳಿಂದ ಸಮಾವೇಶದ ಸ್ಥಳಕ್ಕೆ ಆಗಮಿಸಲಿದ್ದಾರೆ.
ಸಮವಸ್ತ್ರದಲ್ಲಿ 1.5 ಲಕ್ಷ ಮಹಿಳೆಯರು:ಈ ಚಾರಿತ್ರಿಕ ಸಮಾವೇಶದಲ್ಲಿ ಸುಮಾರು 1.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ನೀಲಿ ಬಣ್ಣದ ಸಮವಸ್ತ್ರದಲ್ಲಿ ಭಾಗವಹಿಸಲಿದ್ದು, ಈ ಸಮಾವೇಶ ದೇಶಕ್ಕೆ ಮಾದರಿಯಾಗುವ ಸಮಾವೇಶ ಆಗಲಿದೆ. ಈ ಅರ್ಥಪೂರ್ಣ ರಜತ ಸಂಭ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ನವೋದಯ ರಜತ ಸಂಭ್ರಮದ ನೆನಪಿಗಾಗಿ ವಿಶಿಷ್ಟ ರೀತಿಯ ಲಾಂಛನವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬಿಡುಗಡೆಗೊಳಿಸಲಿರುವರು. ನವೋದಯ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಸವಲತ್ತು ವಿತರಣೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೆರವೇರಿಸಲಿದ್ದು, ರಜತ ಸಂಭ್ರಮದ ‘ಸಂತೃಪ್ತಿ’ ಸ್ಮರಣ ಸಂಚಿಕೆಯ ಬಿಡುಗಡೆಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೆರವೇರಿಸಲಿದ್ದಾರೆ ಎಂದರು.
ರಜತ ಸಂಭ್ರಮ ಆಚರಣೆಯ ಸಂದರ್ಭ ಸಹಕಾರಿ ಧ್ವಜಾರೋಹಣವನ್ನು ಕರ್ನಾಟಕ ವಿಧಾನಸಭೆ ಅಧ್ಯಕ್ಷ ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ. ಖಾದರ್ ಫರೀದ್ ನೆರವೇರಿಸುತ್ತಾರೆ. ಅತ್ಯುತ್ತಮ ನವೋದಯ ಗುಂಪುಗಳಿಗೆ ಪ್ರಶಸ್ತಿ ಪ್ರದಾನವನ್ನು ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಲಾದ್ ವಿ. ಜೋಶಿ ನೆರವೇರಿಸುವರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ) ಸಂಸ್ಥಾಪಕ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ, ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಮಾಜಿ ಮುಖ್ಯಮಂತ್ರಿ ಡಾ.ಎಂ. ವೀರಪ್ಪ ಮೊಯ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಿ., ದೇವಿ ಪ್ರಸಾದ್ ಶೆಟ್ಟಿ ಬೆಳಪು, ಎಂ. ವಾದಿರಾಜ ಶೆಟ್ಟಿ, ಎಸ್. ಬಿ. ಜಯರಾಮ್ ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಕುಶಾಲಪ್ಪ ಗೌಡ, ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್, ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ., ನವೋದಯ ಟ್ರಸ್ಟಿಗಳಾದ ಮೇಘರಾಜ್ ಆರ್.ಜೈನ್, ಸುನಿಲ್ ಕುಮಾರ್ ಬಜಗೋಳಿ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಟ್ರಸ್ಟ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಇದ್ದರು.