ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ
ಕನ್ನಡಪ್ರಭ ವಾರ್ತೆ ಬೇಲೂರುವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ -2026 ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಎಡಿಸಿ ಜಗದೀಶ್ ತಿಳಿಸಿದರು.
ತಾಲೂಕು ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಲಿದ್ದು, ರಾಜಕೀಯ ಪಕ್ಷಗಳ ಸಭೆಗಳು, ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳು ಹಾಗೂ ಎನ್ಯುಮರೇಷನ್ ಫಾರಂಗಳ ಮುದ್ರಣ ಕಾರ್ಯಗಳು ನಡೆಯುತ್ತಿವೆ ಎಂದು ಹೇಳಿದರು.ಬೇಲೂರು ವಿಧಾನಸಭಾ ಕ್ಷೇತ್ರದ 270 ಮತಗಟ್ಟೆಗಳಿಗೆ ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್ಒ) ನೇಮಿಸಲಾಗಿದ್ದು, ಅವರ ಕಾರ್ಯದ ಮೇಲ್ವಿಚಾರಣೆಗೆ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಬಿಎಲ್ಒಗಳು ಹಾಗೂ ಮೇಲ್ವಿಚಾರಕರಿಗೆ ವಿಶೇಷ ತರಬೇತಿ ನೀಡಲಾಗುವುದು. ಜೂನ್ 30ರಿಂದ ಜುಲೈ 29ರವರೆಗೆ ಬಿಎಲ್ಒಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರಿಗೆ ಎನ್ಯುಮರೇಷನ್ ಫಾರಂಗಳನ್ನು ವಿತರಿಸಿ, ಭರ್ತಿ ಮಾಡಿದ ಅರ್ಜಿಗಳನ್ನು ಸಂಗ್ರಹಿಸಲಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದಿದ್ದರೆ ಮೂರು ಬಾರಿ ಭೇಟಿ ನೀಡಿ ಮಾಹಿತಿ ಪಡೆಯಲಾಗುವುದು. ಸಂಪರ್ಕ ಸಾಧ್ಯವಾಗದಿದ್ದಲ್ಲಿ ನೋಟಿಸ್ ಅಂಟಿಸಲಾಗುವುದು ಎಂದು ತಿಳಿಸಿದರು.
ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,04,653 ಮತದಾರರಿದ್ದು, ಅವರಲ್ಲಿ 1,01,671 ಪುರುಷರು ಹಾಗೂ 1,02,982 ಮಹಿಳೆಯರಿದ್ದಾರೆ. ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯವು ಶೇ.91.94ರಷ್ಟು ಪೂರ್ಣಗೊಂಡಿದೆ. ಸರ್ಕಾರಿ ಕಟ್ಟಡಗಳಿಲ್ಲದ ಪ್ರದೇಶಗಳಲ್ಲಿ ಶಾಲೆಗಳಲ್ಲಿ ಮತದಾರರ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಮತಗಟ್ಟೆಯಲ್ಲಿ 1,200ಕ್ಕೂ ಹೆಚ್ಚು ಮತದಾರರಿದ್ದಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಅರ್ಜಿಗಳ ವಿಚಾರಣೆಯನ್ನು ಅಕ್ಟೋಬರ್ 3ರೊಳಗೆ ಪೂರ್ಣಗೊಳಿಸಿ ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.
ತಹಸೀಲ್ದಾರ್ ಶ್ರೀಧರ್ ಕಂಕಣವಾಡಿ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ತಾಲೂಕು ಆಡಳಿತವು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮತದಾರರ ಅನುಕೂಲಕ್ಕಾಗಿ ಸರ್ಕಾರಿ ಕಟ್ಟಡಗಳು ಹಾಗೂ ಶಾಲೆಗಳಲ್ಲಿ ಮತದಾರರ ಸೌಲಭ್ಯ ಕೇಂದ್ರಗಳನ್ನು ತೆರೆಯಲಾಗುವುದು. ಬಿಎಲ್ಒಗಳಿಗೆ ತರಬೇತಿ ನೀಡಲಾಗುತ್ತಿದ್ದು, ಮನೆ-ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿ ಸಂಗ್ರಹಣೆ ಹಾಗೂ ನಮೂನೆಗಳ ವಿತರಣೆ ಕಾರ್ಯ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ತೆಗೆದುಹಾಕುವ ಅಗತ್ಯವಿರುವ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.ಸಭೆಯಲ್ಲಿ ಚುನಾವಣಾ ವಿಭಾಗದ ಅಧಿಕಾರಿಗಳು, ಬಿಎಲ್ಒಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.