ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಲಿ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.

| Published : Apr 23 2024, 12:50 AM IST

ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಲಿ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಅರ್ಹರು ಮತದಾನ ಮಾಡುವ ಜೊತೆಗೆ ಇತರರೂ ಮತದಾನ ಮಾಡಲು ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.

ಕನ್ನಡಪ್ರಭ ವಾರ್ತೆ ಗದಗ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ಸೋಮವಾರ ನಡೆಯಿತು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮೇ 7ರಂದು ನಡೆಯುವ ಮತದಾನದಂದು ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಅರ್ಹರು ಮತದಾನ ಮಾಡುವ ಜೊತೆಗೆ ಇತರರೂ ಮತದಾನ ಮಾಡಲು ಪ್ರೇರೇಪಿಸಬೇಕು ಎಂದರು.

ಮತದಾನ ಮಾಡುವುದು 18 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು. ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆ ಎಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೇ ಮತ ಚಲಾಯಿಸುತ್ತೇವೆ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.

ಜಿಪಂ ಸಿಇಒ ಎಸ್. ಭರತ್ ಮಾತನಾಡಿ, ಅರ್ಹರೆಲ್ಲರೂ ಮತದಾನ ಮಾಡುವುದರ ಜೊತೆಗೆ ಮತ್ತೊಬ್ಬರು ಮತದಾನ ಮಾಡಿರುವುದರ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು. ಪ್ರಜಾಪ್ರಭುತ್ವ ಹಬ್ಬದಲ್ಲಿ ಮತದಾನ ಮಾಡುವುದು ಅರ್ಹರೆಲ್ಲರ ಹಕ್ಕು ಆಗಿದೆ. ಮತದಾನ ಹೆಚ್ಚಳಕ್ಕೆ ಸ್ವೀಪ್ ಸಮಿತಿ ವತಿಯಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಶೇಕಡಾವಾರು ಮತದಾನ ಹೆಚ್ಚಳಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಕೋರಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ, ಜಿಪಂ ಉಪ ಕಾರ್ಯದರ್ಶಿ ಹಾಗೂ ಸ್ವೀಪ್ ಜಿಲ್ಲಾ ನೋಡಲ್ ಅಧಿಕಾರಿ ಸಿ.ಬಿ. ದೇವರಮನಿ, ಉಪ ವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ಚುನಾವಣಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಇತರರಿದ್ದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಆರೋಗ್ಯಕರ ಆಯುಷ್ ಪಾನಕ ಪರಿಚಯ ಕಾರ್ಯಕ್ರಮ ಜರುಗಿತು. ಚಿಂಚಾ ಪಾನಕ ವಿತರಣೆಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಚಾಲನೆ ನೀಡಿದರು. ಜಿಲ್ಲಾ ಆಯುಷ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.