ಸಾರಾಂಶ
ಕನ್ನಡಪ್ರಭ ವಾರ್ತೆ ನಂಜನಗೂಡು
ತಾಲೂಕಿನ ದೊಡ್ಡ ಕವಲಂದೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಬಿಡುಗಡೆ ಮಾಡಲಾದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇರೆಗೆ ಈ ಹಿಂದೆ ಕವಲಂದೆ ಗ್ರಾಪಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಡಿಒರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.ಹಾಲಿ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮಕಂದೂರು ಗ್ರಾಪಂನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪುರುಷೋತ್ತಮ್ ಅಮಾನತ್ತುಗೊಳಗಾದವರು, ಇವರು ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಪಂಚಾಯತಿಯಲ್ಲಿ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ 26.25 ಲಕ್ಷ ರು. ಅನುದಾನವನ್ನು ಶೌಚಾಲಯ ನಿರ್ಮಾಣದ ಬದಲಾಗಿ ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದ್ದು, ಜೊತೆಗೆ 2020-21 ಹಾಗೂ 2022-23ನೇ ಸಾಲಿನಲ್ಲಿ 8,73,796 ರು. ಗಳನ್ನು ನಿಯಮ ಬಾಹಿರವಾಗಿ ಪಂಚಾಯತಿ ಬಿಲ್ ಕಲೆಕ್ಟರ್ ಬ್ಯಾಂಕ್ ಖಾತೆಗೆ ವರ್ಗಾಯಿಸುವ ಮೂಲಕ ದುರುಪಯೋಗ ಪಡಿಸಿಕೊಂಡಿರುವುದು ಇಲಾಖಾ ತನಿಖೆಯಲ್ಲಿ ಮೇಲ್ನೋಟಕ್ಕೆ ಸಾಬೀತಾಗಿರುತ್ತದೆ, ಆದ್ದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮಡಿಕೇರಿ ತಾಲೂಕಿನ ಮಕಂದೂರು ಗ್ರಾಪಂನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪುರುಷೋತ್ತಮ್ ಅವರನ್ನು ಅಮಾನತ್ತು ಪಡಿಸಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.