ಸಿಎಂ ಮೇಲೆ ಮುಡಾ ಪ್ರಕರಣ ಆರೋಪ ಸರಿಯಲ್ಲ

| Published : Nov 24 2024, 01:48 AM IST

ಸಾರಾಂಶ

ಹೊನ್ನಾಳಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಗೆಲುವು ಸಿಕ್ಕಿದ್ದು, ಕ್ಷೇತ್ರಗಳ ಮತದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು.

ಹೊನ್ನಾಳಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಗೆಲುವು ಸಿಕ್ಕಿದ್ದು, ಕ್ಷೇತ್ರಗಳ ಮತದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು. ಶನಿವಾರ ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು. ಉಪಚುನಾವಣೆಗೂ ಮುನ್ನ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ವಿನಾಕಾರಣ ಮುಡಾ ಪ್ರಕರಣವನ್ನು ಮುನ್ನೆಲೆಗೆ ತಂದು ಸಿಎಂ ಸಿದ್ದರಾಮಯ್ಯ ಮೇಲೆ ಸುಳ್ಳು ಆರೋಪಗಳನ್ನು ಮಾಡಿದವು. ಆದರೆ ಮೂರು ಕ್ಷೇತ್ರಗಳ ಮತದಾರರು ವಿಪಕ್ಷಗಳ ಆರೋಪವನ್ನು ಸಾರಾಸಗಟಾಗಿ ಅಲ್ಲಗಳೆದು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಬಹುದೊಡ್ಡ ಗೆಲುವು ತಂದು ಕೊಟ್ಟಿದ್ದಾರೆ ಎಂದರು.

ಈ ಚುನಾವಣೆ ಮೂಲಕ ಜನರು ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು ಎಂಬ ಸಂದೇಶ ನೀಡಿದ್ದಾರೆ ಎಂದು ಅವರು, ರಾಜ್ಯ ಸರ್ಕಾರ ನೀಡಿದ ಪಂಚ ಗ್ಯಾರಂಟಿಗಳು ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಿವೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು, ಆದರೆ ಮೂರು ಉಪ ಚುನಾವಣೆಗಳಲ್ಲಿ ಮುಖಭಂಗ ಅನುಭವಿಸಿರುವ ಅವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ವಿಜಯೋತ್ಸವದಲ್ಲಿ ಪುರಸಭೆ ಅಧ್ಯಕ್ಷ ಮೈಲಪ್ಪ, ಹರಳಹಳ್ಳಿ ಎಚ್.ಬಿ.ಬೆನಕಪ್ಪ, ಎಚ್.ಡಿ.ವಿಜೇಂದ್ರಪ್ಪ, ಎಚ್.ಎ.ನರಸಿಂಹಪ್ಪ, ಸರಳಿನಮನೆ ರಾಜು, ಬೆನಕನಹಳ್ಳಿ ಪಿ.ವೀರಣ್ಣ, ಜಿ.ಪಂ.ಮಾಜಿ ಅಧ್ಯಕ್ಷ ಆರ್.ನಾಗಪ್ಪ, ಮಲ್ಲೇಶಪ್ಪ, ಎಚ್.ಬಿ.ಅಣ್ಣಪ್ಪ, ಪುರಸಭೆ ನಾಮಿನಿ ಸದಸ್ಯ ಮಾದಪ್ಪ, ಎಚ್.ಬಿ.ದೇವರಾಜ್, ತೊಳಕಿ ಮಾದಪ್ಪ ಸೇರಿದಂತೆ ಇನ್ನಿತರರಿದ್ದರು.