ಪ್ರತಿಷ್ಠಿತ ಎಸ್‌ಎಸ್ ಪಬ್ ಹಾಗೂ ಆರ್ಯ ಮ್ಯಾನ್ಷನ್ ಸೇರಿದಂತೆ ಕೆಲವು ಸ್ಥಳಗಳಲ್ಲಿ ಪೊಲೀಸ್ ಅಧಿಕಾರಿಗಳ ತಂಡ ತಪಾಸಣೆ ನಡೆಸಿದ್ದು, ಪಬ್‌ಗಳ ಪರವಾನಗಿ ಹಾಗೂ ನಿಯಮಾನುಸಾರ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲನೆ ನಡೆಸಿತು. ತಪಾಸಣೆ ವೇಳೆ ಪಬ್‌ನ ಪರವಾನಗಿ ತೋರಿಸುವಂತೆ ಎಸ್‌ಪಿ ಶುಭಾನ್ವಿತಾ ಅವರು ವ್ಯವಸ್ಥಾಪಕರಿಗೆ ಸೂಚಿಸಿದರು. ಈ ವೇಳೆ ಲೈಸೆನ್ಸ್ ಹಾಜರುಪಡಿಸಲು ವಿಳಂಬ ಮಾಡಿದ ವ್ಯವಸ್ಥಾಪಕರನ್ನು ತರಾಟೆಗೆ ತೆಗೆದುಕೊಂಡು, ಅಗತ್ಯ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಪಬ್, ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ನಿಯಮಬಾಹಿರ ಚಟುವಟಿಕೆಗಳು ನಡೆಯುತ್ತಿವೆಯೇ ಎಂಬುದನ್ನು ಪರಿಶೀಲಿಸುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಶುಭಾನ್ವಿತಾ ನೇತೃತ್ವದ ಪೊಲೀಸ್ ತಂಡ ಶನಿವಾರ ರಾತ್ರಿ ದಿಢೀರ್ ದಾಳಿ ನಡೆಸಿದೆ.

ನಗರದ ಪ್ರತಿಷ್ಠಿತ ಎಸ್‌ಎಸ್ ಪಬ್ ಹಾಗೂ ಆರ್ಯ ಮ್ಯಾನ್ಷನ್ ಸೇರಿದಂತೆ ಕೆಲವು ಸ್ಥಳಗಳಲ್ಲಿ ಪೊಲೀಸ್ ಅಧಿಕಾರಿಗಳ ತಂಡ ತಪಾಸಣೆ ನಡೆಸಿದ್ದು, ಪಬ್‌ಗಳ ಪರವಾನಗಿ ಹಾಗೂ ನಿಯಮಾನುಸಾರ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲನೆ ನಡೆಸಿತು. ತಪಾಸಣೆ ವೇಳೆ ಪಬ್‌ನ ಪರವಾನಗಿ ತೋರಿಸುವಂತೆ ಎಸ್‌ಪಿ ಶುಭಾನ್ವಿತಾ ಅವರು ವ್ಯವಸ್ಥಾಪಕರಿಗೆ ಸೂಚಿಸಿದರು. ಈ ವೇಳೆ ಲೈಸೆನ್ಸ್ ಹಾಜರುಪಡಿಸಲು ವಿಳಂಬ ಮಾಡಿದ ವ್ಯವಸ್ಥಾಪಕರನ್ನು ತರಾಟೆಗೆ ತೆಗೆದುಕೊಂಡು, ಅಗತ್ಯ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿದರು.ಪಬ್‌ನಲ್ಲಿ ೧೮ ವರ್ಷಕ್ಕಿಂತ ಕಡಿಮೆ ವಯಸ್ಸಿನ ಇಬ್ಬರು ವ್ಯಕ್ತಿಗಳು ಇದ್ದುದು ಪೊಲೀಸರ ಗಮನಕ್ಕೆ ಬಂದಿದ್ದು, ಅಪ್ರಾಪ್ತರಿಗೆ ಮದ್ಯ ಪೂರೈಸಲಾಗುತ್ತಿದೆಯೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಅಪ್ರಾಪ್ತರಿಗೆ ಮದ್ಯ ಪೂರೈಕೆಯಾಗುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಎಸ್‌ಪಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳದಲ್ಲೇ ಮದ್ಯ ಸೇವನೆಗೆ ಸಂಬಂಧಿಸಿದ ಪರೀಕ್ಷೆಯನ್ನೂ ನಡೆಸಿದರು. ಎಸ್‌ಪಿ ಹಾಗೂ ಡಿವೈಎಸ್‌ಪಿ ನೇತೃತ್ವದ ತಂಡ ದಾಳಿ ನಡೆಸಿದ್ದು, ಪಬ್‌ಗಳು ಮತ್ತು ಹೋಟೆಲ್‌ಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಲಾಗಿದೆ. ನಗರದ ಪಬ್, ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಪರವಾನಗಿ ನಿಯಮಗಳು, ಅಪ್ರಾಪ್ತರಿಗೆ ಮದ್ಯ ಪೂರೈಕೆ ನಿಷೇಧ ಸೇರಿದಂತೆ ಕಾನೂನುಬದ್ಧ ನಿಯಮಗಳ ಪಾಲನೆ ಕುರಿತು ಪೊಲೀಸರು ಪರಿಶೀಲನೆ ನಡೆಸಿರುವುದು ಗಮನ ಸೆಳೆದಿದೆ.