ಕುಷ್ಟಗಿ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಗೆ ₹6 ಸಾವಿರ ಲಂಚ ಪಡೆಯಲಾಗುತ್ತಿದೆ ಎಂಬ ಆರೋಪ ಸೇರಿದಂತೆ ವಿವಿಧ ಅಕ್ರಮಗಳ ಕುರಿತು ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ರೈತ ಪರ ಹೋರಾಟ ಸಂಘ ತಾಲೂಕು ಘಟಕದ ಪದಾಧಿಕಾರಿಗಳು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರಿಗೆ ಕುಷ್ಟಗಿಯಲ್ಲಿ ಮನವಿ ಸಲ್ಲಿಸಿದರು.
ಕುಷ್ಟಗಿ: ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಗೆ ₹6 ಸಾವಿರ ಲಂಚ ಪಡೆಯಲಾಗುತ್ತಿದೆ ಎಂಬ ಆರೋಪ ಸೇರಿದಂತೆ ತಾಲೂಕಿನ ಆಸ್ಪತ್ರೆ, ಅಂಗನವಾಡಿ ಹಾಗೂ ಕೋರಡಕೇರಾ ಗ್ರಾಮ ಪಂಚಾಯಿತಿಯಲ್ಲಿನ ವಿವಿಧ ಅಕ್ರಮಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಪರ ಹೋರಾಟ ಸಂಘ ತಾಲೂಕು ಘಟಕದ ಪದಾಧಿಕಾರಿಗಳು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರಿಗೆ ಕುಷ್ಟಗಿಯಲ್ಲಿ ಮನವಿ ಸಲ್ಲಿಸಿದರು.ಮನವಿ ಸಲ್ಲಿಸಿ ಮಾತನಾಡಿದ ಸಂಘಟನೆಯ ಪ್ರಮುಖರು, ಕುಷ್ಟಗಿ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ಸೇವೆಗಾಗಿ ಬಡ ಗರ್ಭಿಣಿಯರಿಂದ ಹಣ ಪಡೆಯಲಾಗುತ್ತಿದೆ. ಹಣ ನೀಡದವರಿಗೆ ಸೂಕ್ತ ಚಿಕಿತ್ಸೆ ನೀಡದೆ ಬೇರೆ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ವೈದ್ಯೆ ಡಾ. ಚಂದ್ರಕಲಾ ಅವರ ವಿರುದ್ಧ ಲಂಚ ಸ್ವೀಕಾರಕ್ಕೆ ಸಂಬಂಧಿಸಿದ ವೀಡಿಯೊಗಳು ಇದ್ದು, ಆರೋಪಗಳ ಕುರಿತು ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.
ತಾಲೂಕಿನ ಅಂಗನವಾಡಿಗಳಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗೆ ವಿತರಿಸಬೇಕಾದ ಪೌಷ್ಟಿಕ ಆಹಾರ ಅಕ್ರಮವಾಗಿ ಮಾರಾಟವಾಗುತ್ತಿದೆ ಮತ್ತು ಮಕ್ಕಳ ಆರೈಕೆ, ಸ್ವಚ್ಛತೆಯಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಅಧಿಕಾರಿಗಳು ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಆಗ್ರಹಿಸಿದರು.ಕೋರಡಕೇರಾ ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಬೀದಿದೀಪ ಹಾಗೂ ಚರಂಡಿ ವ್ಯವಸ್ಥೆಗಳ ಕೊರತೆಯಿದೆ. ಗ್ರಂಥಾಲಯ ನೇಮಕಾತಿಯಲ್ಲಿ ಸ್ವಜನಪಕ್ಷಪಾತ ಹಾಗೂ ಸ್ವಸಹಾಯ ಸಂಘಗಳ ಸೇರ್ಪಡೆಯಲ್ಲಿ ಅಕ್ರಮ ಎಸಗಿದ್ದಾರೆ ಎಂದು ಹೇಳಿದ ಅವರು, ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಸಂಘಟನೆಯ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ದೋಟಿಹಾಳ, ಜಿಲ್ಲಾಧ್ಯಕ್ಷ ಹೊನ್ನಪ್ಪ ತಳವಾರ, ಬಸವರಾಜ ತಿಮ್ಮಾಪುರ, ಶರಣಪ್ಪ ಮೇಗೂರು, ಮಾರುತಿ ಜರಗಡ್ಡಿ, ಬಸವರಾಜ ಗಾಣಿಗೇರ, ರಮೇಶ ಮೇಲಿನಮನಿ ಇದ್ದರು.ಪರಿಶೀಲಿಸುತ್ತೇನೆ: ಕುಷ್ಟಗಿಯಲ್ಲಿ ಇರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ಸಮಯದಲ್ಲಿ ₹6 ಸಾವಿರ ಕೊಡಬೇಕು, ಅಂಗನವಾಡಿಗಳಲ್ಲಿ ಪೌಷ್ಟಿಕ ಆಹಾರ ಸರಿಯಾಗಿ ನೀಡುತ್ತಿಲ್ಲ ಸೇರಿದಂತೆ ಅನೇಕ ವಿಷಯಗಳ ಕುರಿತು ಮನವಿ ನೀಡಿದ್ದು, ಈ ಕುರಿತು ಇಲಾಖೆಯ ಮುಖ್ಯಸ್ಥರ ಗಮನಕ್ಕೆ ತರುತ್ತೇನೆ. ಕುಷ್ಟಗಿಗೆ ಮತ್ತೊಮ್ಮೆ ಬಂದು ಪರಿಶೀಲಿಸುತ್ತೇನೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು.