ನಾಪೋಕ್ಲು ಸರಕಾರಿ ಕರ್ನಾಟಕ ಪಬ್ಲಿಕ್ ಶಾಲೆಗೆ ಸೇರಿದ ಜಾಗದಲ್ಲಿ ಶಾದಿ ಮಹಲ್ ನಿರ್ಮಾಣಗೊಳ್ಳುತ್ತಿರುವ ಕುರಿತು ಆರೋಪಗಳು ಕೇಳಿ ಬಂದಿದ್ದು, ಈ ಬಗ್ಗೆ ಶಾಸಕರು ಹಾಗೂ ಅಧಿಕಾರಿಗಳು ಸ್ಪಷ್ಟೀಕರಣ ನೀಡಬೇಕೆಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಒತ್ತಾಯಿಸಿದ್ದಾರೆ.

ಮಡಿಕೇರಿ : ನಾಪೋಕ್ಲು ಸರಕಾರಿ ಕರ್ನಾಟಕ ಪಬ್ಲಿಕ್ ಶಾಲೆಗೆ ಸೇರಿದ ಜಾಗದಲ್ಲಿ ಶಾದಿ ಮಹಲ್ ನಿರ್ಮಾಣಗೊಳ್ಳುತ್ತಿರುವ ಕುರಿತು ಆರೋಪಗಳು ಕೇಳಿ ಬಂದಿದ್ದು, ಈ ಬಗ್ಗೆ ಶಾಸಕರು ಹಾಗೂ ಅಧಿಕಾರಿಗಳು ಸ್ಪಷ್ಟೀಕರಣ ನೀಡಬೇಕೆಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಒತ್ತಾಯಿಸಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈಗಾಗಲೇ ಶಾದಿ ಮಹಲ್ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಇದು ಶಾಲೆಗೆ ಸೇರಿದ ಜಾಗ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಶಾಲೆಯ ಪ್ರಾಂಶುಪಾಲರು ಕೂಡ ಶಾಸಕರು ಹಾಗೂ ಅಧಿಕಾರಿಗಳ ಗಮನ ಸೆಳೆದು ಮನವರಿಕೆ ಮಾಡಿಕೊಟ್ಟಿದ್ದಾರೆ. ಆದರೆ ಯಾರಿಂದಲೂ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ ಎಂದು ತಿಳಿಸಿದ್ದಾರೆ.ಸರ್ಕಾರಿ ಶಾಲೆಗೆ ಸೇರಿದ ಜಾಗ ಶೈಕ್ಷಣಿಕ ಕಟ್ಟಡಗಳ ನಿರ್ಮಾಣ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗಿರಬೇಕು. ಶಾಲೆಯ ಜಾಗದಲ್ಲಿ ಶಾದಿ ಮಹಲ್ ಸೇರಿದಂತೆ ಬೇರೆ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅವಕಾಶವಿರುವುದಿಲ್ಲ. ಆದರೂ ಶಾದಿ ಮಹಲ್ ನಿರ್ಮಾಣಗೊಳ್ಳುತ್ತಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಬೇರೆ ಯಾವುದೋ ಜಾಗದ ಆರ್ ಟಿಸಿ ತೋರಿಸಿ ಸರ್ಕಾರದಿಂದ ಶಾದಿ ಮಹಲ್ ಗೆ ಮಂಜೂರಾತಿ ಪಡೆದಿರುವುದು ಕಂಡು ಬಂದಿದೆ. ಆದ್ದರಿಂದ ಸಂಬಂಧಿಸಿದ ಹಿರಿಯ ಅಧಿಕಾರಿಗಳು ಈ ಕುರಿತು ತನಿಖೆ ಕೈಗೊಂಡು ಸಾರ್ವಜನಿಕರಿಗೆ ಸ್ಪಷ್ಟೀಕರಣ ನೀಡಬೇಕು ಮತ್ತು ಶಾಲೆಗೆ ಸೇರಿದ ಜಾಗದಲ್ಲಿ ನಡೆಯುತ್ತಿರುವ ಶಾದಿ ಮಹಲ್ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.