ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಶಾಲಾ ಮಕ್ಕಳ ಮೇಲೆ ಜಾತಿ ನಿಂದನೆ ಹಾಗೂ ದೌರ್ಜನ್ಯ ಎಸಗಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ದೂರುದಾರರು ಮತ್ತು ಸಾಕ್ಷಿದಾರರಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿ ಕೆಬ್ಬೇಪುರ ಗ್ರಾಮದ ಪರಿಶಿಷ್ಟ ಜಾತಿ ಸಮುದಾಯದ ಒಕ್ಕೂಟದ ನೇತೃತ್ವದಲ್ಲಿ ಶನಿವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲಾಧಿಕಾರಿಗಳ ಪರವಾಗಿ ಶಿರಸ್ತೇದಾರರು ಮನವಿ ಸ್ವೀಕರಿಸಿದರು.

ಈ ಸಂಬಂಧ ಮಕ್ಕಳ ಪೋಷಕರ ಪರವಾಗಿ ಗ್ರಾಮದ ಕೃಷ್ಣಮೂರ್ತಿ ಅವರು ಬೇಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರ ಆಧಾರದ ಮೇಲೆ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪ್ರತಿಭಟನಾನಿರತರು ತಿಳಿಸಿದರು.

ಪ್ರಕರಣದ ಆರೋಪಿಗಳು ಗ್ರಾಮದಲ್ಲಿ ಬಹಿರಂಗವಾಗಿ ಓಡಾಡುತ್ತಿದ್ದು, ದೂರುದಾರರು ಹಾಗೂ ಪ್ರಮುಖ ಸಾಕ್ಷಿದಾರರಿಗೆ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದಾರೆ. ಪ್ರಕರಣ ಹಿಂಪಡೆಯುವಂತೆ ಒತ್ತಡ ಹೇರುತ್ತಿದ್ದಾರೆ. ಗ್ರಾಮದಲ್ಲಿ ದಲಿತ ಸಮುದಾಯದ ಜನಸಂಖ್ಯೆ ಕಡಿಮೆ ಇರುವುದರಿಂದ ಸಮುದಾಯದವರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಗ್ರಾಮದ ಶ್ರೀಧರ್ ಮಾತನಾಡಿ, ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತವಾದರೂ ಆರೋಪಿಗಳನ್ನು ಬಂಧಿಸದಿರುವುದು ದಲಿತ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯ. ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು. ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಬಿಎಸ್ಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬ್ಯಾಡಮೂಡ್ಲು ಬಸವಣ್ಣ ಮಾತನಾಡಿ, ಕೆಬ್ಬೇಪುರದ ಘಟನೆ ಕೇವಲ ಒಂದು ಗ್ರಾಮದ ಸಮಸ್ಯೆಯಲ್ಲ. ಇಂದಿಗೂ ದೇಶದಲ್ಲಿ ಅಸ್ಪೃಶ್ಯತೆ ಆಚರಣೆ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಅಸ್ಪೃಶ್ಯತೆ ಆಚರಿಸುವವರ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಆಗ ಮಾತ್ರ ದಲಿತರ ಮೇಲಿನ ದೌರ್ಜನ್ಯ ತಡೆಯಲು ಸಾಧ್ಯ ಎಂದರು.

ಬಿಎಸ್ಪಿ ಜಿಲ್ಲಾಧ್ಯಕ್ಷ ಬಾ.ಮ.ಕೃಷ್ಣಮೂರ್ತಿ, ಬೈರಲಿಂಗು, ಕೃಷ್ಣಯ್ಯ, ಕೆಬ್ಬೇಪುರ ಗ್ರಾಮದ ಯಜಮಾನರು, ಸಂಪತ್ತು, ಸುರೇಶ್, ಮಹದೇವ, ತಮ್ಮಣ್ಣ, ಮಹದೇವಯ್ಯ, ಶಿವಮೂರ್ತಿ, ಹರೀಶ್ ಕೆ.ಎಂ., ಸುನಿಲ್ ಕೆ.ಆರ್., ದೊಡ್ಡಯ್ಯ, ರಂಗನಾಥ್, ನಾಗೇಂದ್ರ, ನಾಗೇಶ್, ರವಿಕುಮಾರ್, ಕೃಷ್ಣಮೂರ್ತಿ, ಗ್ರಾಮದ ಪರಿಶಿಷ್ಟ ಜಾತಿ ಸಮುದಾಯದವರು ಭಾಗವಹಿಸಿದ್ದರು.