ಸಾರಾಂಶ
ಶಿರಸಿ:
ಪರಿಶಿಷ್ಟರ ಮತ್ತು ದಲಿತರ ಅನುದಾನವನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಘಟಕದಿಂದ ನಗರ ಅಂಚೆ ವೃತ್ತದ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಾಜಿ ಶಾಸಕ ಸುನೀಲ ಹೆಗಡೆ, ದಲಿತರು ಮತ್ತು ಪರಿಶಿಷ್ಟರಿಗೆ ಮೀಸಲಿಟ್ಟ ₹ 11 ಸಾವಿರ ಕೋಟಿ ಅನುದಾನವನ್ನು ಅಲ್ಪಸಂಖ್ಯಾತರ ಓಲೈಕೆಗೆ ಬಳಕೆ ಮಾಡಿಕೊಳ್ಳುತ್ತಿದೆ. ಅಂದಿನ ಕಾಂಗ್ರೆಸ್ ಪ್ರಧಾನಿ ದಿ. ಜವಾಹಾಲ್ ನೆಹರು ದಲಿತರಿಗೆ ಮತ್ತು ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ನೀಡಿದಾಗ ವಿರೋಧ ಮಾಡಿದ್ದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕೇವಲವಾಗಿ ಕಾಂಗ್ರೆಸ್ ಸರ್ಕಾರ ನಡೆಸಿಕೊಂಡು, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿಲಿಲ್ಲ. ಈಗ ದಲಿತರ ಮತ್ತು ಪರಿಶಿಷ್ಟ ವರ್ಗದವರ ಹಣವನ್ನು ಅಲ್ಪಸಂಖ್ಯಾತರಿಗೆ ನೀಡಲು ಹೊರಟಿದೆ. ಇದನ್ನು ನಾವೆಲ್ಲರೂ ವಿರೋಧಿಸಬೇಕಿದೆ ಎಂದರು.ಅಲ್ಪಸಂಖ್ಯಾತರ ಕಲ್ಯಾಣಕ್ಕೆ ₹ ೧೦ ಸಾವಿರ ಕೋಟಿ ಅನುದಾನ ಮೀಸಲಿಡುತ್ತೇವೆ ಎಂದು ಹೇಳಿ, ಭಾರತದ ಸನಾತನ ಹಿಂದೂ ಸಂಸ್ಕೃತಿಯನ್ನು ಒಡೆಯುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ನಾವು ದಲಿತರ ಪರವಾಗಿದ್ದೇವೆ ಎಂದು ತೋರಿಕೆಗಾಗಿ ಹೇಳುತ್ತಾರೆಯೇ ಹೊರತು ನಿಜವಾಗಿಯೂ ದಲಿತರ ಅಭಿವೃದ್ಧಿ ಮಾಡುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ನಿಲುವನ್ನು ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಎಸ್ಸಿ ಮೋರ್ಚಾ ಅಧ್ಯಕ್ಷ ನಂದನ ಬೋರ್ಕರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗುರುಪ್ರಸಾದ ಹೆಗಡೆ, ಪ್ರಶಾಂತ ನಾಯ್ಕ ಕುಮಟಾ, ಶಿರಸಿ ಗ್ರಾಮೀಣ ಮಂಡಲದ ಅಧ್ಯಕ್ಷೆ ಉಷಾ ಹೆಗಡೆ, ನಗರಸಭೆ ಸದಸ್ಯರಾದ ಗಣಪತಿ ನಾಯ್ಕ, ವೀಣಾ ಶೆಟ್ಟಿ ಇದ್ದರು.