ಸಾರಾಂಶ
ಸೂಕ್ತ ಅಧ್ಯಯನ ನಡೆಸದೆ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಸರ್ದಾರ್ ಸೇವಾ ಲಾಲ್ ಸ್ವಾಮೀಜಿ ನೇತೃತ್ವದಲ್ಲಿ ಸೋಮವಾರ ಬಂಜಾರ ಸಮುದಾಯದ ಧರ್ಮ ಗುರುಗಳು, ಮುಖಂಡರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಸೂಕ್ತ ಅಧ್ಯಯನ ನಡೆಸದೆ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಸರ್ದಾರ್ ಸೇವಾ ಲಾಲ್ ಸ್ವಾಮೀಜಿ ನೇತೃತ್ವದಲ್ಲಿ ಸೋಮವಾರ ಬಂಜಾರ ಸಮುದಾಯದ ಧರ್ಮ ಗುರುಗಳು, ಮುಖಂಡರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.ವೈಜ್ಞಾನಿಕವಾಗಿ ಜಾತಿಗಣತಿ ನಡೆಸದೆ ತರಾತುರಿಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು ಸರ್ಕಾರ ಮುಂದಾಗುತ್ತಿದೆ. ಅವೈಜ್ಞಾನಿಕವಾಗಿ ಮೀಸಲಾತಿ ನೀಡುವುದರಿಂದ ಬಂಜಾರ, ಕೊರಮ, ಕೊರಚ, ಭೋವಿ ಸಮುದಾಯಗಳಿಗೆ ಅನ್ಯಾಯವಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಒಳ ಮೀಸಲಾತಿ ಜಾರಿಗೊಳಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸರ್ಕಾರದ ಪ್ರತಿನಿಧಿಗಳಾಗಿ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಅಧ್ಯಕ್ಷ ಡಾ.ಎ.ಆರ್.ಗೋವಿಂದಸ್ವಾಮಿ ಮತ್ತಿತರರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.