ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ರಿಯಲ್ ಎಸ್ಟೇಟ್ ಉದ್ಯಮಿ. ಈತನಿಗೆ ಶಿಕ್ಷಕರ ಕುಂದು ಕೊರತೆಗಳ ಬಗ್ಗೆ ಜ್ಞಾನವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಗುರುವಾರ ಲೇವಡಿ ಮಾಡಿದರು.ಪಟ್ಟಣದ ಶಿವಪುರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಪರ ಪ್ರಚಾರ ಕಾರ್ಯಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಕೇವಲ ಶಿಕ್ಷಕರ ಸಮಸ್ಯೆ ಮಾತ್ರವಲ್ಲದೆ ರೈತರ ಸಮಸ್ಯೆಗಳ ಬಗ್ಗೆಯೂ ಪರಿಷತ್‌ನಲ್ಲಿ ಪ್ರಸ್ತಾಪ ಮಾಡಿದ್ದಾರೆ. ಅಲ್ಲದೇ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಪರಿಹಾರ ಹುಡುಕುವ ಪ್ರಯತ್ನ ಮಾಡಿದ್ದಾರೆ ಎಂದರು.
ಮೈತ್ರಿ ಅಭ್ಯರ್ಥಿ ವಿವೇಕಾನಂದನಿಗೆ ಶಿಕ್ಷಕರ ಸಮಸ್ಯೆಗಳ ಬಗ್ಗೆ ಎಳ್ಳಷ್ಟೂ ಪರಿಜ್ಞಾನವಿಲ್ಲ. ಚುನಾವಣೆಯಲ್ಲಿ ಈತನನ್ನು ಬೆಂಬಲಿಸುವುದರಿಂದ ಶಿಕ್ಷಕರ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ವ್ಯಂಗ್ಯವಾಡಿದರು.ಸಂಸದೆ ಸುಮಲತಾ ರಾಜ್ಯ ರಾಜಕಾರಣ ತೊರೆದು ರಾಷ್ಟ್ರ ರಾಜಕಾರಣಕ್ಕೆ ಹೋಗುವ ಇಚ್ಛೆ ವ್ಯಕ್ತಪಡಿಸಿರುವುದು ನನಗೆ ಗೊತ್ತಿಲ್ಲ. ಅವರ ಬಗ್ಗೆ ಮಾತನಾಡಲು ನಾನು ಮಾಜಿ ಸಿಎಂ ಕುಮಾರಸ್ವಾಮಿ ಅಥವಾ ಮಾಜಿ ಶಾಸಕ ಪುಟ್ಟರಾಜು ಅಲ್ಲ. ಹೀಗಾಗಿ ಸಂಬಂಧವಿಲ್ಲದ ವ್ಯಕ್ತಿಗಳ ಬಗ್ಗೆ ನಾನು ಯಾವುದೇ ಟೀಕೆ ಟಿಪ್ಪಣಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ವೇಳೆ ಶಾಸಕ ಕೆ.ಎಂ.ಉದಯ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಉಪಾಧ್ಯಕ್ಷ ಅಜ್ಜಹಳ್ಳಿ ರಾಮಕೃಷ್ಣ, ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಭಾರತೀನಗರ ಬ್ಲಾಕ್ ಅಧ್ಯಕ್ಷ ಶಿವಲಿಂಗೇಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ. ಜೋಗಿಗೌಡ, ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆಲೂರು ರವಿ, ಪುರಸಭಾ ಮಾಜಿ ಅಧ್ಯಕ್ಷ ರಾದ ಎಂ.ಸಿ.ಬಸವರಾಜು, ಎಂ.ಪಿ.ಅಮರಬಾಬು, ಸದಸ್ಯ ಸಚಿನ್, ಮಾಜಿ ಸದಸ್ಯ ಡಾಬಾ ಮಹೇಶ್, ಕಾಂಗ್ರೆಸ್ ಪಕ್ಷದ ಮುಖಂಡರು ಇದ್ದರು.