ಸಾರಾಂಶ
ಮಂಡ್ಯ ವಿಶ್ವವಿದ್ಯಾಲಯವನ್ನು ಮೈಸೂರು ವಿಶ್ವವಿದ್ಯಾಲಯದೊಂದಿಗೆ ವಿಲೀನಗೊಳಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಮಂಡ್ಯ : ಮಂಡ್ಯ ವಿಶ್ವವಿದ್ಯಾಲಯವನ್ನು ಮೈಸೂರು ವಿಶ್ವವಿದ್ಯಾಲಯದೊಂದಿಗೆ ವಿಲೀನಗೊಳಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ನೇತೃತ್ವದಲ್ಲಿ ಎರಡೂ ಪಕ್ಷಗಳ ಮುಖಂಡರು-ಕಾರ್ಯಕರ್ತರು ನಗರದ ಸರ್ ಎಂ.ವಿಶ್ವೇಶ್ವರಯ್ಯ ವೃತ್ತದ ಬಳಿ ಪ್ರತಿಭಟನಾ ಧರಣಿ ನಡೆಸಿದರು.
ಹಣಕಾಸಿನ ಕೊರತೆಯಿಂದ ವಿಶ್ವವಿದ್ಯಾಲಯ ಮುಚ್ಚುತ್ತಿರುವುದಕ್ಕೆ ಪ್ರತಿಯಾಗಿ ದೋಸ್ತಿ ಪಕ್ಷಗಳ ನಾಯಕರು ಸ್ಥಳದಲ್ಲೇ ಹಣ ಸಂಗ್ರಹಿಸಿ ಭಿಕ್ಷೆ ಬೇಡಿಯಾದರೂ ಮಂಡ್ಯ ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳುವುದಕ್ಕೆ ಹೋರಾಟ ನಡೆಸುವುದಾಗಿ ಪ್ರತಿಜ್ಞೆ ಮಾಡಿದರು.
ಮೈಸೂರು ವಿಶ್ವವಿದ್ಯಾಲಯದೊಂದಿಗೆ ಮಂಡ್ಯ ವಿಶ್ವವಿದ್ಯಾಲಯವನ್ನು ವಿಲೀನಗೊಳಿಸುವ ಸರ್ಕಾರದ ನಿರ್ಧಾರ ಮಂಡ್ಯ ಅಸ್ಮಿತೆಗೆ ಧಕ್ಕೆ ತಂದಿದೆ ಎಂದು ಕಿಡಿದರು. ಬಿಜೆಪಿ ಅವಧಿಯಲ್ಲಿ ನೀಡಿದ ವಿಶ್ವವಿದ್ಯಾಲಯವನ್ನು ಕಸಿದುಕೊಳ್ಳುವುದಕ್ಕೆ ಕಾಂಗ್ರೆಸ್ ಸಂಚು ನಡೆಸಿದೆ. ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಮಂಡ್ಯ ವಿಶ್ವವಿದ್ಯಾಲಯದ ವಿಲೀನ ನಿರ್ಧಾರವನ್ನು ಸರ್ಕಾರ ಈ ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಎಚ್ಚರಿಸಿದರು.
ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವಿಧಾನ ಪರಿಷತ್ ಸದಸ್ಯ ವಿವೇಕಾನಂದ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಕೆ.ಸಿ.ನಾರಾಯಣಗೌಡ, ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್. ಇಂದ್ರೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಮುಖಂಡರಾದ ಡಾ.ಸಿದ್ದರಾಮಯ್ಯ, ಬಿ.ಆರ್.ರಾಮಚಂದ್ರ, ಮಂಗಳಾ, ಕನ್ನಡ ಸೇನೆ ಮಂಜುನಾಥ್, ಅಶೋಕ್ ಜಯರಾಂ, ಎಚ್.ಆರ್.ಅರವಿಂದ್, ಭೀಮೇಶ್, ಅಂಬುಜಮ್ಮ, ಮಂಗಳಾ, ಸಚ್ಚಿದಾನಂದ, ಸಿ.ಟಿ.ಮಂಜುನಾಥ್, ವಿವೇಕ್, ಶ್ರೀಧರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.